ಮಂಗಳವಾರ, ಮಾರ್ಚ್ 31, 2020
19 °C
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆ

ನಿರ್ಬಂಧ ಮುಂದುವರಿಸಬೇಕೆ, ಬೇಡವೆ ಎಂದು ವಾರದ ನಂತರ ತೀರ್ಮಾನ: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ರಾಜ್ಯದಲ್ಲಿ ಕೊರೊನಾ ವೈರಾಣು ಸೋಂಕು ಹರಡದಂತೆ ತಡೆಗಟ್ಟಲು ಸರ್ಕಾರದಿಂದ ಅಗತ್ಯವಾದ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪೂರ್ವಭಾವಿ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ರಾಜ್ಯದಾದ್ಯಂತ ಮಾಲ್‌, ಚಿತ್ರಮಂದಿರ, ಸಭೆ, ಸಮಾರಂಭ, ಜಾತ್ರೆ, ಮದುವೆ, ಸಂತೆ, ಸಮಾವೇಶ, ಪ್ರದರ್ಶನ, ಕ್ರೀಡಾಕೂಟಗಳನ್ನು ಬಂದ್‌ ಮಾಡಲಾಗಿದೆ. ಈ ನಿರ್ಬಂಧವನ್ನು ಮುಂದುವರಿಸಬೇಕೇ, ಬೇಡವೇ ಎನ್ನುವ ಬಗ್ಗೆಯೂ ವಾರದ ನಂತರವಷ್ಟೇ ನಿರ್ಧರಿಸಲಾಗುವುದು’ ಎಂದು ಸ್ಪಷ್ಟಪಡಿಸಿದರು. ‘ಜನರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಎಲ್ಲರೂ ಸಹಕರಿಸಬೇಕು’ ಎಂದು ಕೋರಿದರು.

‘ರಾಜ್ಯದ ಆರು ಜನರಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ‌. ನೂರು ಜನ ಶಂಕಿತರನ್ನು ಗುರುತಿಸಲಾಗಿದೆ. ಈ ಎಲ್ಲರ ಮೇಲೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನಿಗಾ ವಹಿಸಿದೆ. ಶಾಲಾ– ಕಾಲೇಜುಗಳನ್ನು ವಾರದವರೆಗೆ ಬಂದ್‌ ಮಾಡಿಸಲಾಗಿದೆ. ಕೆಲವು ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ’ ಎಂದು ತಿಳಿಸಿದರು.

‘ಕಲಬುರ್ಗಿಯಲ್ಲೂ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆರೋಗ್ಯ ಸಚಿವ ಬಿ.ಶ್ರೀರಾಮುಲು ಅಲ್ಲೇ ಮೊಕ್ಕಾಂ ಹೂಡಿ, ಮೇಲುಸ್ತುವಾರಿ ವಹಿಸಿದ್ದಾರೆ. ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಒಂದು ವಾರದ ನಂತರ ಪರಿಸ್ಥಿತಿಯನ್ನು ಅವಲೋಕಿಸಿ ಮುಂದೆ ಕೈಗೊಳ್ಳಬಹುದಾದ  ಕಾರ್ಯಚಟುವಟಿಕೆಗಳ ಬಗ್ಗೆ ನಿರ್ಧಾರ ಮಾಡಲಾಗುವುದು’ ಎಂದರು.

‘ಕೊರೊನಾ ನಿಯಂತ್ರಣದಲ್ಲಿ ಗೃಹ ಇಲಾಖೆಯು ಮಹತ್ತರವಾದ ಜವಾಬ್ದಾರಿ ನಿರ್ವಹಿಸುತ್ತಿದೆ. ಎಲ್ಲ ವಿಮಾನ ನಿಲ್ದಾಣಗಳಲ್ಲಿ ವಿದೇಶಿ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಖಾಸಗಿ ವಾಹನಗಳಲ್ಲಿ ಬರುವವರನ್ನೂ ತಪಾಸಣೆಗೆ ಒಳಪಡಿಸುವಂತೆ ಸೂಚಿಸಲಾಗಿದೆ. ಈ ವಿಷಯದಲ್ಲಿ ವಿವಿಧ ಇಲಾಖೆಗಳ ಸಮನ್ವಯ ಮತ್ತು ಜನರ ಸಹಕಾರ ಉತ್ತಮವಾಗಿದೆ’ ಎಂದು ತಿಳಿಸಿದರು.

‘ಜನದಟ್ಟಣೆ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿಗೆ ಮಾಸ್ಕ್‌ (ಮುಖಗವಸು)ಗಳನ್ನು ನೀಡಲಾಗುವುದು’ ಎಂದು ಹೇಳಿದರು.

ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಶಾಸಕರಾದ ಅಭಯ ‍ಪಾಟೀಲ, ಅನಿಲ ಬೆನಕೆ, ಬಿಜೆಪಿ ರಾಜ್ಯ ವಕ್ತಾರ ಎಂ.ಬಿ. ಝಿರಲಿ, ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಬುಡಾ ಅಧ್ಯಕ್ಷ ಗೂಳಪ್ಪ ಹೊಸಮನಿ, ಮುಖಂಡ ಶಶಿಕಾಂತ ನಾಯಕ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು