ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲಾ ವಿವಿಗಳಿಗೆ 'ಏಕರೂಪ ಕಾಯ್ದೆ' ಕುರಿತ ಮಸೂದೆ ಮರುಪರೀಶೀಲನೆಗೆ ಸಮಿತಿ

Last Updated 15 ಏಪ್ರಿಲ್ 2020, 9:51 IST
ಅಕ್ಷರ ಗಾತ್ರ

ಬೆಂಗಳೂರು: ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯಗಳಿಗೂ ಏಕರೂಪದ ಕಾಯ್ದೆ ಜಾರಿಗೊಳಿಸುವ ಸಂಬಂಧ ರೂಪಿಸಲಾಗಿರುವ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಮಸೂದೆ 2017 ಅನ್ನು ಪರಿಷ್ಕರಿಸಲು ತೀರ್ಮಾನಿಸಿರುವ ರಾಜ್ಯ ಸರ್ಕಾರ, ಈ ನಿಟ್ಟಿನಲ್ಲಿ ಸಮಿತಿ ರಚಿಸಿ ಆದೇಶ ಹೊರಡಿಸಿದೆ.

ಉನ್ನತ ಶಿಕ್ಷಣ ಖಾತೆಯನ್ನೂ ಹೊಂದಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ನಿರ್ದೇಶನದಂತೆ ಸಮಿತಿ ರಚಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಡಾ.ವಾಸುದೇವ ಅತ್ರೆ ಅವರು ಸಮಿತಿಯ ಅಧ್ಯಕ್ಷರಾಗಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಬಿ.ತಿಮ್ಮೇಗೌಡ, ಐಐಐಟಿ ಬೆಂಗಳೂರಿನ ನಿರ್ದೇಶಕ ಪ್ರೊ.ಸಡಗೋಪನ್‌, ಸೃಷ್ಠಿ ಇನ್‌ಸ್ಟಿಟ್ಯೂಟ್‌ ಆಫ್‌ ಆರ್ಟ್‌ ಅಂಡ್‌ ಡಿಸೈನ್‌ ಟೆಕ್ನಾಲಜಿಯ ಗೀತಾ ನಾರಾಯನ್‌ ಸೃಷ್ಠಿ, ಸೆಂಟರ್‌ ಫಾರ್‌ ಎಜುಕೇಷನಲ್‌ ಅಂಡ್‌ ಸೋಷಿಯಲ್‌ ಸ್ಟಡೀಸ್‌ನ ಅಧ್ಯಕ್ಷ ಡಾ.ಎಂ.ಕೆ ಶ್ರೀಧರ್‌ ಸಮಿತಿಯ ಸದಸ್ಯರಾಗಿದ್ದು, ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಸ್‌.ಎಂ ಕೋರಿ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.

ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲ ಸರ್ಕಾರಿ ವಿಶ್ವವಿದ್ಯಾಲಯಗಳಿಗೆ ಸಂಬಂಧಿಸಿದಂತೆ ಹಾಲಿ ಇರುವ ಕಾಯ್ದೆಗಳ ಬದಲಾಗಿ ಸಮಗ್ರ ಮತ್ತು ಏಕರೂಪ ಕಾಯ್ದೆ ಜಾರಿಗೊಳಿಸುವ ಬಗ್ಗೆ "ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಮಸೂದೆ- 2017"ಕ್ಕೆ ವಿಧಾನಮಂಡಲದ ಉಭಯ ಸದನಗಳಲ್ಲಿ ಒಪ್ಪಿಗೆ ಪಡೆದು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು. ಆದರೆ, ರಾಜ್ಯಪಾಲರು ಇದನ್ನು ರಾಷ್ಟ್ರಪತಿಗಳಿಗೆ ಕಳುಹಿಸಿಕೊಟ್ಟಿದ್ದರು.

ಕಾಯ್ದೆಯನ್ನು ಮರಾಮರ್ಶೆ ನಡೆಸಿದ ಕೇಂದ್ರ ಗೃಹ ಸಚಿವಾಲಯ ಅದರಲ್ಲಿರುವ 9 ಅಂಶಗಳ ಬಗ್ಗೆ ರಾಜ್ಯ ಸರ್ಕಾರದಿಂದ ಸ್ಪಷ್ಟೀಕರಣ ಕೋರಿತ್ತು. ಅಲ್ಲದೆ, ಮಸೂದೆಗೆ ಇನ್ನೂ ಕೆಲವು ಅಂಶಗಳನ್ನು ಸೇರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಹೀಗಾಗಿ ಕೇಂದ್ರ ಸರ್ಕಾರ ಸೂಚಿಸಿರುವ ಅಂಶಗಳ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳುವುದರ ಜತೆಗೆ ಕೆಲವೊಂದು ಅಂಶಗಳನ್ನು ಸೇರಿಸಬೇಕಾಗಿರುವುದರಿಂದ ಮಸೂದೆಯ ಸಮಗ್ರ ಪುನರ್‌ ಪರಿಶೀಲಿಸುವ ಅಗತ್ಯ ಇದೆ. ಈ ಹಿನ್ನೆಲೆಯಲ್ಲಿ ಡಾ.ವಾಸುದೇವ ಅತ್ರೆ ನೇತೃತ್ವದ ಸಮಿತಿ ರಚಿಸಲಾಗಿದ್ದು, ವರದಿ ಸಲ್ಲಿಸಲು ಸಮಿತಿಗೆ ಎರಡು ತಿಂಗಳ ಕಾಲಾವಕಾಶ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT