ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋಷಕರ ಅಭಿಪ್ರಾಯ ಆಧರಿಸಿ ಶಾಲೆ ತೆರೆಯುವ ಬಗ್ಗೆ ತೀರ್ಮಾನ: ಸುರೇಶ್ ಕುಮಾರ್

Last Updated 29 ಜೂನ್ 2020, 13:32 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಪೋಷಕರು ಕೊರೊನಾ ವೈರಸ್‌ ಸೋಂಕಿನ ಭಯದಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ, ರಾಜ್ಯದಾದ್ಯಂತ ಪೋಷಕರ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಶಾಲೆ ತೆರೆಯುವ ವಿಚಾರವಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದುಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಹೇಳಿದರು.

ಜಿಲ್ಲೆಯಲ್ಲಿ ಸೋಮವಾರ ವಿವಿಧ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಶಿಕ್ಷಕರಿಗೆ ಪೋಷಕರು ಮತ್ತು ಎಸ್‌ಡಿಎಂಸಿ ಸದಸ್ಯರ ಸಭೆ ನಡೆಸಿ ಶಾಲೆ ತೆರೆಯುವ ಕುರಿತು ಅಭಿಪ್ರಾಯ ಸಂಗ್ರಹಿಸಲು ಸೂಚಿಸಲಾಗಿತ್ತು. ಪೋಷಕರ ಅಭಿಪ್ರಾಯಗಳನ್ನು ಪರಿಶೀಲಿಸಿ, ಜುಲೈ 5ರ ನಂತರ ಶಾಲೆಗಳನ್ನು ಯಾವಾಗ ಪ್ರಾರಂಭ ಮಾಡಬೇಕು ಎನ್ನುವ ಕುರಿತು ತೀರ್ಮಾನ ಪ್ರಕಟಿಸಲಾಗುತ್ತದೆ’ ಎಂದು ತಿಳಿಸಿದರು.

‘ಈ ಬಾರಿ ಕೊರೊನಾ ಕಾಣಿಸಿಕೊಂಡ ಕಾರಣಕ್ಕೆ ಶುಲ್ಕ ಹೆಚ್ಚಿಸದಂತೆ ಖಾಸಗಿ ಶಾಲೆಗಳಿಗೆ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ. ಸುತ್ತೋಲೆ ಉಲಂಘಿಸುವವರ ವಿರುದ್ಧ ಪೋಷಕರು ನಮ್ಮ ಸಹಾಯವಾಣಿಗೆ ದೂರು ನೀಡಿದರೆ ಅಂತಹ ಶಾಲೆಗಳ ವಿರುದ್ಧ ಕ್ರಮ ಜರುಗಿಸುತ್ತೇವೆ’ ಎಂದರು.

‘ಶುಲ್ಕ ಏರಿಕೆ ಮಾಡಿರುವ ಶಾಲೆಗಳ ಕುರಿತು ಈಗಾಗಲೇ 1,150 ದೂರುಗಳು ಬಂದಿವೆ. ಈ ಪೈಕಿ 450 ಶಾಲೆಗಳ ವಿರುದ್ಧ ಕ್ರಮ ಜರುಗಿಸಿದ್ದೇವೆ. ಆ ಶಾಲೆಗಳು ಕೂಡ ಏರಿಕೆ ಮಾಡಿದ್ದ ಶುಲ್ಕವನ್ನು ಇಳಿಕೆ ಮಾಡಿವೆ. ಉಳಿದ ಶಾಲೆಗಳ ವಿರುದ್ಧ ಕ್ರಮ ಜರುಗಿಸುತ್ತೇವೆ’ ಎಂದು ಹೇಳಿದರು.

‘ಎಲ್‌ಕೆಜಿ ಹಾಗೂ ಯುಕೆಜಿ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಶಿಕ್ಷಣ ಬೇಡ. ಬದಲು ಆ ಮಕ್ಕಳನ್ನು ಹೇಗೆ ನೋಡಿಕೊಳ್ಳಬೇಕು ಎನ್ನುವ ವಿಚಾರವಾಗಿ ವಾರಕ್ಕೆ ಎರಡು ದಿನ ಶಾಲೆಯವರು ಪಾಲಕರೊಂದಿಗೆ ಸಂವಾದ ನಡೆಸಲು ಸೂಚಿಸಲಾಗಿದೆ’ ಎಂದು ತಿಳಿಸಿದರು.

‘ಕೇಂದ್ರ ಸರ್ಕಾರದ ಮಾಗಸೂಚಿ ಮತ್ತು ಶಿಕ್ಷಣ ತಜ್ಞರ ಸಮಿತಿ ನೀಡುವ ವರದಿ ಆಧರಿಸಿ ಪ್ರಾಥಮಿಕ‌ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳ ಬೋಧನೆ ವಿಚಾರವಾಗಿ ಗೊಂದಲವಿಲ್ಲದಂತಹ ತೀರ್ಮಾನ ತೆಗೆದುಕೊಳ್ಳುತ್ತೇವೆ. ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ‌ ಸುಸೂತ್ರವಾಗಿ ನಡೆಯುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ವಿದ್ಯಾರ್ಥಿಗಳ ಗೈರುಹಾಜರಿಯಲ್ಲಿ‌ ಅಷ್ಟೊಂದು‌ ವ್ಯತ್ಯಾಸ‌ವಾಗಿಲ್ಲ’ ಎಂದರು.

ಸುರೇಶ್ ಕುಮಾರ್ ಅವರು ನಗರದ ಬಿ.ಬಿ ರಸ್ತೆಯಲ್ಲಿರುವ ಸರ್ಕಾರಿ ಪ್ರೌಢ ಶಾಲೆ, ಬಿಜಿಎಸ್, ನ್ಯೂ ಹೊರೈಜಾನ್, ಸಂತ‌ ಜೋಸೆಫ್ ಬಾಲಕಿಯರ ಪ್ರೌಢಶಾಲೆ ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸುವ ಜತೆಗೆ ವಿದ್ಯಾರ್ಥಿಗಳನ್ನು ಮಾತನಾಡಿಸಿ ಅಭಿಪ್ರಾಯ ತಿಳಿದುಕೊಂಡರು.

ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಜಿಲ್ಲಾಧಿಕಾರಿ ಆರ್. ಲತಾ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ ಚಿಕ್ಕನರಸಿಂಹಯ್ಯ, ಮುಖ್ಯಕಾರ್ಯನಿರ್ವಹಣಾಧಿಕಾರಿ ಬಿ. ಫೌಜಿಯಾ ತರನ್ನುಮ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್‌.ಜಿ.ನಾಗೇಶ್ ಈ ಸಂದರ್ಭದಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT