ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆ ಆರಂಭ ಕುರಿತು ಜೂನ್ 10-12ರ ಅವಧಿಯಲ್ಲಿ ಪೋಷಕರಿಂದ ಅಭಿಪ್ರಾಯ ಸಂಗ್ರಹ

Last Updated 2 ಜೂನ್ 2020, 5:35 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ವೈರಸ್ ಲಾಕ್‌ಡೌನ್‌ನಿಂದಾಗಿ ಮುಚ್ಚಲಾಗಿದ್ದ ಶಾಲಾ-ಕಾಲೇಜುಗಳನ್ನು ಇದೀಗ ತೆರೆಯಬೇಕೆ-ಬೇಡವೆ ಎನ್ನುವ ಕುರಿತು ಚರ್ಚೆಗಳು ಆರಂಭವಾಗಿವೆ. ಈ ಮಧ್ಯೆ ಶಾಲೆಗಳನ್ನು ತೆರೆಯುವ ಕುರಿತು ಶಿಕ್ಷಣ ಇಲಾಖೆಯು ಜೂನ್ 10 ರಿಂದ 12ರ ಅವಧಿಯಲ್ಲಿ ಪೋಷಕರಿಂದ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದೆ.

ಈ ಕುರಿತು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರದ ಗೃಹ ಸಚಿವಾಲಯ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ "ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಪುನರಾರಂಭ" ಮಾಡುವ ಕುರಿತು ಈ ಕೆಳಕಂಡಂತೆ ಸೂಚಿಸಿದೆ.

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಶಾಲೆಗಳು, ಕಾಲೇಜುಗಳು, ಶೈಕ್ಷಣಿಕ/ತರಬೇತಿ/ತರಬೇತಿ ಸಂಸ್ಥೆಗಳು... ಇತ್ಯಾದಿಗಳನ್ನು ತೆರೆಯಲಾಗುತ್ತದೆ. ರಾಜ್ಯ ಸರ್ಕಾರವು ಪೋಷಕರು ಮತ್ತು ಇತರ ಮಧ್ಯಸ್ಥಗಾರರೊಂದಿಗೆ ಸಂಸ್ಥೆಯ ಮಟ್ಟದಲ್ಲಿ ಸಮಾಲೋಚನೆ ನಡೆಸಬಹುದು. ಅವರ ಪ್ರತಿಕ್ರಿಯೆಯ ಆಧಾರದ ಮೇಲೆ ಈ ಸಂಸ್ಥೆಗಳ ಪುನರಾರಂಭದ ಬಗ್ಗೆ ಜುಲೈನಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದೆ.

ಈ ಹಿನ್ನೆಲೆಯಲ್ಲಿ ದಿನಾಂಕ ಜೂನ್ 1ರಂದು ನನ್ನ (ಶಿಕ್ಷಣ ಸಚಿವ) ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಆಯುಕ್ತರು, ಸಮಗ್ರ ಶಿಕ್ಷಣದ ರಾಜ್ಯ ಯೋಜನಾ ನಿರ್ದೇಶಕರು ಹಾಗೂ ಇತರೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ರಾಜ್ಯದಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಪುನರಾರಂಭಿಸುವುದಕ್ಕೆ ಸಂಬಂಧಿಸಿದಂತೆ ಪೋಷಕರು ಮತ್ತು ಸಂಬಂಧಿಸಿದವರ ಸಭೆಗಳನ್ನು ಪ್ರತಿ ಶಾಲೆ ಮಟ್ಟದಲ್ಲಿ ಆಯೋಜಿಸುವಂತೆ ತೀರ್ಮಾನಿಸಲಾಯಿತು ಎಂದಿದ್ದಾರೆ.

ಹಾಗಾಗಿ, ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಮತ್ತು ಅನುದಾನ ರಹಿತ (ಖಾಸಗಿ) ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಕೂಡಲೇ ಜೂನ್ 10ರಿಂದ 12ರ ನಡುವಿನ ಅವಧಿಯಲ್ಲಿ ಪೋಷಕರು ಮತ್ತು ಎಸ್‌ಡಿಎಂಸಿ ಸದಸ್ಯರನ್ನು ಸಭೆಗೆ ಆಹ್ವಾನಿಸಿ ಅವರ ಅಭಿಪ್ರಾಯ ಪಡೆಯಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

A) ಶಾಲೆಗಳನ್ನು ಪುನರಾರಂಭ ಮಾಡಬಹುದಾದ ದಿನಾಂಕ ಕುರಿತು.

B) ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವಿಧಾನದ ಬಗ್ಗೆ.

C) ಶಾಲೆಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ರಾಜ್ಯದ ಎಲ್ಲಾ ಪೋಷಕರು ಮತ್ತು ಎಸ್‌ಡಿಎಂಸಿ ಸದಸ್ಯರು ಸಭೆಗಳಲ್ಲಿ‌ ಪಾಲ್ಗೊಂಡು ತಮ್ಮ ಅಭಿಪ್ರಾಯ ತಿಳಿಸಬೇಕೆಂದು ಮನವಿ ಮಾಡುತ್ತಿದ್ದೇನೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT