ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೋವಿಡ್ ಕೇರ್’ ಆಸ್ಪತ್ರೆಯಾಗಿ ಪರಿವರ್ತನೆ

ಕೊಡಗು ಜಿಲ್ಲಾಡಳಿತದ ವಶಕ್ಕೆ ಮಡಿಕೇರಿಯ ಅಶ್ವಿನಿ ಆಸ್ಪತ್ರೆ
Last Updated 5 ಏಪ್ರಿಲ್ 2020, 15:25 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲೂ ಕೋವಿಡ್–19 ಭೀತಿ ಸೃಷ್ಟಿಸಿದ್ದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಅಧೀನದ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯನ್ನು ಸಂಪೂರ್ಣವಾಗಿ ಪ್ರತ್ಯೇಕ ‘ಕೋವಿಡ್ ಕೇರ್’ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ.

ಒಂದು ವೇಳೆ ಜಿಲ್ಲೆಯಲ್ಲಿ ಕೊರೊನಾ ವೈರಸ್‌ ಸಮುದಾಯಕ್ಕೆ ಹರಡಿ, ಪರಿಸ್ಥಿತಿ ವಿಕೋಪಕ್ಕೆ ತಲುಪಿದರೆ ಅಂತಹ ಪರಿಸ್ಥಿತಿಯಲ್ಲಿ ಇಲ್ಲಿನ ಪೂರ್ಣ ವಾರ್ಡ್‌ಗಳಲ್ಲಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಕೆ ಮಾಡಿಕೊಳ್ಳಲು ಆರೋಗ್ಯ ಇಲಾಖೆ ಉದ್ದೇಶಿಸಿದೆ. ಇಲ್ಲಿನ ರೋಗಿಗಳನ್ನು ಮಡಿಕೇರಿಯ ಅಶ್ವಿನಿ ಆಸ್ಪತ್ರೆಯನ್ನು ಸಂಪೂರ್ಣವಾಗಿ ಜಿಲ್ಲಾಡಳಿತದ ವಶಕ್ಕೆ ತೆಗೆದುಕೊಳ್ಳಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಕೋವಿಡ್‌ಯೇತರ ಸೇವೆಗಳನ್ನು ಮಡಿಕೇರಿ ಅಶ್ವಿನಿ ಆಸ್ಪತ್ರೆಯಲ್ಲಿ ನೀಡಲು ಉದ್ದೇಶಿಸಲಾಗಿದೆ.

ಮತ್ತೆ ಇಬ್ಬರು ಪತ್ತೆ: ದೆಹಲಿಯಲ್ಲಿ ನಡೆದಿದ್ದ ನಿಜಾಮುದ್ದೀನ್‌ ಧಾರ್ಮಿಕ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಮತ್ತೆ ಇಬ್ಬರನ್ನು ಜಿಲ್ಲಾ ಪೊಲೀಸರು ಪತ್ತೆ ಹಚ್ಚಿದ್ದಾರೆ. ಇದುವರೆಗೂ ಕೊಡಗು ಜಿಲ್ಲೆಯಲ್ಲಿ ದೆಹಲಿಗೆ ತೆರಳಿದವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಇವರಿಬ್ಬರ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ.

5 ಜನರು ದೆಹಲಿಯಲ್ಲಿ ಕ್ವಾರಂಟೈನ್‌ನಲ್ಲಿ ಇದ್ದಾರೆ. ಇನ್ನು 5 ಜನರು ಹೊರ ಜಿಲ್ಲೆಗಳಲ್ಲಿ ವಾಸವಿದ್ದು, ಈ ಬಗ್ಗೆ ಸಂಬಂಧಪಟ್ಟ ಜಿಲ್ಲೆಗಳಿಗೆ ಮಾಹಿತಿ ನೀಡಲಾಗಿದೆ. ಉಳಿದ ಎಲ್ಲ 14 ಜನರನ್ನು ಜಿಲ್ಲಾ ಆಸ್ಪತ್ರೆಯ ಐಸೋಲೇಶನ್ ವಾರ್ಡ್‌ನಲ್ಲಿ ಇಡಲಾಗಿದೆ. ಇವರಿಗೆ ಕೊರೊನಾ ವೈರಸ್‌ನ ಲಕ್ಷಣಗಳು ಇರುವುದಿಲ್ಲ ಎಂದು ಹೇಳಿದರು.

ಎಚ್ಚರಿಕೆ: ಕೊರೊನಾ ವೈರಸ್‌ ನಿಯಂತ್ರಣಕ್ಕೆ ಸರ್ಕಾರವು ಅನೇಕ ಕ್ರಮಗಳನ್ನು ಕೈಗೊಂಡಿದೆ. ಕೊರೊನಾ ವೈರಸ್‌ ಸಂಬಂಧ ಯಾವುದೇ ತಪ್ಪು ಮಾಹಿತಿ ಅಥವಾ ಯಾವುದೇ ಒಂದು ಕೋಮಿನ ಬಗ್ಗೆ ಪರ- ವಿರೋಧವಾಗಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದರು.

ಚಿತ್ರದ ಮೂಲಕವಾಗಲಿ ಅಥವಾ ಧ್ವನಿಸುರುಳಿಯ ಮೂಲಕವಾಗಲಿ ಮಾಹಿತಿ ಹರಿಯ ಬಿಡುವುದು ಶಿಕ್ಷಾರ್ಹ ಅಪರಾಧ. ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ವಾಟ್ಸ್‌ಆ್ಯಪ್‌ ಮತ್ತು ಇತರೆ ಮಾಧ್ಯಮಗಳಲ್ಲಿ ಯಾವುದೇ ಕೋಮಿನ ಬಗ್ಗೆ ಇಲ್ಲಸಲ್ಲದ ವಿಚಾರಗಳನ್ನು ಹರಡಲು ಪ್ರಯತ್ನಿಸಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದರೆ ಅಂತಹವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಹಾಗೂ ಸ್ಥಳೀಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸುಮನ್‌ ಡಿ. ಪನ್ನೇಕರ್‌ ತಿಳಿಸಿದರು.

392 ಜನರ ಕ್ವಾರಂಟೈನ್‌: ಜಿಲ್ಲೆಯಿಂದ ವಿದೇಶಗಳಿಗೆ ಹೋಗಿ ವಾಪಸ್‌ ಬಂದಿರುವವರನ್ನು ಪತ್ತೆಹಚ್ಚಿ ತಪಾಸಣೆ ಮಾಡುವ ಕಾರ್ಯವನ್ನು ಮುಂದುವರೆಸಲಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ 190, ವಿರಾಜಪೇಟೆ ತಾಲ್ಲೂಕಿನಲ್ಲಿ 162, ಸೋಮವಾರಪೇಟೆ ತಾಲ್ಲೂಕಿನಲ್ಲಿ 128 ಜನರನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ 392 ಜನರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಅವರವರ ಮನೆಗಳಲ್ಲಿಯೇ ಸಂಪರ್ಕ ತಡೆಯನ್ನು (ಹೋಂ ಕ್ವಾರಂಟೈನ್) ಮಾಡಲಾಗಿದೆ.

ಇಲ್ಲಿಯವರೆಗೆ ಒಟ್ಟು 63 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರಲ್ಲಿ 1 ಪ್ರಕರಣ ದೃಢ ಪಟ್ಟಿದ್ದು, 48 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದೆ. 14 ಪ್ರಕರಣಗಳಲ್ಲಿ ವರದಿಯನ್ನು ನಿರೀಕ್ಷಿಸಲಾಗಿದೆ. ವರದಿ ಬಂದ ಪ್ರಕರಣಗಳಲ್ಲಿ 33 ಜನರ ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಮರು ಪರೀಕ್ಷೆಗಾಗಿ ಕಳುಹಿಸಿದ್ದು, ವರದಿ ನಿರೀಕ್ಷಿಸಲಾಗಿದೆ. ಪ್ರಸ್ತುತ ಸೋಂಕು ದೃಢಪಟ್ಟ 01 ಪ್ರಕರಣ ಮತ್ತು 15 ಸೋಂಕು ಶಂಕಿತ ಪ್ರಕರಣಗಳು ಸೇರಿದಂತೆ ಒಟ್ಟು 16 ಪ್ರಕರಣಗಳನ್ನು ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿಟ್ಟು ನಿಗಾ ವಹಿಸಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT