ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌–19 | ದಾವಣಗೆರೆ ವೃದ್ಧನ ಸಾವು, ರಾಜ್ಯದಲ್ಲಿ ಸಾವಿನ ಸಂಖ್ಯೆ 23ಕ್ಕೇರಿಕೆ

Last Updated 1 ಮೇ 2020, 16:50 IST
ಅಕ್ಷರ ಗಾತ್ರ

ದಾವಣಗೆರೆ: ಕೋವಿಡ್‌–19 ರೋಗದಿಂದ ಬಳಲುತ್ತಿದ್ದ ಜಾಲಿನಗರದ 69 ವರ್ಷದ ವೃದ್ಧ (ಪಿ–556) ತೀವ್ರ ಉಸಿರಾಟದ ತೊಂದರೆಯಿಂದಾಗಿ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ 9 ಗಂಟೆಗೆ ಮೃತಪಟ್ಟಿದ್ದಾರೆ. ಇದರಿಂದರಾಜ್ಯದಲ್ಲಿ ಕೊರೊನಾ ಸೋಂಕಿಗೆ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.

ವೃದ್ಧನ ಮಗ, ಮೂವರು ಸೊಸೆ ಹಾಗೂ ಒಂದು ವರ್ಷದ ಮೊಮ್ಮಗನಿಗೂ ಕೊರೊನಾ ಸೋಂಕು ಇರುವುದು ಶುಕ್ರವಾರವಷ್ಟೇ ದೃಢಪಟ್ಟಿತ್ತು. ಕುಟುಂಬದ ಐವರೂ ಜಿಲ್ಲಾ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ.

ತೀವ್ರ ಉಸಿರಾಟದ ಸಮಸ್ಯೆಯಿಂದ (SARI) ಬಳಲುತ್ತಿದ್ದ ವೃದ್ಧ ಏಪ್ರಿಲ್‌ 28ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಗಂಟಲಿನ ದ್ರಾವಣದ ಮಾದರಿಯನ್ನು ಸಂಗ್ರಹಿಸಿ ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಬುಧವಾರ ಮಧ್ಯರಾತ್ರಿ ಬಂದ ವರದಿಯು ಅವರಿಗೆ ಕೋವಿಡ್‌ ಇರುವ ಬಗ್ಗೆ ದೃಢಪಡಿಸಿತ್ತು. ಇವರ ಆರೋಗ್ಯದ ಮೇಲೆ ನಿಗಾ ವಹಿಸಲು ತಜ್ಞ ವೈದ್ಯರ ಸಮಿತಿಯನ್ನೂ ನೇಮಿಸಲಾಗಿತ್ತು. ಆದರೆ, ಶುಕ್ರವಾರ ರಾತ್ರಿ ವೃದ್ಧ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

‘ಅನಿಯಂತ್ರಿತ ಮಧುಮೇಹ, ಅಧಿಕ ರಕ್ತದೊತ್ತಡ ಕಾಯಿಲೆಗೆ ವೃದ್ಧ ಮೊದಲಿನಿಂದಲೂ ಚಿಕಿತ್ಸೆ ಪಡೆಯುತ್ತಿದ್ದರು. ಕೋವಿಡ್‌ ಪಾಸಿಟಿವ್‌ ಬಂದ ಬಳಿಕ ತೀವ್ರ ಉಸಿರಾಟ ಸಮಸ್ಯೆ ಇರುವುದರಿಂದ ಅವರಿಗೆ ವೆಂಟಿಲೇಟರ್‌ನಲ್ಲಿಟ್ಟು ನಿಗಾ ವಹಿಸಲಾಗುತ್ತಿತ್ತು. ರಾತ್ರಿ 9 ಗಂಟೆ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸಿದೇ ಕೊನೆಯುಸಿರೆಳೆದಿದ್ದಾರೆ’ ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್‌ ತಿಳಿಸಿದರು.

‘ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ರಾತ್ರಿ ಶವವನ್ನು ಇಡಲಾಗುತ್ತದೆ. ಎಲ್ಲಿ ಅಂತ್ಯಕ್ರಿಯೆ ನಡೆಸಬೇಕು ಎಂಬ ಬಗ್ಗೆ ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ. ಕೋವಿಡ್‌ ಮಾರ್ಗಸೂಚಿ ಪ್ರಕಾರ ಶನಿವಾರ ಅಂತ್ಯಕ್ರಿಯೆ ನಡೆಸಲಾಗುವುದು’ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT