ಸೋಮವಾರ, ಮೇ 25, 2020
27 °C

ತಬ್ಲೀಗ್ ಸಭೆ: ವಿವರ ಸಲ್ಲಿಕೆಗೆ ನಿರ್ದೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದ ತಬ್ಲೀಗ್ ಧಾರ್ಮಿಕ ಸಮಾವೇಶದಲ್ಲಿ ಭಾಗವಹಿಸಿದವರ ಪೈಕಿ ಎಷ್ಟು ಜನ ಕರ್ನಾಟಕಕ್ಕೆ ಬಂದಿದ್ದಾರೆ ಎಂಬ ಬಗ್ಗೆ ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಬೇಕು’ ಎಂದು ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತಂತೆ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಮತ್ತು ನ್ಯಾಯಮೂರ್ತಿ ಬಿ.ವಿ‌.ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

’ಕೇಂದ್ರ ಸರ್ಕಾರದ ಮಾಹಿತಿ ಆಧರಿಸಿ ಸಮಾವೇಶದಲ್ಲಿ ಪಾಲ್ಗೊಂಡಿದ್ದವರನ್ನು ಪತ್ತೆ ಹಚ್ಚಬೇಕು ಹಾಗೂ ಅವರಿಂದ ಯಾರಿಗೆಲ್ಲಾ ಕೊರೊನಾ ಸೋಂಕು ಹರಡಿದೆ ಎಂಬುದನ್ನು ಪತ್ತೆ ಹಚ್ಚಬೇಕು’ ಎಂದು ನ್ಯಾಯಪೀಠ ನಿರ್ದೇಶಿಸಿದೆ.

ವಿಡಿಯೊ ಕಾನ್ಪರೆನ್ಸ್ ಮುಖಾಂತರ ನಡೆದ ವಿಚಾರಣೆಯಲ್ಲಿ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಜಿ.ಆರ್.ಮೋಹನ್, ‘ಕರ್ನಾಟಕದಲ್ಲಿ ಎಷ್ಟು ಜನರಿಗೆ ಸೋಂಕು ಹರಡಿದೆ ಹಾಗೂ ಕ್ವಾರಂಟೈನ್ ಅಲ್ಲಿ ಎಷ್ಟು ಜನರಿದ್ದಾರೆ ಎಂಬ ಬಗ್ಗೆ ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ಸೂಕ್ತ ಮಾಹಿತಿ ನೀಡುತ್ತಿಲ್ಲ’ ಎಂದು ಆಕ್ಷೇಪಿಸಿದರು.

ಕೇರಳ ಗಡಿ: 7ರವರೆಗೆ ಕ್ರಮಕ್ಕೆ ಮುಂದಾಗದಂತೆ ತಾಕೀತು
ಬೆಂಗಳೂರು: ‘ಕೇರಳ ಹಾಗೂ ಕರ್ನಾಟಕ ಗಡಿ ನಡುವಿನ ರಸ್ತೆ ತೆರವಿಗೆ ಸಂಬಂಧಿಸಿದಂತೆ ಇದೇ 7ರವರೆಗೆ ಯಾವುದೇ ಕ್ರಮಕ್ಕೆ ಮುಂದಾಗಬಾರದು’ ಎಂದು ಕೇರಳ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಈ ಕುರಿತಂತೆ ಕರ್ನಾಟಕ ಸಲ್ಲಿಸಿರುವ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ಹಾಗೂ ದೀಪಕ್ ಗುಪ್ತಾ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

‘ಸಮಸ್ಯೆ ಪರಿಹರಿಸುವ ದಿಸೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿಗಳು, ಕರ್ನಾಟಕ ಮತ್ತು ಕೇರಳ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಚರ್ಚೆ ನಡೆಸಿ ಸೌಹಾರ್ದ ರೀತಿಯಲ್ಲಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು’ ಎಂದು ನ್ಯಾಯಪೀಠ ಸೂಚಿಸಿದೆ.

ರಾಜ್ಯದ ಪರವಾಗಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ‌.ನಾವದಗಿ ಅವರು, ವಾಟ್ಸ್ ಆ್ಯಪ್ ಕಾಲ್ ಮೂಲಕ ವಿಡಿಯೊ ಕಾನ್ಫರೆನ್ಸ್‌ನಲ್ಲಿ ವಾದ ಮಂಡಿಸಿದ್ದು ವಿಶೇಷವಾಗಿತ್ತು.

ಕೃಷಿ ಉತ್ಪನ್ನ ರವಾನೆ: ಮಾಹಿತಿ ಕೇಳಿದ ಹೈಕೋರ್ಟ್ಬೆಂಗಳೂರು: ‘ರೈತರ ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ರವಾನಿಸಲು ಕಲ್ಪಿಸಲಾಗಿರುವ ವ್ಯವಸ್ಥೆ ಬಗ್ಗೆ ಸಮಗ್ರ ಮಾಹಿತಿ ನೀಡಿ’ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ‌.

ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

‘ಕೃಷಿ ಕಾರ್ಮಿಕರಿಗೆ ಪಾಸ್ ನೀಡಲಾಗಿದೆಯೇ, ಎಪಿಎಂಸಿಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆಯೇ, ಹೊಲಗಳಿಂದ ಸಾಗಾಟಕ್ಕೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ವರದಿ ನೀಡಿ’ ಎಂದು ನ್ಯಾಯಪೀಠ ಸೂಚಿಸಿದೆ.

‘ಅಂಗನವಾಡಿಗಳಿಗೆ ಆಹಾರ ಧಾನ್ಯ,‌ ಮಕ್ಕಳಿಗೆ, ಬಾಣಂತಿಯರಿಗೆ ಹಾಲು ಹಾಗೂ ಇತರೆ ಆಹಾರ ಪದಾರ್ಥ ಪೂರೈಸಲು ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆಯೂ ಮುಂದಿನ ವಿಚಾರಣೆ ವೇಳೆಗೆ ತಿಳಿಸಬೇಕು’ ಎಂದು ನ್ಯಾಯಪೀಠ ತಿಳಿಸಿದೆ.

‘ಬಡವರಿಗೆ, ನಿರ್ಗತಿಕರಿಗೆ, ಕೂಲಿ ಕಾರ್ಮಿಕರಿಗೆ ಆಹಾರ ಒದಗಿಸುವ ನಿಟ್ಟಿನಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವಾ ಸಮಿತಿಗಳು ಸರ್ಕಾರಕ್ಕೆ ಪೂರಕ ಸಹಕಾರ ನೀಡಬೇಕು’ ಎಂದು ನಿರ್ದೇಶಿಸಿದೆ. ವಿಚಾರಣೆಯನ್ನು ಇದೇ 7ಕ್ಕೆ ಮುಂದೂಡಲಾಗಿದೆ.

ಅನಗತ್ಯ ತೊಂದರೆ ಸಲ್ಲ: ಹೈಕೋರ್ಟ್
ಬೆಂಗಳೂರು: ‘ಆಹಾರ ಧಾನ್ಯ, ತರಕಾರಿ, ಆಸ್ಪತ್ರೆ ಹಾಗೂ ಔಷಧಕ್ಕಾಗಿ ಮನೆಯಿಂದ ಹೊರಬರುವವರಿಗೆ ಅನಗತ್ಯ ತೊಂದರೆ ಕೊಡಬಾರದು’ ಎಂದು ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ.

‘ಲಾಕ್ ಡೌನ್ ವೇಳೆ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರ ಮೇಲೆ ಪೊಲೀಸರು ಬೇಕಾಬಿಟ್ಟಿ ಲಾಠಿ ಪ್ರಹಾರ ನಡೆಸುತ್ತಿದ್ದಾರೆ’ ಎಂದು ಆರೋಪಿಸಿ ವಕೀಲ ಎನ್.ಪಿ.ಅಮೃತೇಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು‌.

‘ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸುವವರ ವಾಹನ ಜಪ್ತಿ ಮಾಡುವಂತೆ ಸೂಚಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹೊರಡಿಸಿರುವ ಆದೇಶದಂತೆಯೇ ರಾಜ್ಯದ ಇತರ ಜಿಲ್ಲೆಗಳಲ್ಲೂ ಆದೇಶ ಹೊರಡಿಸಿ’ ಎಂದು ಡಿಜಿಪಿಗೆ ಸೂಚಿಸಿತು.

‘ಲಾಕ್‌ಡೌನ್ ಆದೇಶ ಪಾಲನೆ ಪ್ರತಿಯೊಬ್ಬರ ಕರ್ತವ್ಯ. ಆದರೆ, ಅಗತ್ಯ ವಸ್ತುಗಳ ಖರೀದಿಗೆ ಹೊರ ಬರುವ ಸಾರ್ವಜನಿಕರು ಸೂಕ್ತ ಕಾರಣ ನೀಡಿದರೆ, ಅಂತಹವರಿಗೆ ಪೊಲೀಸರು ತೊಂದರೆ ನೀಡಬಾರದು. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಿಗೆ ಸುತ್ತೋಲೆ ಹೊರಡಿಸಬೇಕು’ ಎಂದು ನ್ಯಾಯಪೀಠ ಪೊಲೀಸ್ ಮಹಾ ನಿರ್ದೇಶಕರಿಗೆ ನಿರ್ದೇಶಿಸಿದೆ.

ಬಂದಿಯಾಗಿರುವ ಪ್ರಾಣಿ ಪಕ್ಷಿಗಳಿಗೆ ನೀರು-ಆಹಾರ: ಹೈಕೋರ್ಟ್ ನಿರ್ದೇಶನ
ಬೆಂಗಳೂರು:
‘ಸಾಕು ಪ್ರಾಣಿಗಳ ಮಾರಾಟ ಮಳಿಗೆಗಳನ್ನು ತೆರೆದು ಅಲ್ಲಿರುವ ಪ್ರಾಣಿ- ಪಕ್ಷಿಗಳಿಗೆ ಆಹಾರ ಹಾಗೂ ನೀರು ಸರಬರಾಜು ಮಾಡಿ’ ಎಂದು ಹೈಕೋರ್ಟ್ ನಿರ್ದೇಶಿಸಿದೆ.

‘ಈ ಕುರಿತಂತೆ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ, ಪಶು ಸಂಗೋಪನಾ ಇಲಾಖೆ ಸೇರಿದಂತೆ ಸಂಬಂಧಪಟ್ಟ ಎಲ್ಲ ಇಲಾಖೆಗಳು ಕೂಡಲೇ ಚರ್ಚಿಸಿ ಸಾಕುಪ್ರಾಣಿ-ಪಕ್ಷಿಗಳ ರಕ್ಷಣೆಗೆ ಕ್ರಮ ಜರುಗಿಸಬೇಕು’ ಎಂದು ನಿರ್ದೇಶಿಸಿದೆ.

ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಮತ್ತು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ತುರ್ತು ವಿಚಾರಣೆ ನಡೆಸಿತು.

ಏನಿದು ಅರ್ಜಿ?: ‘ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾಕುಪ್ರಾಣಿಗಳ‌ ಮಾರಾಟ ಮಳಿಗೆಗಳನ್ನು ಮುಚ್ಚಿರುವುದರಿಂದ‌ ಅಲ್ಲಿರುವ ಸಾಕು ಪ್ರಾಣಿ-ಪಕ್ಷಿಗಳಿಗೆ ಆಹಾರ, ನೀರು ಇಲ್ಲವಾಗಿದೆ. ಅಂತೆಯೇ ನಿರಾಶ್ರಿತರು, ಬಡವರಿಗೆ ಹಾಗೂ ನಿರ್ಗತಿಕರಿಗೆ ಆಹಾರ ಪೂರೈಕೆ‌ ಮಾಡಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಕೋರಿ ಸಲ್ಲಿಸಿರುವ ಅರ್ಜಿ ಇದಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು