ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ನಿಯಂತ್ರಣ: ಕರ್ನಾಟಕ - ಮಹಾರಾಷ್ಟ್ರ ಗಡಿಭಾಗದಲ್ಲಿ ಹೈ ಅಲರ್ಟ್

Last Updated 25 ಮಾರ್ಚ್ 2020, 8:07 IST
ಅಕ್ಷರ ಗಾತ್ರ

ಬೆಳಗಾವಿ: ಕೊರೊನಾ ವೈರಾಣು ಸೋಂಕು ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಮಹಾರಾಷ್ಟ್ರ- ಕರ್ನಾಟಕ ಗಡಿಯಲ್ಲಿ ನಿಗಾ ವಹಿಸಲಾಗಿದೆ. ಬೋರಗಾಂವ್‌ದಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದ್ದು,ಉಪ‌ವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಭೇಟಿ ನೀಡಿ ಪರಿಶೀಲಿಸಿದರು.

ಇಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕ ರಾಜ್ಯಕ್ಕೆ ಬರುವಂತಹ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಹಾಗೂ ಕರ್ನಾಟಕದ ಜನರು ಮಹಾರಾಷ್ಟ್ರಕ್ಕೆ ತೆರಳದಂತೆ ತಡೆ ಹಿಡಿಯಲಾಗುತ್ತಿದೆ. ಆ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ದಿನದಿಂದ ದಿನ ಹೆಚ್ಚಾಗಿ ಕಂಡುಬರುತ್ತಿವೆ. ಹೀಗಾಗಿ ಮುಂಜಾಗ್ರತೆ ವಹಿಸಲಾಗಿದೆ ಎಂದರು.

ರಾಜ್ಯದಲ್ಲಿ ಈಗಾಗಲೇ 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿದ್ದು, ಸಾರ್ವಜನಿಕರುಅನಗತ್ಯವಾಗಿ ಮನೆಯಿಂದ ಹೊರಗಡೆಗೆ ಬರಬಾರದು. ಆದೇಶ ಉಲ್ಲಂಘಿಸಿ ಪ್ರಯಾಣ‌ ಮಾಡಿದರೆ ಅಂಥವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡಲು ಚೆಕ್ ಪೋಸ್ಟಲ್ಲಿರುವ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಈ ಚೆಕ್ ಪೋಸ್ಟಲ್ಲಿ ಬೋರಗಾಂವ್ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿಗಳು ಹಾಗೂ ಸದಲಗಾ ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಚೆಕ್ ಪೋಸ್ಟ್ ನಲ್ಲಿ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ದಿನಬಳಕೆಗೆ ಅವಶ್ಯವಿರುವಂತಹ ತರಕಾರಿ, ಹಾಲು ಹಾಗೂ ದಿನಸಿ ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ದಿನದ 24 ಗಂಟೆಯೂ ಎಲ್ಲ ವಾಹನಗಳ ಮೇಲೂ ನಿಗಾ ವಹಿಸಲಾಗುತ್ತಿದೆ. ಚಾಲಕರು ಹಾಗೂ ಕ್ಲೀನರುಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದರು.

ಸಾರ್ವಜನಿಕರು ಪ್ರವಾಸಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT