ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋಗಲಕ್ಷಣವಿಲ್ಲದ ಸೋಂಕಿತರಿಗೆ ‘ಕೋವಿಡ್ ಕೇರ್ ಸೆಂಟರ್’

ಪ್ರತ್ಯೇಕ ಕೇಂದ್ರ ಸ್ಥಾಪನೆಗೆ ನಿರ್ಧಾರ: ಡಾ.ಕೆ.ಸುಧಾಕರ್‌
Last Updated 16 ಜೂನ್ 2020, 19:57 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ‌ ಲಕ್ಷಣಗಳು ಕಾಣಿಸಿಕೊಳ್ಳದ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಇವರ ಚಿಕಿತ್ಸೆಗಾಗಿಯೇ ಪ್ರತ್ಯೇಕವಾಗಿ ‘ಕೋವಿಡ್‌ ಕೇರ್ ಸೆಂಟರ್’ ಸ್ಥಾಪಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಂಗಳವಾರ‌ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತರ ರಾಜ್ಯಗಳಲ್ಲಿ ಯಶಸ್ವಿಯಾಗಿ ಅನುಸರಿಸುತ್ತಿರುವ ಕ್ರಮಗಳ ಬಗ್ಗೆ ಪರಿಣಿತರು ಮತ್ತು ಹಿರಿಯ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಕೋವಿಡ್‌ ಪ್ರಕರಣಗಳು ಹೆಚ್ಚು ತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವ ಜವಾಬ್ದಾರಿಯನ್ನು ಖಾಸಗಿ ಆಸ್ಪತ್ರೆಗಳೂ ವಹಿಸಿಕೊಳ್ಳಬೇಕು. ಒಂದು ವೇಳೆ ಚಿಕಿತ್ಸೆ ನೀಡಲು ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದೂ ಎಚ್ಚರಿಕೆ ನೀಡಿದರು.

ಖಾಸಗಿ ವಲಯದಲ್ಲಿ ಯಾವ ಆಸ್ಪತ್ರೆಗಳು ಎಷ್ಟು ಹಾಸಿಗೆಗಳನ್ನು, ಎಷ್ಟು ಐಸಿಯು ಮತ್ತು ವೆಂಟಿಲೇಟರ್‌ಗಳನ್ನು ಕೋವಿಡ್‌ ಪೀಡಿತರ ಚಿಕಿತ್ಸೆಗೆ ಮೀಸಲಿಡಬೇಕು ಎನ್ನುವುದಕ್ಕೆ ಸಂಬಂಧಿಸಿ ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್‌ ಪರೀಕ್ಷೆ ಸಂಖ್ಯೆಯನ್ನೂ ಹೆಚ್ಚಿಸಲು ನಿರ್ಧರಿಸಲಾಗಿದೆ. ಪ್ರತಿ ದಿನ 15,000 ದಿಂದ 25,000 ಕೋವಿಡ್‌ ಟೆಸ್ಟ್‌ ನಡೆಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು. ಹೆಚ್ಚು ಜನಸಂದಣಿ ಇರುವ ಜಾಗಗಳಲ್ಲಿ ಜನರು, ಪೌರ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಪೊಲೀಸರು, ಆರೋಗ್ಯ ಕಾರ್ಯಕರ್ತರು ಮುಂತಾದ ಹೆಚ್ಚು ಜನಸಂಪರ್ಕ ಇರುವ ಕಡೆಗಳಲ್ಲಿ ಹೆಚ್ಚಿನ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಸುಧಾಕರ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT