ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ ಉದ್ಯಮಗಳಿಗೆ ಗಾಳ: ಪ್ರಗತಿ ಪರಿಶೀಲನೆ ನಡೆಸುವುದಾಗಿ ಬಿಎಸ್‌ವೈ ಹೇಳಿಕೆ

Last Updated 21 ಮೇ 2020, 10:23 IST
ಅಕ್ಷರ ಗಾತ್ರ

ಬೆಂಗಳೂರು: ಚೀನಾದಲ್ಲಿರುವ ಕೈಗಾರಿಕೆಗಳನ್ನು ರಾಜ್ಯದತ್ತ ಸೆಳೆಯಲೆಂದೇ ರಚಿಸಿರುವ ವಿಶೇಷ ಕಾರ್ಯಪಡೆಯ ಚಟುವಟಿಕೆಯನ್ನು ಪ್ರತಿ ವಾರವೂ ಪ್ರಗತಿ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಕೈಗಾರಿಕಾ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿ, ಚೀನಾದಲ್ಲಿ ಹೂಡಿಕೆ ಮಾಡಿರುವ ವಿವಿಧ ದೇಶಗಳ ಹೂಡಿಕೆದಾರರು ಅಲ್ಲಿಂದ ಬಂಡವಾಳ ಹಿಂತೆಗೆದು ಭಾರತದಲ್ಲಿ ಹೂಡಿಕೆ ಮಾಡುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಇದರ ಸಂಪೂರ್ಣ ಲಾಭ ಪಡೆಯಬೇಕು ಎಂದು ಅವರು ಮುಖ್ಯಕಾರ್ಯದರ್ಶಿಯವರಿಗೆ ಸೂಚನೆ ನೀಡಿದರು.

ರಾಜ್ಯಕ್ಕೆ ಬಂದು ಹೂಡಿಕೆ ಮಾಡುವವರಿಗೆ ವಿಶೇಷ ಪ್ರೋತ್ಸಾಹಕಗಳ ಯೋಜನೆ ರೂಪಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಯವರಿಗೆ ತಿಳಿಸಿದರು.

ಕೋವಿಡ್ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಕಾರ್ಖಾನೆಗಳಲ್ಲಿ ಈಗಾಗಲೇ ಶೇ. 70 ರಷ್ಟು ಕೈಗಾರಿಕೆಗಳು ಪುನರಾರಂಭಗೊಂಡಿವೆ. ಇವುಗಳ ಕಾರ್ಯಕ್ಷಮತೆ ಹೆಚ್ಚಿಸಿ ಹಿಂದಿನಂತೆ ಮುಂಚೂಣಿಗೆ ತರುವ ಉದ್ದೇಶದಿಂದ ಕೈಗಾರಿಕಾ ವಲಯದ ಪರಿಣತರೊಂದಿಗೆ, ಅಂತರರಾಷ್ಟ್ರೀಯ ಕೈಗಾರಿಕೋದ್ಯಮಿಗಳ ಸಂಘಟನೆಗಳೊಂದಿಗೆ ಸಮಾಲೋಚನೆ ನಡೆಸುತ್ತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು.

ರಾಜ್ಯದಲ್ಲಿ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ಉದ್ಯಮಿಗಳಿಗೆ ಜಮೀನು ಖರೀದಿಸುವ ಪ್ರಕ್ರಿಯೆ ಸರಳಗೊಂಡಿದೆ. ಇದರಿಂದ ಹೂಡಿಕೆದಾರರನ್ನು ಆಕರ್ಷಿಸುವುದು ಸುಲಭವಾಗಲಿದೆ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು

ಜಿಲ್ಲಾ ಮಟ್ಟದಲ್ಲಿಯೂ ಕೈಗಾರಿಕೆ ಸ್ಥಾಪಿಸುವ ಪ್ರಕ್ರಿಯೆಯನ್ನು ಸರಳಗೊಳಿಸುವ ನಿಟ್ಟಿನಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.

ಹೊರ ದೇಶದಿಂದ ಆಮದಾಗುತ್ತಿದ್ದ ಪಿಪಿಇ ಕಿಟ್‌ಗಳನ್ನು ದೇಶದಲ್ಲಿಯೇ ತಯಾರಿಸಲು ಉತ್ತೇಜನ ನೀಡಲಾಗಿದ್ದು, ರಾಜ್ಯದಲ್ಲಿ 22 ಘಟಕಗಳು ಈಗ ಪಿಪಿಇ ಕಿಟ್‌ಗಳನ್ನು ಉತ್ಪಾದಿಸುತ್ತಿವೆ. 4 ಸಂಸ್ಥೆಗಳು ವೆಂಟಿಲೇಟರುಗಳ ತಯಾರಿಕೆ ಮಾಡುತ್ತಿವೆ. ಸ್ಯಾನಿಟೈಸರ್ ಕೊರತೆ ನೀಗಿಸಲು 40 ಕ್ಕೂ ಹೆಚ್ಚು ಡಿಸ್ಟಿಲರಿಗಳಿಗೆ ಪರವಾನಗಿ ನೀಡಿ, ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲಾಗಿದೆ.

ರಾಜ್ಯದಲ್ಲಿ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಪ್ರಸ್ತುತ ಕೇವಲ 89 ಸಾವಿರ ಕಾರ್ಮಿಕರು ನೋಂದಾಯಿಸಿಕೊಂಡಿದ್ದು, ಈ ವಲಯದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಅಭಿಯಾನದ ಮಾದರಿಯಲ್ಲಿ ಕ್ರಮ ಕೈಗೊಳ್ಳುವಂತೆ ಯಡಿಯೂರಪ್ಪ ಅವರು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT