ಶನಿವಾರ, ನವೆಂಬರ್ 16, 2019
24 °C
ಮಹಾರಾಷ್ಟ್ರದಲ್ಲಿ ಮುಂದುವರಿದ ಮಳೆ: ಆತಂಕ

ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

Published:
Updated:

ಬೆಳಗಾವಿ: ‘ಜಿಲ್ಲೆಯಲ್ಲಿ ಕೃಷ್ಣಾ ನದಿ ಪಾತ್ರದ ಜನರು ತಮ್ಮ ಅಗತ್ಯ ಸಾಮಗ್ರಿಗಳು ಹಾಗೂ ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಗಳಿಗೆ ತೆರಳಬೇಕು’ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.

‘ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಅತಿವೃಷ್ಟಿಯಾಗುತ್ತಿದೆ. ಕೊಲ್ಹಾಪುರ ಮತ್ತು ಸತಾರ ಜಿಲ್ಲೆಗಳಲ್ಲಿ ಹರಿಯುವ ಕೃಷ್ಣಾ, ಕೊಯ್ನಾ ಹಾಗೂ ಪಂಚಗಂಗಾ ನದಿಗಳಿಗೆ ವಿವಿಧ ಜಲಾಶಯಗಳಿಂದ 2 ಲಕ್ಷ ಕ್ಯುಸೆಕ್‌ಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಈ ಪ್ರಮಾಣ ಹೆಚ್ಚಾಗಲಿದೆ. ಹೀಗಾಗಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಕೊಲ್ಹಾಪುರ ಜಿಲ್ಲಾಧಿಕಾರಿ ಪತ್ರ ಬರೆದಿದ್ದಾರೆ. ಮಹಾರಾಷ್ಟ್ರದ ಜಲಾಶಯಗಳಿಂದ ಸದ್ಯ 1.34 ಲಕ್ಷ ಕ್ಯುಸೆಕ್‌ ನೀರು ಕೃಷ್ಣಾ ನದಿಗೆ ಸೇರುತ್ತಿದೆ. ಆ ರಾಜ್ಯದ ಜಲಾಶಯಗಳ ವ್ಯಾಪ್ತಿಯಲ್ಲಿ ಮಳೆ ಮುಂದುವರಿದಿದೆ. ಹೀಗಾಗಿ, ನದಿಗೆ ಮತ್ತಷ್ಟು ನೀರು ಹರಿಬಿಡುವ ಸಾಧ್ಯತೆ ಇದೆ’ ಎಂದು ಮಾಹಿತಿ ನೀಡಿದ್ದಾರೆ.

‘ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಮಹಾರಾಷ್ಟ್ರದಲ್ಲಿ ಇನ್ನೂ 2 ದಿನಗಳು ಮಳೆ ಮುಂದುವರಿಯಲಿದೆ ಹಾಗೂ ಜಾಸ್ತಿಯಾಗುವ ಸಾಧ್ಯತೆಯೂ ಇದೆ. ಪರಿಣಾಮ, 3–4 ದಿನಗಳಲ್ಲಿ ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತದೆ. ಹೀಗಾಗಿ, ಜನರು ಮತ್ತು ಜಾನುವಾರುಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವಲ್ಲಿ ಜಿಲ್ಲಾಡಳಿತ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ರಕ್ಷಣಾ ಸಾಮಗ್ರಿಗಳೊಂದಿಗೆ ತಂಡಗಳನ್ನು ರಚಿಸಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರವಾಹ ಪರಿಸ್ಥಿತಿ ಎದುರಿಸಲು ಮುನ್ನೆಚ್ಚರಿಕೆ ವಹಿಸಲಾಗಿದೆ. ಸುರಕ್ಷತೆ ದೃಷ್ಟಿಯಿಂದ ತೆಗೆದುಕೊಳ್ಳುವ ಕ್ರಮಗಳಿಗೆ ಸಾರ್ವಜನಿಕರು ಸಹಕಾರ ನೀಡಬೇಕು’ ಎಂದು ಕೋರಿದ್ದಾರೆ.

ಪ್ರತಿಕ್ರಿಯಿಸಿ (+)