ಬುಧವಾರ, ಜುಲೈ 28, 2021
23 °C

ಹೋಂಗಾರ್ಡ್‌ಗಳನ್ನು ಸೇವೆಯಲ್ಲಿ ಮುಂದುವರಿಸಲು ತೀರ್ಮಾನ: ಬಿ.ಎಸ್.ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿರುವ ಸುಮಾರು ಮೂರು ಸಾವಿರಕ್ಕೂ ಹೆಚ್ಚು ಹೋಂ ಗಾರ್ಡ್‌ಗಳನ್ನು ಸೇವೆಯಲ್ಲಿ ಮುಂದುವರಿಸಿ ವಿವಿಧ ಇಲಾಖೆಗಳಿಗೆ ನಿಯೋಜಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀರ್ಮಾನಿಸಿದ್ದಾರೆ.

ಗೃಹ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ಮುಂದಿನ ದಿನಗಳಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಹೋಂಗಾರ್ಡ್‌ಗಳ ಸೇವೆ ಒದಗಿಸಲು ಕ್ರಮವಹಿಸುವಂತೆ ಸೂಚನೆ ನೀಡಿದರು.

ಮುಂಗಾರು ಸಂದರ್ಭದಲ್ಲಿ 200 ಮಂದಿ ಎಸ್.ಡಿ.ಆರ್.ಎಫ್ ಸಿಬ್ಬಂದಿಗೆ ತರಬೇತಿ ಪ್ರಾರಂಭವಾಗಿದೆ. ಇಲ್ಲೂ ಹೋಂಗಾರ್ಡ್‌ಗಳನ್ನು ತರಬೇತಿ ನೀಡಿ ನಿಯೋಜಿಸಬಹುದು. ಕೆಲವು ದಿನಗಳಲ್ಲಿ ಅವರನ್ನು ನಾಲ್ಕು ವಿಭಾಗಗಳಲ್ಲಿ ನಿಯೋಜಿಸಲು ಸಾಧ್ಯವಾಗುವುದು ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ಕೋವಿಡ್ 19 ನಿಯಂತ್ರಣ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಕುರಿತು ಶ್ಲಾಘಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಯಡಿಯೂರಪ್ಪ ಇಲಾಖೆಯ ಸುಧಾರಣೆಗೆ ಅಗತ್ಯ ನೆರವು ನೀಡುವುದಾಗಿ ಭರವಸೆ  ನೀಡಿದರು.

ರಾಜ್ಯದಲ್ಲಿ ಪೊಲೀಸ್ ಇಲಾಖೆಯು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ರಾಜ್ಯದಲ್ಲಿ ಬದಲಾದ ಸನ್ನಿವೇಶಗಳಲ್ಲಿ ಸಿಇಎನ್ (ಸೈಬರ್ ಕ್ರೈಂ, ಎಕನಾಮಿಕ್ ಅಫೆನ್ಸ್ ಮತ್ತು ನಾರ್ಕೊಟಿಕ್ಸ್) ಠಾಣೆಗಳನ್ನು ಬಲಪಡಿಸಲು ಆದ್ಯತೆ ನೀಡುವಂತೆಯೂ ಅವರು ಸೂಚಿಸಿದರು.

ಅಲ್ಲದೆ, ಅಪರಾಧಗಳನ್ನು ತ್ವರಿತವಾಗಿ ಪತ್ತೆ ಹಚ್ಚುವ ನಿಟ್ಟಿನಲ್ಲಿ ಫೊರೆನ್ಸಿಕ್ ಪ್ರಯೋಗಾಲಯಗಳನ್ನು ಬಲಪಡಿಸಲು ಕ್ರಮ ವಹಿಸಲಾಗುವುದು. ತುರ್ತು ಸ್ಪಂದನೆ ವ್ಯವಸ್ಥೆ ಯೋಜನೆಯಡಿ ವಾಹನ ಖರೀದಿಗೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ಕಾರಾಗೃಹಗಳಲ್ಲಿ ಕೋವಿಡ್-19 ಸಂದರ್ಭದಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅಪರಾಧ ಪ್ರಕರಣಗಳು ವರದಿಯಾಗಿಲ್ಲ. ಸುಪ್ರೀಂಕೋರ್ಟಿನ ನಿರ್ದೇಶನದನ್ವಯ 5005 ಮಂದಿಯನ್ನು ಜಾಮೀನಿನ ಮೇಲೆ ಹಾಗೂ ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಕಾರಾಗೃಹಗಳಲ್ಲಿ ಬಂಧಿಗಳ ದಟ್ಟಣೆಯನ್ನು ಶೇ. 110 ರಿಂದ ಶೇ. 95 ಕ್ಕೆ ಇಳಿಸಲಾಗಿದೆ ಎಂದು ಹೇಳಿದರು.

ಗೃಹ ಇಲಾಖೆಯಡಿ ಬರುವ ಎಲ್ಲ ಇಲಾಖೆಗಳ ವಿವಿಧ ಮೂಲ ಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ವಸ್ತುಸ್ಥಿತಿ ಆಧರಿಸಿ, ಪ್ರಸ್ತಾವನೆ ಸಲ್ಲಿಸುವಂತೆಯೂ ಮುಖ್ಯಮಂತ್ರಿ ಸೂಚಿಸಿದರು.

ರಾಜ್ಯದಲ್ಲಿ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಬೃಹತ್ ಮೊತ್ತದ ಅನುದಾನವನ್ನು ಬ್ಯಾಂಕಿನಲ್ಲಿ ಠೇವಣಿ ಇಡುವ ಸಂದರ್ಭದಲ್ಲಿ ಯಾವುದೇ ರೀತಿಯ ದುರುಪಯೋಗವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ದುರುಪಯೋಗಗೊಂಡ ಪ್ರಕರಣಗಳಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂದು  ಸೂಚಿಸಿದರು.

ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕರಾದ ಪ್ರವೀಣ್ ಸೂದ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು