ಸೋಮವಾರ, ಮೇ 17, 2021
21 °C

ಕಟ್ಟಡ ನಿರ್ಮಾಣಕ್ಕೆ ನಿರ್ಬಂಧ: ಹೈಕೋರ್ಟ್‌ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಘನತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ದಿಸೆಯಲ್ಲಿ ತಕ್ಕ ಕ್ರಮ ಕೈಗೊಳ್ಳದೇ ಹೋದರೆ, ಹೊಸ ಕಟ್ಟಡಗಳ ನಿರ್ಮಾಣಕ್ಕೆ ನಿರ್ಬಂಧ ಹೇರಬೇಕಾಗುತ್ತದೆ’ ಎಂಬ ಎಚ್ಚರಿಕೆಯನ್ನು ಹೈಕೋರ್ಟ್‌ ಪುನರುಚ್ಚರಿಸಿದೆ.

ಈ ಕುರಿತಂತೆ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಬಿಬಿಎಂಪಿಯ ಕಾರ್ಯವೈಖರಿಗೆ ಕಿಡಿ ಕಾರಿದ ನ್ಯಾಯಪೀಠ, ‘ನಗರ ವ್ಯಾಪ್ತಿಯಲ್ಲಿ ಪ್ರತಿದಿನ 4,200 ಟನ್ ಕಸ ಸಂಗ್ರಹವಾಗುತ್ತಿದ್ದು, ಅದರಲ್ಲಿ 1,500 ಟನ್ ಮಾತ್ರ ಸಂಸ್ಕರಣೆ ಮಾಡಲಾಗುತ್ತಿದೆ. ಉಳಿದ 2,700 ಟನ್ ತ್ಯಾಜ್ಯವನ್ನು ಅಕ್ರಮವಾಗಿ ಸುರಿಯಲಾಗುತ್ತಿದೆ ಎಂಬ ಅಂಶ ಗಮನಿಸಿದರೆ ಬಿಬಿಎಂಪಿ, ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಜಾರಿಗೊಳಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದೇ ಅರ್ಥ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.

‘ಈ ವಿಷಯದಲ್ಲಿ ರಾಜ್ಯ ಸರ್ಕಾರವು ಬಿಬಿಎಂಪಿಗೆ ನೆರವು ನೀಡಬೇಕು ಎಂದು ಸೂಚಿಸಲಾಗಿತ್ತಾದರೂ ಸರ್ಕಾರ ಕೂಡಾ ಯಾವುದೇ ಮುಂದಡಿ ಇಟ್ಟಂತೆ ಕಾಣುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿತು.

ಇದಕ್ಕೆ ಅಡ್ವೊಕೇಟ್‌ ಜನರಲ್ ಪ್ರಭುಲಿಂಗ ಕೆ.ನಾವದಗಿ, ‘ಸರ್ಕಾರ ನಿಶ್ಚಿತವಾಗಿಯೂ ನೆರವು ನೀಡಲಿದ್ದು, ಇನ್ನಷ್ಟು ಕಾಲಾವಕಾಶ ನೀಡಬೇಕು’ ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಮುಂದಿನ ವಿಚಾರಣೆ ವೇಳೆಗೆ ಸಮರ್ಪಕ ಕ್ರಮ ಕೈಗೊಳ್ಳದೇ ಹೋದರೆ, ಹೊಸ ಕಟ್ಟಡಗಳ ನಿರ್ಮಾಣಕ್ಕೆ ನಿರ್ಬಂಧ ಹೇರಬೇಕಾಗುತ್ತದೆ’ ಎಂದು ಬಿಬಿಎಂಪಿಗೆ ಎಚ್ಚರಿಸಿತು.

ಇದೇ ವೇಳೆ, ‘ಬಿಬಿಎಂಪಿಯನ್ನು ವಿಸರ್ಜನೆ ಮಾಡಿ ಆಡಳಿತಾಧಿಕಾರಿ ನೇಮಿಸಬೇಕು’ ಎಂಬ ಅರ್ಜಿದಾರರ ಪರ ವಕೀಲರ ಮನವಿಯನ್ನು ನ್ಯಾಯಪೀಠ ತಳ್ಳಿ ಹಾಕಿತು.

ವಸ್ತುಸ್ಥಿತಿ ವರದಿಗೆ ತಾಕೀತು: ‘2019ರ ಜನವರಿ 1ರಿಂದ 2020ರ ಜನವರಿ 31ರವರೆಗೆ ಸಂಗ್ರಹವಾಗಿರುವ ತ್ಯಾಜ್ಯವೆಷ್ಟು, ಎಷ್ಟನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗಿದೆ, ಸಂಸ್ಕರಣೆಗೆ ಕೈಗೊಂಡಿರುವ ಕ್ರಮಗಳೇನು ಎಂಬ ಬಗ್ಗೆ ಫೆಬ್ರುವರಿ 17ರೊಳಗೆ ಸಮಗ್ರ ವಿವರಣೆ ಸಲ್ಲಿಸಬೇಕು’ ಎಂದು ನ್ಯಾಯಪೀಠ ಬಿಬಿಎಂಪಿಗೆ ತಾಕೀತು ಮಾಡಿದೆ.

‘ಮಾಲಿನ್ಯ ನಿಯಂತ್ರಣ ಪಾಲಿಸದೇ ಇರುವ ಬಿಬಿಎಂಪಿ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ ಎಂಬ ಬಗ್ಗೆ ಮುಂದಿನ ವಿಚಾರಣೆ ವೇಳೆಗೆ ಪ್ರಮಾಣ ಪತ್ರ ಸಲ್ಲಿಸಿ’ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೂ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು