ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳಿಗೆ 2 ಜೊತೆ ಸಮವಸ್ತ್ರ: ಸಿ.ಎಂ.

Last Updated 7 ಜೂನ್ 2019, 19:46 IST
ಅಕ್ಷರ ಗಾತ್ರ

ಬೆಂಗಳೂರು: ಈ ಶೈಕ್ಷಣಿಕ ಸಾಲಿನಲ್ಲಿ ಶಾಲಾ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ ವಿತರಿಸಬೇಕು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಶುಕ್ರವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಸೂಚನೆ ನೀಡಿದರು.

ಕಳೆದ ವರ್ಷ ವಿದ್ಯಾರ್ಥಿಗಳಿಗೆ ಒಂದು ಜೊತೆ ಸಮವಸ್ತ್ರವನ್ನು ವಿತರಿಸಲಾಗಿತ್ತು. ಎರಡನೇ ಜೊತೆ ಸಮವಸ್ತ್ರಕ್ಕೆ ವರ್ಷದ ಕೊನೆಯಲ್ಲಿ ಆದೇಶ ನೀಡಲಾಗಿತ್ತು. ಆದರೆ, ಬಹುಪಾಲು ಮಕ್ಕಳಿಗೆ ಸಮವಸ್ತ್ರ ತಲುಪಿರಲಿಲ್ಲ. ಆದ್ದರಿಂದ ಈ ವರ್ಷ ಆರಂಭದಲ್ಲೇ ಎರಡು ಜೊತೆ ಸಮವಸ್ತ್ರಗಳನ್ನು ವಿತರಿಸಬೇಕು ಎಂದು ಮುಖ್ಯಮಂತ್ರಿ ಖಡಕ್‌ ಸೂಚನೆ ನೀಡಿದರು.

ಪ್ರೌಢ ಶಿಕ್ಷಣ ಮತ್ತು ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಗಳನ್ನು ವಿಲೀನಗೊಳಿಸಿ, ಒಂದೇ ಮಂಡಳಿಯ ಮೂಲಕ 10 ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಚರ್ಚಿಸಿ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆಯೂ ಮುಖ್ಯಮಂತ್ರಿ ಸೂಚಿಸಿದರು.

ಪರೀಕ್ಷಾ ವಿಧಾನ ಬದಲಾವಣೆ: ಮಕ್ಕಳ ಆಲೋಚನಾ ಮತ್ತು ಅನ್ವಯಿಕ ಶಕ್ತಿಯನ್ನು(Higher order thinking) ಹೆಚ್ಚಿಸಲು ಪರೀಕ್ಷಾ ವಿಧಾನದಲ್ಲಿ ಸೂಕ್ತ ಬದಲಾವಣೆ ತರಲು ಕ್ರಮ ತೆಗೆದುಕೊಳ್ಳುವಂತೆಯೂ ಅಧಿಕಾರಿಗಳಿಗೆ ತಿಳಿಸಿದರು.

ವಿದ್ಯಾರ್ಥಿಗಳ ಕಲಿಕೆಯ ಮಟ್ಟದ ಕುರಿತು ಏಕ ಕಾಲದಲ್ಲಿ 40 ಲಕ್ಷ ಮಕ್ಕಳ ಮೌಲ್ಯಮಾಪನ ನಡೆಸಲಾಗಿದೆ.ಈ ಮೌಲ್ಯಮಾಪನದ ಆಧಾರದಲ್ಲಿ ಕಲಿಕೆಯಲ್ಲಿ ಹಿಂದಿರುವ ಸುಮಾರು 12 ಲಕ್ಷಕ್ಕೂ ಹೆಚ್ಚು ಮಕ್ಕಳನ್ನು ಗುರುತಿಸಿ ಕಲಿಕೆ ಸರಿಪಡಿಸಲು ಪರಿಹಾರ ಬೋಧನೆಗೆ ಕ್ರಮ ತೆಗೆದುಕೊಳ್ಳಲು ಸೂಚಿಸಲಾಯಿತು.

ಪೂರ್ವ ಪ್ರಾಥಮಿಕ ಶಾಲೆಗಳನ್ನು ತೆರೆಯುವ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಜಂಟಿ ಸಭೆ ನಡೆಸಲು ತೀರ್ಮಾನಿಸಲಾಯಿತು.

ಶಿಕ್ಷಕರು ಸೇವಾ ವಿಷಯಗಳಿಗೆ ಸರ್ಕಾರಿ ಕಚೇರಿಗಳಿಗೆ ಓಡಾಡುವುದನ್ನು ತಪ್ಪಿಸಲು ಸೌಲಭ್ಯಗಳನ್ನು ಆನ್‌ಲೈನ್‌ನಲ್ಲಿ ನೀಡುವ ತಂತ್ರಾಂಶ ಮತ್ತು ಅದಕ್ಕಾಗಿ ನಡೆಸಿರುವ ಪೂರ್ವ ಸಿದ್ಧತೆಗಳನ್ನು ಮುಖ್ಯಮಂತ್ರಿ ಪರಿಶೀಲಿಸಿದರು.

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿದ ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಕುರಿತಾಗಿ ರಾಜ್ಯ ಸರ್ಕಾರದ ಅಭಿಪ್ರಾಯ ತಿಳಿಸಲು ಶಿಕ್ಷಣ ತಜ್ಞರು, ಪೋಷಕರು, ಶಾಲಾಭಿವೃದ್ಧಿ ಸಮಿತಿಗಳು ಮತ್ತಿತರ ಭಾಗೀದಾರರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT