ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಗತಿ ಪರಿಶೀಲನಾ ಸಭೆಗೂ ನಿರ್ಬಂಧ

ಅನುಮತಿ ಇಲ್ಲದೆ ಮುಖ್ಯ ಕಾರ್ಯದರ್ಶಿಯೂ ಸಭೆ ನಡೆಸುವಂತಿಲ್ಲ: ಸೂಚನೆ
Last Updated 5 ಮೇ 2019, 19:51 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣೆಯ ನೀತಿಸಂಹಿತೆ ಮುಗಿಯುವವರೆಗೆ (ಮೇ 27ರವರೆಗೆ) ರಾಜ್ಯ ಸರ್ಕಾರದ ಅಧಿಕಾರಿಗಳು ಪ್ರಗತಿ ಪರಿಶೀಲನೆ ಸಭೆ ಹಾಗೂ ವಿಡಿಯೊ ಕಾನ್ಫರೆನ್ಸ್‌ಗಳನ್ನು ನಡೆಸುವಂತಿಲ್ಲ ಎಂದು ಚುನಾವಣಾ ಆಯೋಗ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಈ ಸಂಬಂಧ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್‌ ಕುಮಾರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ಪತ್ರ ಬರೆದಿದ್ದಾರೆ. ಆಯೋಗದಿಂದ ಅನುಮತಿ ಪಡೆಯದೆ ಮುಖ್ಯ ಕಾರ್ಯದರ್ಶಿಯೂ ಸಭೆ ನಡೆಸುವಂತಿಲ್ಲ ಎಂದು ಸೂಚಿಸಿದ್ದಾರೆ.

ಮತದಾನ ಮುಗಿದ ಬಳಿಕ ಮೂಲಸೌಕರ್ಯ ಕಾಮಗಾರಿಗಳಿಗೆ ಟೆಂಡರ್‌ ಕರೆಯುವುದಕ್ಕೆ ಆಯೋಗ ಒಪ್ಪಿಗೆ ನೀಡಿತ್ತು. ಈ ನಡುವೆ, ಸಚಿವರು ಪ್ರಗತಿ ಪರಿಶೀಲನೆ ಸಭೆಗಳನ್ನು ನಡೆಸಲು ಮುಂದಾಗಿದ್ದರು. ಇದಕ್ಕೆ ಆಯೋಗ ಒಪ್ಪಿಗೆ ನೀಡಿರಲಿಲ್ಲ. ಬರ ಪರಿಹಾರ ಕಾಮಗಾರಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಸಬಹುದು ಎಂದು ಆಯೋಗ ಸ್ಪಷ್ಟಪಡಿಸಿತ್ತು. ಒಂದು ವಾರದಲ್ಲಿ ಸರಣಿ ಸಭೆಗಳನ್ನು ನಡೆಸಿ ಬರ ಕಾಮಗಾರಿಗೆ ಚುರುಕು ಮುಟ್ಟಿಸಿದ್ದರು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜತೆಗೆ ವಿಡಿಯೊ ಕಾನ್ಫರೆನ್ಸ್‌ಗಳನ್ನು ನಡೆಸಿದ್ದರು. ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ್ದರು.

‘ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿ ಸರ್ಕಾರದ ಭವಿಷ್ಯ ತೂಗುಯ್ಯಾಲೆಯಲ್ಲಿದೆ. ಅದಕ್ಕಾಗಿ ಈಗಲೇ ವಿವಿಧ ಕಾಮಗಾರಿಗಳಿಗೆ ವೇಗ ನೀಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು’ ಎಂದು ಒತ್ತಾಯಿಸಿ ಆಯೋಗಕ್ಕೆ ದೂರು ಬಂದಿತ್ತು.

‘ಚುನಾವಣೆಯ ಮತದಾನವಷ್ಟೇ ಮುಗಿದಿದೆ. ಜಿಲ್ಲಾ ಚುನಾವಣಾಧಿಕಾರಿಗಳು, ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಚುನಾವಣಾ ಕೆಲಸ ಇನ್ನೂ ಮುಗಿದಿಲ್ಲ. ಹೀಗಾಗಿ, ಚುನಾವಣಾ ಕೆಲಸ ಮುಕ್ತಾಯವಾಗುವ ವರೆಗೆ ವಿಡಿಯೊ ಕಾನ್ಫರೆನ್ಸ್ ಹಾಗೂ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸಬಾರದು’ ಎಂದು ಸಂಜೀವ್‌ ಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT