ಶುಕ್ರವಾರ, ಸೆಪ್ಟೆಂಬರ್ 20, 2019
27 °C

ಇಂಗ್ಲಿಷ್‌ ಮಾಧ್ಯಮ ತರಗತಿ ನಿಲ್ಲಿಸಿ: ಸಿಎಂಗೆ ಚಿಂತಕರ ನಿಯೋಗ ಮನವಿ

Published:
Updated:
Prajavani

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಆರಂಭಿಸಿರುವ ಇಂಗ್ಲಿಷ್ ಮಾಧ್ಯಮದ ತರಗತಿಗಳನ್ನು ಸ್ಥಗಿತಗೊಳಿಸಬೇಕು ಎಂದು ಸಾಹಿತಿ ಮತ್ತು ಚಿಂತಕರ ನಿಯೋಗವೊಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದೆ.

ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಸದಸ್ಯರ ನಿಯೋಗ ಶನಿವಾರ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿತು.

ಈ ಸಂದರ್ಭದಲ್ಲಿ ಮಾತನಾಡಿದ ಕವಿ ದೊಡ್ಡರಂಗೇಗೌಡ, ಹಿಂದಿನ ಸರ್ಕಾರವು ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮದ ತರಗತಿಗಳನ್ನು ಆರಂಭಿಸಿದೆ. ಇದರಿಂದ ರಾಜ್ಯದಲ್ಲಿ ಕನ್ನಡ ಭಾಷೆ ಅವನತಿಯತ್ತ ಸಾಗುವಂತಾಗಿದೆ. ಭವಿಷ್ಯದಲ್ಲಿ ಗಂಭೀರ ಪರಿಣಾಮ ಬೀರುವುದರಿಂದ ಇಂಗ್ಲಿಷ್‌ ಮಾಧ್ಯಮದ ತರಗತಿ ನಿಲ್ಲಿಸಿ, ಕನ್ನಡ ಮಾಧ್ಯಮದ ತರಗತಿಗಳನ್ನು ಆರಂಭಿಸಬೇಕು ಎಂದು ಒತ್ತಾಯಿಸಿದರು.

ಡಾ.ಚಿದಾನಂದಮೂರ್ತಿ ಮಾತನಾಡಿ, ಸರ್ಕಾರಿ ಶಾಲೆಗಳಿಗಿಂತ ಖಾಸಗಿ ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ದಾಖಲಾಗುತ್ತಿದ್ದಾರೆ. ಖಾಸಗಿ ಶಾಲೆಗಳಲ್ಲೂ ಕನ್ನಡ ಮಾಧ್ಯಮದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಗೊ.ರು.ಚನ್ನಬಸಪ್ಪ ಮಾತನಾಡಿ, ಒಂದನೇ ತರಗತಿಯಿಂದ 7 ನೇ ತರಗತಿವರೆಗೆ ಏಕ ಪ್ರಕಾರದ ಶಿಕ್ಷಣ ವ್ಯವಸ್ಥೆ ಇರಬೇಕು ಎಂದು ಒತ್ತಾಯಿಸಿದರು.

Post Comments (+)