ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಚೋದನಾಕಾರಿ ಭಾಷಣ: ಶಾಸಕ ಯು.ಟಿ ಖಾದರ್‌ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು

Last Updated 23 ಡಿಸೆಂಬರ್ 2019, 2:31 IST
ಅಕ್ಷರ ಗಾತ್ರ

ಮಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಇದೇ 17ರಂದು ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್‌ ಶಾಸಕ ಯು.ಟಿ. ಖಾದರ್‌ ವಿರುದ್ಧ ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ ದೇಶದ್ರೋಹದ ಆಪಾದನೆ ಹೊರಿಸಲಾಗಿದೆ.

ಖಾದರ್‌ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿ ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂದೇಶ್‌ ಕುಮಾರ್‌ ಶೆಟ್ಟಿ ನಗರ ಪೊಲೀಸ್‌ ಕಮಿಷನರ್‌ ಕಚೇರಿಗೆ ಡಿ.19 ರಂದು ದೂರು ಸಲ್ಲಿಸಿದ್ದರು. ಅದೇ ದಿನ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್‌ ಠಾಣೆಯಲ್ಲಿ ಖಾದರ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

‘ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದರೆ ಕರ್ನಾಟಕ ಹೊತ್ತಿ ಉರಿಯುತ್ತದೆ ಎಂದು ಶಾಸಕ ಖಾದರ್‌ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಅವರ ಭಾಷಣ ರಾಜ್ಯದಲ್ಲಿ ಹಿಂಸೆಗೆ ಪ್ರಚೋದನೆ ನೀಡುತ್ತಿದೆ. ಹಿಂದೂ ಮತ್ತು ಮುಸ್ಲಿಮರ ನಡುವೆ ದ್ವೇಷ ಬಿತ್ತುವಂತಿದೆ’ ಎಂದು ದೂರು ನೀಡಲಾಗಿತ್ತು. ಖಾದರ್‌ ವಿರುದ್ಧ ಐಪಿಸಿ ಸೆಕ್ಷನ್‌ 153ಎ (ಪ್ರಚೋದನಕಾರಿ ಭಾಷಣದ ಮೂಲಕ ದ್ವೇಷ ಬಿತ್ತುವುದು), ಸೆಕ್ಷನ್‌ 124ಎ (ದೇಶದ್ರೋಹ) ಮತ್ತು ಸೆಕ್ಷನ್‌ 153 (ಗಲಭೆ ಅಥವಾ ದೊಂಬಿ ಸೃಷ್ಟಿಸುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಖಾದರ್‌,‘ನಾನು ಏನನ್ನೂ ಹೇಳಲು ಬಯಸುವುದಿಲ್ಲ. ಯಾರು ದೇಶಪ್ರೇಮಿಗಳು? ಯಾರು ದೇಶದ್ರೋಹಿಗಳು? ಎಂಬುದನ್ನು ಜನರೇ ನಿರ್ಧರಿಸುತ್ತಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT