ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುವರ್ಣ ವಿಧಾನಸೌಧದಲ್ಲಿ ಮೊದಲ ಕಚೇರಿ ಆರಂಭ

ಮಾಹಿತಿ ಆಯೋಗದ ಬೆಳಗಾವಿ ಪೀಠ ಕಾರ್ಯಾರಂಭ
Last Updated 19 ಜೂನ್ 2020, 11:06 IST
ಅಕ್ಷರ ಗಾತ್ರ

ಬೆಳಗಾವಿ: ರಾಜ್ಯ ಮಾಹಿತಿ ಆಯೋಗದ ಬೆಳಗಾವಿ ಪೀಠದ ಕಚೇರಿಯನ್ನು ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಆರಂಭಿಸಲಾಗಿದೆ.

ಇದರೊಂದಿಗೆ, ಸರ್ಕಾರಿ ಕಚೇರಿಗಳನ್ನು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸಬೇಕು ಎಂಬ ಉತ್ತರ ಕರ್ನಾಟಕದ ಜನರ ಬಹುದಿನಗಳ ಬೇಡಿಕೆಗೆ ಸ್ಪಂದನೆ ದೊರೆತಂತಾಗಿದೆ.

ಈ ಬಗ್ಗೆ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಯೋಗದ ಬೆಳಗಾವಿ ಪೀಠದ ಆಯುಕ್ತೆ ಬಿ.ವಿ. ಗೀತಾ, ‘ಪೀಠದ ನ್ಯಾಯಾಲಯ ಕಲಾಪವನ್ನು ಜೂನ್ 22ರಿಂದ ಆರಂಭಿಸಲಾಗುವುದು’ ಎಂದು ಪ್ರಕಟಿಸಿದರು.

‘ಇಲ್ಲಿ ಪೀಠವು ಮಾರ್ಚ್ 3ರಿಂದ ಕಾರ್ಯಾರಂಭ ಮಾಡಬೇಕಿತ್ತು. ಆದರೆ, ಕೋವಿಡ್–19 ಸೋಂಕಿನ ಹಿನ್ನೆಲೆಯಲ್ಲಿ ವಿಳಂಬವಾಯಿತು. ಸರ್ಕಾರ ಮತ್ತು ಉತ್ತರ ಕರ್ನಾಟಕದ ಜನರ ಆಶೋತ್ತರದಂತೆ ನಾವು ಮೊದಲ ಹೆಜ್ಜೆ ಇಟ್ಟಿದ್ದು, ಸುವರ್ಣ ವಿಧಾನಸೌಧದಲ್ಲಿ ಕಾರ್ಯಕಲಾಪ ಆರಂಭಿಸುತ್ತಿದ್ದೇವೆ. ಈ ಮೂಲಕ ಈ ಭಾಗದ ಜನರ ಬಹುದಿನಗಳ ಆಶಯ ಈಡೇರಿದಂತಾಗಿದೆ’ ಎಂದು ಹೇಳಿದರು.

ಪೀಠಕ್ಕೆ ಏಳು ಜಿಲ್ಲೆಯ ವ್ಯಾಪ್ತಿ:‘ಪೀಠದ ವ್ಯಾಪ್ತಿಯಲ್ಲಿ ಬೆಳಗಾವಿ ವಿಭಾಗದ 7 ಜಿಲ್ಲೆಗಳು ಬರಲಿವೆ. ಈವರೆಗೆ ಒಟ್ಟಾರೆ 4ಸಾವಿರ ಪ್ರಕರಣಗಳು ಬಾಕಿ ಉಳಿದಿವೆ. ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಪ್ರಕರಣಗಳನ್ನು ಪೀಠವು ನಿರ್ವಹಿಸಲಿದೆ. ಕೊರೊನಾ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಅಂತರ ಕಾಯ್ದುಕೊಳ್ಳಬೇಕಾಗಿದೆ. ಹೀಗಾಗಿ, ಆರಂಭದಲ್ಲಿ ಕಡಿಮೆ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗುವುದು. ಹಳೆಯ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ ನೀಡಲಾಗುವುದು’ ಎಂದು ತಿಳಿಸಿದರು.

‘ಅಧಿಕಾರಿಗಳು ಮತ್ತು ಮೇಲ್ಮನವಿದಾರರ ಸಮ್ಮುಖದಲ್ಲಿ ತ್ವರಿತವಾಗಿ ಪ್ರಕರಣಗಳ ವಿಲೇವಾರಿ ಮಾಡುವ ಚಿಂತನೆ ಇದೆ. ಇಲ್ಲಿ ವಿಧಾನಮಂಡಲ ಅಧಿವೇಶನ ನಡೆಯುವ ಸಂದರ್ಭದಲ್ಲಿ ಮಾಹಿತಿ ಆಯೋಗದ ಬೆಳಗಾವಿ ಪೀಠದ ಕಾರ್ಯಕಲಾಪ ನಡೆಯುವುದಿಲ್ಲ. ಆ ಅವಧಿಯಲ್ಲಿ ಪೀಠದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಅಧಿಕಾರಿಗಳಿಗೆ ಜಾಗೃತಿ ಕಾರ್ಯಾಗಾರ ಆಯೋಜಿಸಲಾವುದು’ ಎಂದರು.

ಅಧಿವೇಶನವಿದ್ದಾಗ ಇಲ್ಲ:‘ಅಧಿವೇಶನ ಸಂದರ್ಭದಲ್ಲಿ ಆಯಾ ಜಿಲ್ಲೆಗಳಲ್ಲಿ ಕಲಾಪ ನಡೆಸಲಾಗುವುದು. ಪೀಠದ ಕಾರ್ಯಕಲಾಪಗಳ ಸುಗಮ ನಿರ್ವಹಣೆಗೆ ಶಾಖಾಧಿಕಾರಿ ಹಾಗೂ ಅಧೀನ ಕಾರ್ಯದರ್ಶಿ ಹುದ್ದೆಯ ಅಗತ್ಯವಿದೆ. ಒದಗಿಸುವಂತೆ ಕೋರಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ನ್ಯಾಯಾಲಯ ನಡೆಸುವುದಕ್ಕೆ ಬೇಕಾದ ಸಿಬ್ಬಂದಿಯನ್ನು ಸರ್ಕಾರ ಒದಗಿಸಿದೆ’ ಎಂದು ವಿವರಿಸಿದರು.

‘ಸುವರ್ಣ ವಿಧಾನಸೌಧ ನಗರದಿಂದ ದೂರದಲ್ಲಿರುವುದರಿಂದ ಸದ್ಯಕ್ಕೆ ನಿತ್ಯ ಮೂರು ಬಸ್‌ಗಳ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಕಲ್ಪಿಸಿದೆ. ಹಂತ ಹಂತವಾಗಿ ಬಸ್‌ಗಳ ಸಂಖ್ಯೆ ಹೆಚ್ಚಿಸಲು ಯೋಜಿಸಲಾಗಿದೆ. ಕಲಾಪಕ್ಕೆ ಬರುವವರು ಸಮನ್ಸ್ ಪ್ರತಿ ತೋರಿಸಿದರೆ ಮಾತ್ರ ಪ್ರವೇಶ ನೀಡುವಂತೆ ಭದ್ರತಾ ಸಿಬ್ಬಂದಿಗೆ ತಿಳಿಸಲಾಗಿದೆ. ಮುಂದಿನ ದಿನಗಳಲ್ಲಿ ಇಲ್ಲಿಗೆ ಇತರ ಇಲಾಖೆಗಳ ಕಚೇರಿಗಳು ಸಹ ಬರುವಂತಾಗಲಿ ಎನ್ನುವುದು ನನ್ನ ಆಶಯವಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT