ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರದ ನೆರೆ ಪರಿಹಾರ ವಿಳಂಬ: ಬಹಿರಂಗ ಕ್ಷಮೆ ಕೇಳಿದ ಶ್ರೀರಾಮುಲು

Last Updated 4 ಅಕ್ಟೋಬರ್ 2019, 8:55 IST
ಅಕ್ಷರ ಗಾತ್ರ

ಚಿತ್ರದುರ್ಗ: ಕೇಂದ್ರ ಸರ್ಕಾರ ನೆರೆ ಪರಿಹಾರ ಮಂಜೂರಾತಿಯಲ್ಲಿ ಅನುಸರಿಸುತ್ತಿರುವ ವಿಳಂಬ ನೀತಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಬಹಿರಂಗ ಕ್ಷಮೆಯಾಚಿಸಿದ್ದಾರೆ.

ಹಿರಿಯೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರವಾಹ ಪರಿಸ್ಥಿತಿಯಿಂದ ಉಂಟಾಗಿರುವ ನಷ್ಟವನ್ನು ರಾಜ್ಯ ಸರ್ಕಾರ ಅಂದಾಜು ಮಾಡಿ ಕೇಂದ್ರಕ್ಕೆ ವರದಿ ಕಳುಹಿಸಿತ್ತು. ಅಂದಾಜು ₹ 3,500 ಕೋಟಿ ನೀಡುವಂತೆ ಕೇಳಿಕೊಂಡಿದೆ. ಈಗಾಗಲೇ ಪರಿಹಾರ ಮಂಜೂರು ಆಗಬೇಕಿತ್ತು. ಮಂಜೂರಾತಿಯಲ್ಲಿ ಆಗುತ್ತಿರುವ ವಿಳಂಬಕ್ಕೆ ಜನರ ಕ್ಷಮೆ ಯಾಚಿಸುತ್ತೇನೆ’ ಎಂದು ಹೇಳಿದರು.

‘ಕೇಂದ್ರದ ತಂಡವೊಂದು ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸಕ್ಕೆ ತೆರಳಿದ್ದರಿಂದ ವಿಳಂಬವಾಗಿದೆ. ಇನ್ನೂ ಮೂರು ದಿನಗಳಲ್ಲಿ ನೆರೆ ಪರಿಹಾರ ಸಿಗಲಿದೆ ಎಂಬ ವಿಶ್ವಾಸವಿದೆ’ ಎಂದರು.

‘ನೆರೆ ಸಂತ್ರಸ್ತರ ವಿಚಾರದಲ್ಲಿ ರಾಜಕಾರಣ ಮಾಡುವುದು ತಪ್ಪು. ಪಕ್ಷಾತೀತವಾಗಿ ಸಂತ್ರಸ್ತರಿಗೆ ಸ್ಪಂದಿಸುವ ಅಗತ್ಯವಿದೆ. ರಾಜಕೀಯ ಮಾಡುವುದನ್ನು ಸಿದ್ದರಾಮಯ್ಯ ನಿಲ್ಲಿಸಬೇಕು. ಎಲ್ಲ ಪಕ್ಷದ ನಿಯೋಗವನ್ನು ಕೇಂದ್ರಕ್ಕೆ ಕರೆದೊಯ್ಯಲು ಸರ್ಕಾರ ಸಿದ್ಧವಿದೆ’ ಎಂದು ನುಡಿದರು.

ಸಂಸದ ಎ.ನಾರಾಯಣಸ್ವಾಮಿ, ‘ನೆರೆ ಸಂತ್ರಸ್ತರು ಸಂಕಷ್ಟದಲ್ಲಿದ್ದಾರೆ. ಅವರ ಬಗ್ಗೆ ಅಸಂಬದ್ಧ ಹೇಳಿಕೆ ಕೊಡುವುದನ್ನು ಯಾರೂ ಮಾಡಬಾರದು. ಕೇಂದ್ರ ಸರ್ಕಾರ ರಾಜ್ಯದ ವರದಿಯನ್ನು ತಿರಸ್ಕರಿಸಿಲ್ಲ. ತಾತ್ಕಾಲಿಕ ಪರಿಹಾರ ನೀಡುವುದು ಕೇಂದ್ರ ಸರ್ಕಾರಕ್ಕೆ ಕಷ್ಟವಾಗುವುದಿಲ್ಲ. ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ಮಾಡುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT