ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಣಿಗ ಗುರುಪೀಠ ಅನುದಾನ ದುರ್ಬಳಕೆ ಆರೋಪ: ರಾಜ್ಯ ಸರ್ಕಾರಕ್ಕೆ ನೋಟಿಸ್‌

Last Updated 6 ಫೆಬ್ರುವರಿ 2019, 19:23 IST
ಅಕ್ಷರ ಗಾತ್ರ

ಬೆಂಗಳೂರು: ‘ಗಾಣಿಗ ಜನಾಂಗದ ಗುರುಪೀಠಕ್ಕೆ ನೀಡಿದ ₹ 5 ಕೋಟಿ ಅನುದಾನ ಮತ್ತು ವಿಶ್ವ ಗಾಣಿಗರ ಸಮುದಾಯ ಟ್ರಸ್ಟ್‌ಗೆ 8 ಎಕರೆ ಜಮೀನನನ್ನು ಕಾನೂನು ಬಾಹಿರವಾಗಿ ನೀಡಲಾಗಿದ್ದು ಈ ಕುರಿತು ಸಿಐಡಿ ತನಿಖೆಗೆ ನಿರ್ದೇಶಿಸಬೇಕು’ ಎಂದು ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗಿದೆ.

ಎನ್‌.ಹನುಮೇಗೌಡ ಸಲ್ಲಿಸಿರುವ ಪಿಐಎಲ್‌ ಅನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿ‌ನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಬೆಂಗಳೂರು ನಗರ ಜಿಲ್ಲಾಧಿಕಾರಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಅಪರಾಧ ತನಿಖಾ ವಿಭಾಗದ ಡಿಎಸ್‌ಪಿ, ವಿಶ್ವ ಗಾಣಿಗರ ಸಮುದಾಯ ಟ್ರಸ್ಟ್‌ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.

‘2011ರ ಫೆಬ್ರುವರಿಯಲ್ಲಿ ಗಾಣಿಗ ಜನಾಂಗದ ಗುರುಪೀಠಕ್ಕೆ ಬಜೆಟ್‌ನಲ್ಲಿ ₹ 5 ಕೋಟಿ ಮೀಸಲು ಇರಿಸಲಾಗಿತ್ತು. ಅಂತೆಯೇ ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ನಗರೂರು ಗ್ರಾಮದ ಸರ್ವೇ ನಂಬರ್ 112ರಲ್ಲಿ ಗೋಮಾಳದ ಎಂಟು ಎಕರೆ ಜಮೀನನ್ನು ವಿಶ್ವ ಗಾಣಿಗ ಸಮುದಾಯ ಟ್ರಸ್ಟ್ ಹೆಸರಿಗೆ ನೋಂದಣಿ ಮಾಡಿಕೊಡಲಾಗಿದೆ. ಈ ಟ್ರಸ್ಟ್‌ಗೆ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಆಗಿದ್ದ ಬಿ.ಜೆ.ಪುಟ್ಟಸ್ವಾಮಿ ಅಧ್ಯಕ್ಷರಾಗಿದ್ದರು. ಇವರು ತಮ್ಮ ಅಧಿಕಾರ ಬಳಸಿ ಈ ಜಮೀನು ಮಂಜೂರು ಮಾಡಿಸಿಕೊಂಡಿದ್ದಾರೆ’ ಎಂಬುದು ಅರ್ಜಿದಾರರ ಆರೋಪ.

ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದ ವಿರುದ್ಧದ ವಿಚಾರಣೆಗೆ ತಡೆ
ಬೆಂಗಳೂರು:
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ಭಕ್ತರಿಗೆ ಮೋಸ ಮತ್ತು ವಂಚನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಹಾಗೂ ಮುಂದಿನ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಈ ಕುರಿತಂತೆ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠ ಹಾಗೂ ಸಂಪುಟ ಟ್ರಸ್ಟ್‌ನ ಕಾರ್ಯನಿರ್ವಾಹಕ ಅಧಿಕಾರಿ ಆರ್. ಸಂತೋಷ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ದಕ್ಷಿಣ ಕನ್ನಡದ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ.

ಅರ್ಜಿದಾರರ ಪರ ವಕೀಲ ಎಂ. ಅರುಣ್ ಶ್ಯಾಮ್ ವಾದ ಮಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT