ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಕಲನ | ಪಂಚಭೂತಗಳಲ್ಲಿ ಲೀನರಾದ ಗಿರೀಶ ಕಾರ್ನಾಡ

Last Updated 11 ಜೂನ್ 2019, 4:31 IST
ಅಕ್ಷರ ಗಾತ್ರ

ಬೆಂಗಳೂರು:ಕನ್ನಡದ ನಾಟಕ ಸಾಹಿತಿ, ಪ್ರಸಿದ್ಧ ರಂಗಭೂಮಿ ತಜ್ಞ, ನಾಟಕಕಾರ, ಚಿತ್ರ ನಟ, ನಿರ್ದೇಶಕ ಗಿರೀಶ ಕಾರ್ನಾಡ ಅವರು ಸೋಮವಾರ ಮುಂಜಾನೆ ನಗರದ ಲ್ಯಾವೆಲ್ಲೆ ರಸ್ತೆಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು. ಕೆಲ ದಿನಗಳಿಂದ ಅನಾರೋಗ್ಯಪೀಡಿತರಾಗಿದ್ದ ಅವರು ಬಹು ಅಂಗಾಂಗ ವೈಫಲ್ಯದಿಂದ ಕೊನೆಯುಸಿರೆಳೆದರು.

ಬೈಯ್ಯಪ್ಪನಹಳ್ಳಿ ಸಮೀಪದ ಕಲ್ಲಪಳ್ಳಿ ವಿದ್ಯುತ್ ಚಿತಾಗಾರದಲ್ಲಿ ಮಧ್ಯಾಹ್ನ ಅಂತ್ಯ ಸಂಸ್ಕಾರ ನೆರವೇರಿತು. ಕಾರ್ನಾಡರು ವ್ಯಕ್ತಪಡಿಸಿದ್ದ ಅಪೇಕ್ಷೆಯಂತೆ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರವನ್ನು ಧಾರ್ಮಿಕ ವಿಧಿ ವಿಧಾನಗಳಿಲ್ಲದೇ ನೆರವೇರಿಸಲಾಯಿತು.

ಕಾರ್ನಾಡರ ಬದುಕು ಸಾಗಿ ಬಂದ ಹಾದಿ

ಗಿರೀಶ ಕಾರ್ನಾಡರು 1934 ಮೇ 19ರಂದು ಮಹಾರಾಷ್ಟ್ರದ ಮಾಥೇರದಲ್ಲಿ ಜನಿಸಿದರು. ಇವರ ತಂದೆ ರಘುನಾಥ ಕಾರ್ನಾಡ ಮುಂಬೈಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ತಾಯಿ ಕೃಷ್ಣಾಬಾಯಿ. ಬಾಲ್ಯವಿವಾಹವಾಗಿ ಒಂದು ಮಗುವಾದ ನಂತರ ವಿಧವೆಯಾಗಿದ್ದರು. ರಘುನಾಥರ ಆಸ್ಪತ್ರೆಯಲ್ಲಿ ಶುಶ್ರೂಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಈ ಸಂದರ್ಭ ಆಗಿನ ಸಾಮಾಜಿಕ ಕಟ್ಟುಪಾಡುಗಳ ವಿರುದ್ಧವಾಗಿ ರಘುನಾಥರು ಕೈಹಿಡಿದರು. ಈ ದಂಪತಿಗಳ ಮೂರನೇ ಮಗನಾಗಿ ಗಿರೀಶ ಜನಿಸಿದರು.

ಕಾರ್ನಾಡರ ಪ್ರಾಥಮಿಕ ಶಿಕ್ಷಣ ಉತ್ತರ ಕನ್ನಡದ ಶಿರಸಿಯಲ್ಲಿ, ಪ್ರೌಢಶಿಕ್ಷಣ ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ, ಹಾಗೂ ಪದವಿ ಶಿಕ್ಷಣ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಆಯಿತು. ಆ ಬಳಿಕ ಪ್ರತಿಷ್ಠಿತ ರೋಡ್ಸ್ ಸ್ಕಾಲರ್‌ಶಿಪ್ ಪಡೆದುಕೊಂಡು ಆಕ್ಸ್‌ಫರ್ಡ್‌ನಲ್ಲಿ ಹೆಚ್ಚಿನ ವ್ಯಾಸಂಗ ಮಾಡಿದರು. ಆಕ್ಸ್‌ಫರ್ಡ್‌ ಡಿಬೇಟ್ ಕ್ಲಬ್ಬಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಥಮ ಏಷ್ಯನ್‌ ಇವರು. ಮದ್ರಾಸಿನಲ್ಲಿ ನೌಕರಿಯಲ್ಲಿದ್ದ ಇವರು ಶಿಕಾಗೋ ವಿಶ್ವವಿದ್ಯಾಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಇಂಗ್ಲೆಂಡಿನಲ್ಲಿ ನೆಹರೂ ಸೆಂಟರಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪುಣೆ ಫಿಲ್ಮ್ ಇನ್ಸ್‌ಸ್ಟಿಟ್ಯೂಟಿನ ನಿರ್ದೇಶಕರಾಗಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಅಧ್ಯಕ್ಷರಾಗಿ ಕೂಡಾ ಅವರು ಕಾರ್ಯ ನಿರ್ವಹಿಸಿರುವರು.

ಕನ್ನಡ ಸಾಹಿತ್ಯದಲ್ಲಿ ನಾಟಕ ಕ್ಷೇತ್ರದ ಸಾಹಿತಿ ಎಂದು ಕರೆಯಲ್ಪಡುವ ಗಿರೀಶ ಕಾರ್ನಾಡ್, ಕನ್ನಡದಲ್ಲಿ ನಾಟಕ ರಚಿಸುತ್ತಾ ಇತರ ಭಾರತೀಯ ಭಾಷೆಗಳೊಡನೆ ಸಂಪರ್ಕವನ್ನಿಟ್ಟುಕೊಂಡು ನಟರಾಗಿ, ನಿರ್ದೇಶಕರಾಗಿ, ಸಾಂಸ್ಕ್ರತಿಕ ವಕ್ತಾರರಾಗಿ ಕೆಲಸ ಮಾಡಿದವರು.

ಯಯಾತಿ, ತುಘಲಕ್, ಹಯವದನ, ನಾಗಮಂಡಲ, ತಲೆದಂಡ, ಅಗ್ನಿ ಮತ್ತು ಮಳೆ, ಅಂಜುಮಲ್ಲಿಗೆ, ಹಿಟ್ಟಿನ ಹುಂಜ, ಟಿಪ್ಪುವಿನ ಕನಸುಗಳು ಮುಂತಾದವು ಕಾರ್ನಾಡರ ಪ್ರಮುಖ ನಾಟಕ ಕೃತಿಗಳು. ಅಲ್ಲದೆ ಹಲವಾರು ಭಾಷೆಗಳ ಚಲನಚಿತ್ರಗಳಲ್ಲಿ ನಟಿಸಿರುವ ಕಾರ್ನಾಡ್ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕರೂ ಹೌದು. ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಕಾಡು, ಒಂದಾನೊಂದು ಕಾಲದಲ್ಲಿ, ಕಾನೂರು ಹೆಗ್ಗಡತಿ, ಉತ್ಸವ್ ಮುಂತಾದ ಸಿನಿಮಾಗಳು; ಸೂಫಿ ಪಂಥ, ಕನಕ ಪುರಂದರ ಸಾಕ್ಷಚಿತ್ರಗಳನ್ನು ನಿರ್ದೇಶಿಸಿದ್ದಾರೆ.

ಜ್ಞಾನಪೀಠ ಪ್ರಶಸ್ತಿ

ಸಾಹಿತ್ಯ ಕ್ಷೇತ್ರದ ಸಾಧನೆಗೆ ಜ್ಞಾನಪೀಠ ಪ್ರಶಸ್ತಿ ಪಡೆದ ಕಾರ್ನಾಡರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ, ಪದ್ಮಶ್ರೀ, ಪದ್ಮಭೂಷಣ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಹಾಗೂ ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ.

ಕೊನೆ ಸಿನಿಮಾ ‘ಟೈಗರ್‌ ಜಿಂದಾ ಹೈ’

ಗಂಭೀರ ಪಾತ್ರಗಳನ್ನು ನಿಭಾಯಿಸುವ ಮೂಲಕ ಸಿನಿಮಾನಟನೆಯಲ್ಲೂ ಗುರುತಿಸಿಕೊಂಡಿದ್ದ ಕಾರ್ನಾಡರ ಕೊನೇ ಚಿತ್ರ ‘ಟೈಗರ್‌ ಜಿಂದಾ ಹೈ’. ಈ ಸಿನಿಮಾದಲ್ಲಿ ಕಾರ್ನಾಡರು ಬಾಲಿವುಡ್ ನಟ ಸಲ್ಮಾನ್‌ ಖಾನ್‌ ಅವರೊಂದಿಗೆ ನಟಿಸಿದ್ದರು. ಲಂಕೇಶರೊಂದಿಗೆ ನಟಿಸಿದ್ದ, ಕಾದಂಬರಿ ಆಧಾರಿತ ‘ಸಂಸ್ಕಾರ’ ಚಿತ್ರ ಭಾರಿ ಜನಪ್ರಿಯತೆ ಪಡೆದುಕೊಂಡಿತ್ತು.

ಇವುಗಳನ್ನೂ ಓದಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT