ಕೇಂದ್ರ ಚುನಾವಣಾ ಆಯೋಗದಲ್ಲಿ ಪರಿಹಾರ ಪಡೆಯಿರಿ: ಹೈಕೋರ್ಟ್

ಮಂಗಳವಾರ, ಏಪ್ರಿಲ್ 23, 2019
31 °C

ಕೇಂದ್ರ ಚುನಾವಣಾ ಆಯೋಗದಲ್ಲಿ ಪರಿಹಾರ ಪಡೆಯಿರಿ: ಹೈಕೋರ್ಟ್

Published:
Updated:

ಬೆಂಗಳೂರು: ‘ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಲ್.ಎಸ್. ತೇಜಸ್ವಿ ಸೂರ್ಯ ಅವರು, ಮಾಧ್ಯಮಗಳು ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ಪ್ರಕಟಿಸಿವೆ ಎಂದು ಕಂಡು ಬಂದರೆ ಅದನ್ನು ಕೇಂದ್ರ ಚುನಾವಣಾ ಆಯೋಗದ ಮುಂದೆ ಕೊಂಡೊಯ್ದು ಪರಿಹಾರ ಪಡೆಯಬಹುದು’ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

‘ಮಾಧ್ಯಮಗಳು ನನ್ನ ವಿರುದ್ಧ ಯಾವುದೇ ಮಾನಹಾನಿ ಸುದ್ದಿ ಪ್ರಕಟಿಸದಂತೆ ತಡೆ ನೀಡಬೇಕು’ ಎಂದು ಕೋರಿ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ನಗರದ ಸಿವಿಲ್‌ ಕೋರ್ಟ್‌ ಮಧ್ಯಂತರ ನಿರ್ಬಂಧ ವಿಧಿಸಿತ್ತು. ಇದಕ್ಕೆ ತಡೆ ನೀಡಬೇಕು ಎಂದು ಕೋರಿ, ದೆಹಲಿಯ ‘ಪ್ರಜಾಪ್ರಭುತ್ವ ಸುಧಾರಣಾ ಸಂಸ್ಥೆ’ ಅಧ್ಯಕ್ಷ ಪ್ರೊ.ತ್ರಿಲೋಚನ ಶಾಸ್ತ್ರಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಲೇವಾರಿ ಮಾಡಿದೆ.

‘ಮಾಧ್ಯಮಗಳು ಅವಹೇಳನಕಾರಿ ಅಲ್ಲದ ಸುದ್ದಿಗಳನ್ನು ಪ್ರಕಟಿಸಬಹುದು. ಒಂದು ವೇಳೆ ಪ್ರತಿವಾದಿ ತೇಜಸ್ವಿ ಸೂರ್ಯ ಅವರು ತಮ್ಮ ಮಾನಹಾನಿ ಆಗಿದೆ ಎಂದು ಕಂಡುಬಂದರೆ ಅದನ್ನು ಸೂಕ್ತ ವೇದಿಕೆಯಲ್ಲಿ ಪ್ರಶ್ನಿಸಬಹುದು’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅರ್ಜಿದಾರರ ಪರ ವಕೀಲ ಹರೀಶ್ ಬಿ.ನರಸಪ್ಪ ಹಾಗೂ ತೇಜಸ್ವಿ ಸೂರ್ಯ ಪರ ಹಿರಿಯ ವಕೀಲ ಅಶೋಕ ಹಾರನಹಳ್ಳಿ ವಾದ ಮಂಡಿಸಿದ್ದರು.

ಪ್ರಕರಣವೇನು?: ತೇಜಸ್ವಿ ಸೂರ್ಯ ಅವರ ಬಗ್ಗೆ ಮಹಿಳೆಯೊಬ್ಬರು ಮಾಡಿದ ಟ್ವೀಟ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಕುರಿತಂತೆ ತೇಜಸ್ವಿ ಸೂರ್ಯ ಸಿವಿಲ್‌ ನ್ಯಾಯಾಲಯದಲ್ಲಿ ಅಸಲು ದಾವೆ ಸಲ್ಲಿಸುವ ಮೂಲಕ ‘ನನ್ನ ವಿರುದ್ಧ ಮಾಧ್ಯಮಗಳು ಯಾವುದೇ ತಪ್ಪು, ದುರದ್ದೇಶಪೂರಿತ, ಮಾನಹಾನಿಗೊಳಿಸುವ ಮತ್ತು ನನ್ನ ಘನತೆಗೆ ಕುಂದು ತರುವಂತಹ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆ ನೀಡಬೇಕು’ ಎಂದು ಕೋರಿದ್ದರು.

ಇದನ್ನು ಮಾನ್ಯ ಮಾಡಿದ್ದ ಸಿವಿಲ್‌ ನ್ಯಾಯಾಲಯ ಪತ್ರಿಕೆಗಳು, ಟಿ.ವಿ.ಚಾನೆಲ್‌ಗಳು, ರೇಡಿಯೊ, ಕೇಬಲ್‌, ಫೇಸ್ ಬುಕ್, ಯೂ ಟ್ಯೂಬ್‌ನಂತಹ ಸಾಮಾಜಿಕ ಜಾಲತಾಣಗಳು ತೇಜಸ್ವಿ ಸೂರ್ಯ ವಿರುದ್ಧ ಯಾವುದೇ ರೀತಿಯ ಮಾನಹಾನಿಕರ ಎನಿಸಬಹುದಾದಂತಹ ಸುದ್ದಿ ಪ್ರಕಟಿಸದಂತೆ ನಿರ್ಬಂಧ ವಿಧಿಸಿ ಮಧ್ಯಂತರ ಆದೇಶ ನೀಡಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !