ಬುಧವಾರ, ಅಕ್ಟೋಬರ್ 21, 2020
22 °C

ನಿಶ್ಚಿತಾರ್ಥ–ಮದುವೆ: ಮಾರ್ಗಸೂಚಿ ಉಲ್ಲಂಘನೆ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪುತ್ರಿಯ ನಿಶ್ಚಿತಾರ್ಥ ಹಾಗೂ ಶಾಸಕ ಪಿ.ಟಿ. ಪರಮೇಶ್ವರ ನಾಯಕ್ ಪುತ್ರನ ಮದುವೆಯಲ್ಲಿ ವೈಯಕ್ತಿಕ ಅಂತರ ಕಾಯ್ದುಕೊಳ್ಳದೇ ಕೋವಿಡ್-19ರ ಮಾರ್ಗಸೂಚಿ ಉಲ್ಲಂಘಿಸಲಾಗಿದೆ’ ಎಂದು ಆರೋಪಿಸಿ ಹೈಕೋರ್ಟ್‌ಗೆ ಮೆಮೊ ಸಲ್ಲಿಸಲಾಗಿದೆ. ಈ ಸಂಬಂಧ ವಕೀಲ ಜಿ‌.ಆರ್. ಮೋಹನ್ ಸಲ್ಲಿಸಿರುವ ಈ ಮೆಮೊ ಅನ್ನು ಇದೇ 18ರಂದು ನ್ಯಾಯಪೀಠ ವಿಚಾರಣೆ ನಡೆಸಲಿದೆ.

‘ಪ್ರತಿವಾದಿಗಳು ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ. ಆದ್ದರಿಂದ, ಪ್ರತಿವಾದಿ ಜನಪ್ರತಿನಿಧಿಗಳ ವಿರುದ್ಧ ನೈಸರ್ಗಿಕ ವಿಕೋಪ ನಿರ್ವಹಣಾ ಕಾಯ್ದೆಯಡಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ. 

‘ನ್ಯಾಯಾಲಯದ ಆದೇಶದ ಬಳಿಕ ಕ್ರಮ

ಹರಪನಹಳ್ಳಿ: ತಾಲ್ಲೂಕಿನ ಲಕ್ಷ್ಮೀಪುರದಲ್ಲಿ ನಡೆದ ಶಾಸಕ ಪಿ.ಟಿ. ಪರಮೇಶ್ವರನಾಯ್ಕ ಅವರ ಪುತ್ರನ ಮದುವೆ ವೇಳೆ ಕೋವಿಡ್‌ ಎಸ್‌ಒಪಿ ನಿಯಮ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ದೂರು ದಾಖಲಿಸಲು ನ್ಯಾಯಾಲಯದ ಅನುಮತಿ ಕೇಳಲಾಗಿದೆ ಎಂದು ತಹಶೀಲ್ದಾರ್‌ ಡಾ.ನಾಗವೇಣಿ ತಿಳಿಸಿದ್ದಾರೆ.

ನಿಯಮ ಉಲ್ಲಂಘನೆ ಆಗಿರುವುದನ್ನು ಪರಿಶೀಲಿಸಿ ವರದಿ ನೀಡುವಂತೆ ಕಂದಾಯ ನಿರೀಕ್ಷಕರಿಗೆ ಸೂಚಿಸಲಾಗಿತ್ತು. ಅವರು ವರದಿ ನೀಡಿದ್ದು, ಮೇಲಧಿಕಾರಿಗಳ ಸಲಹೆ ಮೇರೆಗೆ ದೂರು ದಾಖಲಿಸಲು ನ್ಯಾಯಾಲಯದ ಅನುಮತಿ ಕೇಳಲಾಗಿದೆ. ಬುಧವಾರ ನ್ಯಾಯಾಲಯದ ಆದೇಶದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ್ದಾರೆ.

ಕಂದಾಯ ಇಲಾಖೆ ಅಧಿಕಾರಿಗಳು ಮಂಗಳವಾರ ಅರಸೀಕೆರೆ ಠಾಣೆಗೆ ನೀಡಿದ್ದ ದೂರು ತಿರಸ್ಕೃತವಾಗಿತ್ತು.

‘ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಬೇಡಿ’

‘ಆರ್ಥಿಕ ಸಂಕಷ್ಟಗಳಿದ್ದರೂ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಬೇಡಿ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೂಚಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಇಲಾಖೆಯ ಕಾರ್ಯಕ್ರಮಗಳನ್ನು ಆದ್ಯತೆಗೆ ಅನುಸಾರ ಗುರುತಿಸಿ, ಅನುಷ್ಠಾನಗೊಳಿಸುವಂತೆ ನಿರ್ದೇಶನ ನೀಡಿದರು.

‘ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿ ಪಡೆದ ಅಭ್ಯರ್ಥಿಗಳ ಪೈಕಿ, ಇಬ್ಬರು ಐಎಎಸ್, ಇಬ್ಬರು ಐಪಿಎಸ್, 13 ಮಂದಿ ಐಆರ್‌ಎಸ್‌ ಸೇವೆಗೆ ಆಯ್ಕೆಯಾಗಿದ್ದಾರೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಆರೋಗ್ಯ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು
ಸಭೆಯಲ್ಲಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು