ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ನಲ್ಲಿ ಸಿಎಂಪಿಗೆ ಒತ್ತು; ಚುನಾವಣೆ ಸಿದ್ಧತೆ ಚರ್ಚೆ

‘ಸಮನ್ವಯ ಸಮಿತಿ’ ಸಭೆ ಇಂದು
Last Updated 23 ಜನವರಿ 2019, 20:13 IST
ಅಕ್ಷರ ಗಾತ್ರ

ಬೆಂಗಳೂರು: ಮೈತ್ರಿ ಸರ್ಕಾರ ಮಂಡಿಸಲಿರುವ ಎರಡನೇ ಬಜೆಟ್‌ ಮತ್ತು ಲೋಕಸಭೆ ಚುನಾವಣೆ ಸಿದ್ಧತೆ ಸಂಬಂಧಿಸಿದಂತೆ ಚರ್ಚಿಸಲು ‘ಸಮನ್ವಯ ಸಮಿತಿ’ಯ ಮಹತ್ವದ ಸಭೆ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಲಿದೆ.

ಕುಮಾರ ಕೃಪಾ ಅತಿಥಿಗೃಹದಲ್ಲಿ ಈ ಸಭೆ ಆಯೋಜಿಸಲಾಗಿದೆ. ಸರ್ಕಾರ ಅಸ್ಥಿರಗೊಳಿಸುವ ಬಿಜೆಪಿ ಯತ್ನ, ರೆಸಾರ್ಟ್‌ ರಾಜಕೀಯ ಸೇರಿದಂತೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾಪವಾಗುವ ಸಾಧ್ಯತೆ ಇದೆ.

2019-20ನೇ ಸಾಲಿನ ಬಜೆಟ್‌ ಫೆ. 8ರಂದು ಮಂಡಿಸಲು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆಯನ್ನೂ ನಡೆಸುತ್ತಿದ್ದಾರೆ. ಈ ಮಧ್ಯೆ, ಯಾವ್ಯಾವ ಯೋಜನೆಗಳನ್ನು ಅಳವಡಿಸಿಕೊಳ್ಳಬೇಕು, ಯಾವ ಕ್ಷೇತ್ರಕ್ಕೆ ಆದ್ಯತೆ ನೀಡಬೇಕು ಎಂಬ ಬಗ್ಗೆ ಈ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ.

ಎರಡೂ ಪಕ್ಷಗಳು ಪ್ರತ್ಯೇಕ ಚುನಾವಣಾ ಪ್ರಣಾಳಿಕೆಯಡಿ ವಿಧಾನಸಭೆ ಚುನಾವಣೆ ಎದುರಿಸಿದ್ದು, ‘ಮೈತ್ರಿ’ ಮಾಡಿಕೊಂಡ ಬಳಿಕ ‘ಸಾಮಾನ್ಯ ಕನಿಷ್ಠ ಕಾರ್ಯಕ್ರಮ’ಕ್ಕೆ (ಸಿಎಂಪಿ) ಒತ್ತು ನೀಡುವ ಬಗ್ಗೆ ಚರ್ಚೆ ನಡೆದಿತ್ತು. ಆದರೆ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಂಡಿಸಿದ್ದ ಕೊನೆಯ ಬಜೆಟ್‌ನಲ್ಲಿ ಘೋಷಿಸಿದ ಕೆಲವು ಯೋಜನೆಗಳು ಇನ್ನೂ ಅನುಷ್ಠಾನಗೊಂಡಿಲ್ಲ. ಜೊತೆಗೆ, ಪ್ರಣಾಳಿಕೆಯಲ್ಲಿರುವ ಭರವಸೆಗಳನ್ನು ಈಡೇರಿಸುವ ವಿಷಯದಲ್ಲೂ ಹಿನ್ನಡೆ ಉಂಟಾಗಿದೆ. ಈ ವಿಷಯಗಳೂ ಚರ್ಚೆಗೆ ಬರಲಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ನಿಗಮ ಮಂಡಳಿಗಳಿಗೆ ನೇಮಕ ವೇಳೆ ಉಂಟಾದ ಗೊಂದಲವೂ ಪ್ರಸ್ತಾಪವಾಗುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮುಂದುವರಿಸುವ ನಿಟ್ಟಿನಲ್ಲಿ ಮುಂದಿನ ಹೆಜ್ಜೆ ಬಗ್ಗೆಯೂ ಅನೌಪಚಾರಿಕವಾಗಿ ಚರ್ಚೆ ನಡೆಯಲಿದೆ ಎಂದೂ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT