ಮಹದಾಯಿ ತೀರ್ಪು: ಗೆಜೆಟ್‌ ಪ್ರಕಟಣೆಗೆ ಆಗ್ರಹಿಸಿ ಪತ್ರ

7

ಮಹದಾಯಿ ತೀರ್ಪು: ಗೆಜೆಟ್‌ ಪ್ರಕಟಣೆಗೆ ಆಗ್ರಹಿಸಿ ಪತ್ರ

Published:
Updated:

ಬೆಂಗಳೂರು: ಮಹದಾಯಿ ನ್ಯಾಯಮಂಡಳಿ ನೀಡಿರುವ ತೀರ್ಪನ್ನು ಕೇಂದ್ರ ಸರ್ಕಾರ ಆದಷ್ಟು ಬೇಗನೇ ಅಧಿಕೃತ ಗೆಜೆಟ್‌ನಲ್ಲಿ ಪ್ರಕಟಿಸಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕೇಂದ್ರ ಜಲ ಸಂಪನ್ಮೂಲ ಸಚಿವ ನಿತಿನ್‌ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ.

ನ್ಯಾಯಮಂಡಳಿ ಇತ್ತೀಚೆಗೆ ನೀಡಿರುವ ತೀರ್ಪಿನಲ್ಲಿ ರಾಜ್ಯಕ್ಕೆ 13.42 ಟಿಎಂಸಿ ಅಡಿ ನೀರು ಹಂಚಿಕೆ ಮಾಡಿತ್ತು. ರಾಜ್ಯ ತನ್ನ ಪಾಲಿಗೆ ಹಂಚಿಕೆಯಾಗಿರುವ ನೀರನ್ನು ಕಳಸಾ ಬಂಡೂರಿ ಯೋಜನೆಗೆ ಬಳಸಿಕೊಳ್ಳಬೇಕಿದ್ದರೆ ಗೆಜೆಟ್‌ನಲ್ಲಿ ತೀರ್ಪು ಪ್ರಕಟವಾಗಬೇಕು. ಇದರಿಂದ ಉತ್ತರ ಕರ್ನಾಟಕದ ಭಾಗದ ಜನರಿಗೆ ಕುಡಿಯುವ ನೀರು ಪೂರೈಕೆಗೆ ಅನುಕೂಲವಾಗುತ್ತದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಅಲ್ಲದೇ, ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ಅರ್ಜಿ ಸಲ್ಲಿಸುವ ಉದ್ದೇಶವಿದೆ. ಅಂತರ ರಾಜ್ಯ ಜಲ ವಿವಾದ ಕಾಯ್ದೆ 1956 ರ ಸೆಕ್ಷನ್‌ 5(3) ರಡಿ ತೀರ್ಪನ್ನು ಪ್ರಶ್ನಿಸಲು ಅವಕಾಶವಿದೆ ಎಂದೂ ಕುಮಾರಸ್ವಾಮಿ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಕರಣ ಕೈಬಿಡಲು ಚಿಂತನೆ:  ನೆಲ, ಜಲ, ಭಾಷೆಗಾಗಿ ಬೀದಿಗಿಳಿದು ಪ್ರತಿಭಟನೆ, ಹೋರಾಟ ನಡೆಸಿದವರ ಮೇಲೆ ದಾಖಲಾದ ಪ್ರಕರಣಗಳನ್ನು ಕೈಬಿಡಲು ಚಿಂತನೆ ನಡೆಸಿರುವ ರಾಜ್ಯ ಸರ್ಕಾರ, ಈ ಬಗ್ಗೆ ರಾಜ್ಯೋತ್ಸವ ದಿನ (ನ. 1) ಆದೇಶ ಹೊರಡಿಸುವ ಸಾಧ್ಯತೆ ಇದೆ.

ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಅಧ್ಯಕ್ಷತೆಯ ಸಂಪುಟ ಉಪ ಸಮಿತಿ ಈ ಬಗ್ಗೆ ಈಗಾಗಲೇ ಚರ್ಚೆ ನಡೆಸಿದೆ. ಪ್ರಕರಣಗಳನ್ನು ವಾಪಸ್ ಪಡೆಯುವ ಸಲುವಾಗಿ ಕಾನೂನು ಇಲಾಖೆ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ.

ಪ್ರಕರಣ ಕೈಬಿಡುವಂತೆ ಹೋರಾಟಗಾರರು ಹಲವು ಬಾರಿ ಮನವಿ ಸಲ್ಲಿಸಿದ್ದರು. ಈ ಹಿಂದಿನ ಸರ್ಕಾರದ ಅವಧಿಯಲ್ಲೂ ಈ ಮನವಿಗಳ ಬಗ್ಗೆ ಚರ್ಚೆ ನಡೆದಿತ್ತು.

ಮಹದಾಯಿಗಾಗಿ ಉತ್ತರ ಕರ್ನಾಟಕ ಭಾಗದಲ್ಲಿ ನಿರಂತರ ಹೋರಾಟ ನಡೆದಿದ್ದು, ಹೋರಾಟಗಾರರ ಮೇಲೆ ಲಾಠಿ ಪ್ರಹಾರ ಕೂಡಾ ನಡೆದಿತ್ತು. ಕಾವೇರಿ ತೀರ್ಪು ಪ್ರಕಟವಾದ ಸಂದರ್ಭದಲ್ಲಿ ರೈತರು, ಕನ್ನಡಪರ ಹೋರಾಟಗಾರರು ರಾಜ್ಯದಾದ್ಯಂತ ಬಂದ್ ಕರೆ ಕೊಟ್ಟು ಹೋರಾಟ ಮಾಡಿದ್ದರು. ಈ ಸಂದರ್ಭದಲ್ಲಿ ಹಲವರ ಮೇಲೆ ಪ್ರಕರಣ ದಾಖಲಾಗಿತ್ತು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !