ಭಾನುವಾರ, ಜೂಲೈ 5, 2020
28 °C

ರಾಜ್ಯದಲ್ಲಿ ಹೆಲ್ತ್‌ ರಿಜಿಸ್ಟರ್‌ ವ್ಯವಸ್ಥೆ: ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಪ್ರತಿಯೊಬ್ಬ ವ್ಯಕ್ತಿಗೂ ಉತ್ತಮ ಆರೋಗ್ಯವನ್ನು ಕೊಡುವ ಉದ್ದೇಶದಿಂದ ಆರೋಗ್ಯ ಮಾಹಿತಿಯನ್ನು ಸಂಗ್ರಹಿಸಿಡುವ ‘ಹೆಲ್ತ್‌ ರಿಜಿಸ್ಟರ್‌’ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ.

ಇಂತಹದ್ದೊಂದು ವ್ಯವಸ್ಥೆ ದೇಶದಲ್ಲೇ ಪ್ರಥಮವಾಗಿದ್ದು, ವಿಶ್ವದ ಕೆಲವೇ ದೇಶಗಳು ಇಂತಹ ವ್ಯವಸ್ಥೆ ಹೊಂದಿದೆ ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಸಂಬಂಧ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಮುಖ ವ್ಯಕ್ತಿಗಳ ಸಭೆಯೊಂದನ್ನು ಕರೆಯಲಾಗಿತ್ತು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪೈಲಟ್‌ ಯೋಜನೆಯಾಗಿ ಇದನ್ನು ಜಾರಿ ಮಾಡಲಾಗುವುದು. ಇದು ಯಶಸ್ವಿಯಾದರೆ ರಾಜ್ಯದ 6 ಕೋಟಿ ಜನರ ಮಾಹಿತಿ ಸಂಗ್ರಹಿಸಲಾಗುವುದು ಎಂದರು.

ರಾಜ್ಯದಲ್ಲಿ ಎಲ್ಲರಿಗೂ ಏಕರೂಪದ ಅತ್ಯುತ್ತಮ ಆರೋಗ್ಯ ಸೇವೆ ಮತ್ತು ಚಿಕಿತ್ಸೆ ಸಿಗಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಇದಕ್ಕಾಗಿ ಹೆಲ್ತ್ ರಿಜಿಸ್ಟರ್‌ ಸಿದ್ಧಪಡಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಸಾರ್ವಜನಿಕರಲ್ಲಿ ಯಾವ ಕಾಯಿಲೆಗಳಿವೆ, ಯಾವುದಾದರೂ ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆ ಇದೆಯೇ, ಆಹಾರ ಅಭ್ಯಾಸ ಮುಂತಾದವುಗಳ ಮಾಹಿತಿ ಪಡೆಯಲಾಗುವುದು. ರೋಗ ಬರುವುದನ್ನು ತಡೆಯುವುದು ಹೇಗೆ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಕಾಲ ಕಾಲಕ್ಕೆ ಮಾಹಿತಿ ನೀಡಲಾಗುವುದು ಎಂದರು.

ಇದಕ್ಕೆ ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಸಿಬ್ಬಂದಿ, ವೈದ್ಯರ ಜತೆಗೆ ಖಾಸಗಿ ಆರೋಗ್ಯ ವಲಯದವರ ನೆರವು ಪಡೆಯಲಾಗುವುದು. ಮುಂದಿನ ಎರಡು– ಮೂರು ದಿನಗಳಲ್ಲಿ ಮಾಹಿತಿ ಸಂಗ್ರಹಿಸಲು ಪ್ರಶ್ನಾವಳಿಯನ್ನು ರೂಪಿಸಲಾಗುವುದು ಎಂದು ಸುಧಾಕರ್‌ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು