ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲೆನಾಡಿನಲ್ಲಿ ಮುಂದುವರಿದ ಮಳೆ, ಹಲವೆಡೆ ಕೃಷಿ ಚಟುವಟಿಕೆ ಚುರುಕು

Last Updated 6 ಜುಲೈ 2020, 19:31 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ರಾಜ್ಯದ ಮಲೆನಾಡು ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಕರಾವಳಿಯಲ್ಲಿ ಸ್ವಲ್ಪ ಬಿಡುವು ನೀಡಿದೆ.

ಉತ್ತರ ಕನ್ನಡ ಜಿಲ್ಲೆಯ ಮಲೆನಾಡು ತಾಲ್ಲೂಕುಗಳಲ್ಲಿ ಸೋಮವಾರ ಮಳೆಯ ಅಬ್ಬರ ಮುಂದುವರಿದಿತ್ತು. ಶಿರಸಿಯಲ್ಲಿ ಧಾರಾಕಾರ ಸುರಿದರೆ, ಸಿದ್ದಾಪುರ, ಮುಂಡಗೋಡ, ಜೊಯಿಡಾ, ಯಲ್ಲಾಪುರದಲ್ಲಿ ಬಿಟ್ಟುಬಿಟ್ಟು ಸಾಧಾರಣ ಮಳೆಯಾಗಿದೆ. ಕರಾವಳಿಯಲ್ಲಿ ಮಳೆಯ ಅಬ್ಬರ ಕಡಿಮೆಯಾಗಿತ್ತು. ಹೊನ್ನಾವರ ಮತ್ತು ಭಟ್ಕಳದಲ್ಲಿ ಆಗಾಗ ಹನಿಯಿತು. ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಸೋಮವಾರ ಉತ್ತಮ ಮಳೆಯಾಗಿದೆ.

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದೆ. ಭಾಗಮಂಡಲ, ತಲಕಾವೇರಿ, ಬ್ರಹ್ಮಗಿರಿ ವ್ಯಾಪ್ತಿಯಲ್ಲೂ ಬಿರುಸಿನ ಮಳೆಯಾಗುತ್ತಿದ್ದು, ಕಾವೇರಿ ನದಿಯಲ್ಲಿ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದೆ. ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳವಾಗಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಲ್ಲಿ ಅಬ್ಬರಿಸಿದ್ದ ಮಳೆ ಸ್ವಲ್ಪ ಬಿಡುವು ನೀಡಿತ್ತು. ಆದರೆ, ಸಂಜೆ ಹೊತ್ತಿಗೆ ಸಾಧಾರಣ ಮಳೆ ಸುರಿಯಿತು. ಸಮುದ್ರ ತೀರದಲ್ಲಿ ಅಲೆಗಳ ಅಬ್ಬರ ಮುಂದುವರಿದಿದೆ. ಈ ಹಿಂದೆ ಸುರಿದ ಸತತ ಮಳೆಯ ಪರಿಣಾಮ ಅಲ್ಲಲ್ಲಿ ಸಣ್ಣಪುಟ್ಟ ಗುಡ್ಡ ಕುಸಿತಗಳು ಸಂಭವಿಸಿವೆ. ಬೆಳ್ತಂಗಡಿ ತಾಲ್ಲೂಕಿನ ಕನ್ಯಾಡಿಯಲ್ಲಿ ಗುಡ್ಡ ಕುಸಿದು ಬಿದ್ದು, ಉಮೇಶ್‌ ಪ್ರಭು ಎಂಬುವರ ವಸತಿಗೃಹಕ್ಕೆ ಹಾನಿಯಾಗಿದೆ.

ಭೂ ಕುಸಿತದಿಂದ ಇಬ್ಬರು ಮಕ್ಕಳ ಸಾವು ಸಂಭವಿಸಿದ್ದ ಮಂಗಳೂರು ನಗರ ಸಮೀಪದ ಗುರುಪುರ ಕೈಕಂಬದ ಬಂಗ್ಲೆಗುಡ್ಡೆಯಲ್ಲಿ ತೆರವು ಕಾರ್ಯಾಚರಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮತ್ತು ಮೂಡಿಗೆರೆ ಭಾಗದಲ್ಲಿ ಬಿರುಸಿನ ಮಳೆಯಾಗಿದೆ. ಕೊಪ್ಪ ತಾಲ್ಲೂಕಿನ ಹಳ್ಳ –ಕೊಳ್ಳಗಳಲ್ಲಿನ ನೀರಿನ ಹರಿವಿನ ಮಟ್ಟ ಹೆಚ್ಚಾಗಿದೆ. ಮೂಡಿಗೆರೆ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಧಾರಾಕಾರ, ಶಿವಮೊಗ್ಗ ನಗರ, ಸಾಗರ, ಹೊಸನಗರ, ಶಿಕಾರಿಪುರ, ಸೊರಬದಲ್ಲಿ ಸಾಧಾರಣ ಮಳೆಯಾಗಿದೆ.

ಕರಾವಳಿ: ಐದು ದಿನ ಭಾರಿ ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಭಾಗದಲ್ಲಿ ಜು.7ರಿಂದ 11ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಐದೂ ದಿನ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.

ಆಗ್ನೇಯ ಅರಬ್ಬಿ ಸಮುದ್ರದಿಂದ ರಾಜ್ಯದ ಕರಾವಳಿಯೆಡೆಗೆ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಜು.10ರಿಂದ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳವರೆಗೆ ಕೆಲವೆಡೆ ಸಾಧಾರಣ ಮಳೆಯಾಗಬಹುದು ಎಂದು ತಿಳಿಸಿದೆ.

ಎಲ್ಲೆಲ್ಲಿ ಎಷ್ಟು ಮಳೆ?: ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ಸೋಮವಾರ 10 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಕೊಟ್ಟಿಗೆಹಾರ 8, ಭಾಗಮಂಡಲ 6, ಕಳಸ 5, ಸುಬ್ರಹ್ಮಣ್ಯ, ಸಿದ್ದಾಪುರ, ಕದ್ರಾ, ಸಾಗರ, ಶೃಂಗೇರಿ, ಸಕಲೇಶಪುರ 4, ಧರ್ಮಸ್ಥಳ, ಉಪ್ಪಿನಂಗಡಿ, ಅಂಕೋಲಾ, ಹೊಸನಗರ, ಮೂಡಿಗೆರೆ, ಕೊಪ್ಪ 3, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಾರ್ಕಳ, ಬೆಳಗಾವಿ, ಮಡಿಕೇರಿ 2, ಮೂಡುಬಿದ್ರೆ, ಕುಂದಾಪುರ, ಕಾರವಾರ, ಭಟ್ಕಳ, ಗೋಕರ್ಣ, ಬೇಲೂರು, ಎಚ್.ಡಿ.ಕೋಟೆ, ಶ್ರೀರಂಗಪಟ್ಟಣದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಕೃಷಿ ಚಟುವಟಿಕೆ ಚುರುಕು: 6.8 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ

ರಾಜ್ಯದಲ್ಲಿ ಕೃಷಿ ಚಟುವಟಿಕೆ ಬಿರುಸಿನಿಂದ ಆರಂಭವಾಗಿದ್ದು, ಜೂನ್‌ ಮಧ್ಯ ಭಾಗದ ವೇಳೆಗೆ ಸುಮಾರು 6.8 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಆಗಿದೆ.

ಮುಂಗಾರು ಪೂರ್ವ ಮಳೆ ಉತ್ತಮ ಪ್ರಮಾಣದಲ್ಲಿ ಸುರಿದ ಕಾರಣ ಲಾಕ್‌ಡೌನ್ ಮಧ್ಯೆಯೂ ಕೃಷಿ ಚಟುವಟಿಕೆ ಆರಂಭಿಸಲು ರೈತರಿಗೆ ಸರ್ಕಾರ ಅವಕಾಶ ನೀಡಿತ್ತು. ಇದರಿಂದಾಗಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಪ್ರಮಾಣದಲ್ಲಿ ಬಿತ್ತನೆ ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ(ಜೂನ್‌ ಮಧ್ಯ ಭಾಗ) 5.93 ಲಕ್ಷ ಹೆಕ್ಟೇರ್‌ಗಳಲ್ಲಿ ಬಿತ್ತನೆ ಆಗಿತ್ತು.

ರಾಜ್ಯದ ಒಟ್ಟು ಬಿತ್ತನೆ ಆಗಬೇಕಾದ ಪ್ರದೇಶ 73 ಲಕ್ಷ ಹೆಕ್ಟೇರ್‌ಗಳು. ಆಗಸ್ಟ್‌ವರೆಗೆ ಬಿತ್ತನೆ ಚಟುವಟಿಕೆ ಇನ್ನಷ್ಟು ಹೆಚ್ಚಾಗಲಿದೆ. ಉತ್ತರ ಒಳನಾಡು ಪ್ರದೇಶದಲ್ಲಿ ಹೆಚ್ಚು ಪ್ರಮಾಣದಲ್ಲಿ ಬಿತ್ತನೆ ಆಗಿದೆ. ಹಾವೇರಿ ಜಿಲ್ಲೆಯಲ್ಲಿ ಶೇ 84, ಧಾರವಾಡ ಶೇ 73, ದಕ್ಷಿಣ ಒಳನಾಡಿನ ಮೈಸೂರು ಶೇ 57, ಚಾಮರಾಜನಗರ ಶೇ 51, ಶಿವಮೊಗ್ಗ ಶೇ 40 ರಷ್ಟು ಬಿತ್ತನೆ ಆಗಿದೆ. ಜೂನ್ ಅಂತ್ಯದವರೆಗೆ 2.67 ಲಕ್ಷ ಕ್ವಿಂಟಲ್ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ಮುಂಗಾರು ಹಂಗಾಮಿಗೆ ಒಟ್ಟು 5.97 ಲಕ್ಷ ಕ್ವಿಂಟಲ್‌ ಬಿತ್ತನೆ ಬೀಜ ಅಗತ್ಯವಿದೆ. 9.57 ಲಕ್ಷ ಮೆಟ್ರಿಕ್‌ ಟನ್‌ ರಸಗೊಬ್ಬರವನ್ನೂ ವಿತರಿಸಲಾಗಿದೆ ಎಂದು ಕೃಷಿ ಇಲಾಖೆ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT