ಮಂಗಳವಾರ, ಫೆಬ್ರವರಿ 18, 2020
17 °C

ಕೊಡಗಿನ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್‌ ಪತ್ತೆಯಾದ ಬೆನ್ನಲೇ ರಾಜ್ಯದ ಇತರೆ ಪ್ರವಾಸಿ ತಾಣ ಹಾಗೂ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲು ಗೃಹ ಇಲಾಖೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕೊಡಗಿನ ಪ್ರವಾಸಿ ತಾಣಗಳೂ ಪೊಲೀಸ್‌ ಕಣ್ಗಾವಲಿಗೆ ಜಾರಿವೆ.

ಜಿಲ್ಲಾ ಪೊಲೀಸ್ ಇಲಾಖೆಯು ಸಂಪೂರ್ಣ ಕಟ್ಟೆಚ್ಚರ ವಹಿಸಿದೆ. ಕುಶಾಲನಗರದ ಹಾರಂಗಿ ಜಲಾಶಯ, ಮಡಿಕೇರಿಯ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ, ಖಾಸಗಿ ಬಸ್‌ ನಿಲ್ದಾಣ, ರಾಜಾಸೀಟ್‌, ಗದ್ದಿಗೆ, ನಿಸರ್ಗಧಾಮ, ದುಬಾರೆ ಸೇರಿದಂತೆ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಇಲ್ಲಿಗೆ ನಿತ್ಯವೂ ಸಾವಿರಾರು ಪ್ರವಾಸಿಗರು ಬಂದು ಹೋಗಲಿದ್ದು, ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.

ಜನನಿಬಿಡ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆ ಕಣ್ಗಾವಲು ಜೊತೆಗೆ ವಿಧ್ವಂಸಕ ಕೃತ್ಯಗಳಿಗೆ ಅವಕಾಶ ನೀಡದಂತೆ ಕ್ರಮ ಕೈಗೊಂಡಿದ್ದಾರೆ. ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿದ್ದ ಪೊಲೀಸರು ಶ್ವಾನದಳದೊಂದಿಗೆ ತಪಾಸಣೆ ನಡೆಸಿದ್ದಾರೆ. ಕ್ರೆಸ್ಟ್‌ಗೇಟ್‌ ಹಾಗೂ ಸೇತುವೆ ಸುತ್ತ ಪರಿಶೀಲನೆ ನಡೆಸಿದ್ದಾರೆ.

ದಕ್ಷಿಣ ಕೊಡಗಿನ ಕುಟ್ಟ, ಮಾಕುಟ್ಟ ಹಾಗೂ ಸಂಪಾಜೆ ವ್ಯಾಪ್ತಿಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಒಳ ಹಾಗೂ ಹೊರ ಹೋಗುವ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಕರಿಕೆ, ಸಂಪಾಜೆ, ಕುಶಾಲನಗರ, ಶಿರಂಗಾಲ, ಬಾಣಾವರ, ಕೊಡ್ಲಿಪೇಟೆಯಲ್ಲಿ ಪೊಲೀಸ್ ಗಸ್ತು ಹೆಚ್ಚಿಸಲಾಗಿದೆ. ಮೂರು ಉಪ ವಿಭಾಗಗಳ ಡಿವೈಎಸ್‍ಪಿಗಳಿಗೆ ಕಟ್ಟೆಚ್ಚರ ವಹಿಸಲು ಕೊಡಗು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಮನ್‌ ಡಿ. ಪನ್ನೇಕರ್‌ ಸೂಚನೆ ನೀಡಿದ್ದಾರೆ.

ಕೊಡಗಿನಲ್ಲಿಯೂ ತರಬೇತಿ ನಿರತ ಬಾಂಬ್ ನಿಷ್ಕ್ರಿಯ ದಳವಿದೆ. ಕೊಡಗು ಗುಡ್ಡಗಾಡು ಪ್ರದೇಶವಾಗಿದ್ದು, ದಕ್ಷಿಣ ಕನ್ನಡದ ಗಡಿಜಿಲ್ಲೆಯೂ ಹೌದು. ಹೀಗಾಗಿ, ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು