ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಸ್‌ಸಿ ಅಧ್ಯಕ್ಷರ ನೇಮಕ: ಕಾಲಾವಕಾಶ ಕೋರಿದ ಸರ್ಕಾರ

Last Updated 10 ಮಾರ್ಚ್ 2020, 20:40 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್‌ಸಿ) ಅಧ್ಯಕ್ಷರನ್ನಾಗಿ ಎಸ್.ಪಿ. ಷಡಕ್ಷರಿಸ್ವಾಮಿ ಅವರನ್ನು ನೇಮಕ ಮಾಡಿರುವುದಕ್ಕೆ ಸಂಬಂಧಿಸಿದ ಮೂಲ ಕಡತ ಮತ್ತು ಹೋಟಾ ಸಮಿತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ರಾಜ್ಯ ಸರ್ಕಾರ ಕಾಲಾವಕಾಶ ಕೋರಿದೆ.

ಟಿ.ನರಸಿಂಹಮೂರ್ತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್. ಓಕಾ ಮತ್ತು ನ್ಯಾ. ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

‘ಕಡತ ಮತ್ತು ಹೋಟಾ ಸಮಿತಿ ವರದಿ ಸರ್ಕಾರದಿಂದ ಬಂದಿದೆ. ಅದು ಕನ್ನಡದಲ್ಲಿದ್ದು, ಇಂಗ್ಲಿಷ್‌ಗೆ ಅನುವಾದ ಮಾಡಿ ನ್ಯಾಯಾಲಯಕ್ಕೆ ಸಲ್ಲಿಸಬೇಕಿದೆ. ಅದಕ್ಕೆ ಎರಡು ವಾರಗಳ ಕಾಲಾವಕಾಶ ಬೇಕು’ ಎಂದು ಸರ್ಕಾರದ ಪರ ವಕೀಲರು ಮನವಿ ಮಾಡಿದರು.

ಈ ನಡುವೆ ಷಡಕ್ಷರಿಸ್ವಾಮಿ ಅವರ ಪರ ವಕೀಲರು ವಾದ ಮಂಡಿಸಿ, ‘ಅರ್ಜಿಗೆ ಸಂಬಂಧಿಸಿದ ಆಕ್ಷೇಪಣೆ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ಬೇಕು’ ಎಂದು ಕೋರಿದರು. ಎರಡು ಮನವಿಗಳನ್ನೂ ಮಾನ್ಯ ಮಾಡಿದ ಪೀಠ, ವಿಚಾರಣೆ ಮುಂದೂಡಿತು.

‘ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದ ತಜ್ಞರನ್ನು ಒಳಗೊಂಡ ಶೋಧನಾ ಸಮಿತಿ ಶಿಫಾರಸು ಮಾಡುವ ಹೆಸರುಗಳನ್ನು ಮುಖ್ಯಮಂತ್ರಿ ಅನುಮೋದಿಸಿ ಪ್ರಸ್ತಾವನೆಯನ್ನು ರಾಜ್ಯಪಾಲರಿಗೆ ಕಳುಹಿಸಬೇಕು. ಆದರೆ, ಈ ಪ್ರಕ್ರಿಯೆಯನ್ನು ಷಡಕ್ಷರಿಸ್ವಾಮಿ ಅವರ ನೇಮಕ ವಿಷಯದಲ್ಲಿ ಪಾಲಿಸಿಲ್ಲ. ಸುಪ್ರೀಂ ಕೋರ್ಟ್‌, ಹೈಕೋರ್ಟ್ ನಿರ್ದೇಶನಗಳು, ಹೋಟಾ ಸಮಿತಿ ಶಿಫಾರಸುಗಳನ್ನು ಉಲ್ಲಂಘಿಸಲಾಗಿದೆ’ ಎಂದು ಅರ್ಜಿಯಲ್ಲಿ ದೂರಲಾಗಿದೆ.

ನೇಮಕಾತಿಗೆ ಸಂಬಂಧಿಸಿದ ಮೂಲ ಕಡತವನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಈ ಹಿಂದಿನ ವಿಚಾರಣೆ ವೇಳೆ ನಿರ್ದೇಶನ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT