ತಕ್ಷಣವೇ ಸಿಎಂ ಆಗುವ ಭ್ರಮೆಯಲ್ಲಿ ಇಲ್ಲ: ಯಡಿಯೂರಪ್ಪ

7

ತಕ್ಷಣವೇ ಸಿಎಂ ಆಗುವ ಭ್ರಮೆಯಲ್ಲಿ ಇಲ್ಲ: ಯಡಿಯೂರಪ್ಪ

Published:
Updated:
Deccan Herald

ಕಲಬುರ್ಗಿ: ‘ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲು ಹೇಗೆ ಸಾಧ್ಯ? ನಾನೇನು ಆ ಭ್ರಮೆಯಲ್ಲಿ ಇಲ್ಲ’ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದರು.

‘ಜೆಡಿಎಸ್‌–ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುವುದಿಲ್ಲ ಎಂಬುದು ಸಾಮಾನ್ಯ ವ್ಯಕ್ತಿಗೂ ಗೊತ್ತಿರುವ ಸಂಗತಿ’ ಎಂದೂ ಹೇಳಿದರು.

‘ಬಿಜೆಪಿ ಶಾಸಕರು ಕಾಂಗ್ರೆಸ್‌ ಸಂಪರ್ಕದಲ್ಲಿದ್ದರೆ ಸಂತೋಷ. ಅವರು ಯಾರು ಎಂದು ಹೇಳಲಿ’ ಎಂದು ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದರು.

‘ಕಲಬುರ್ಗಿ, ಬೀದರ್‌ ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜಿಲ್ಲಾ ಪ್ರವಾಸ ನಡೆಸಿ, ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ನಾವಿನ್ನು ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ’ ಎಂದರು.

‘ರಾಜ್ಯಸಭೆ ಉಪಸಭಾಪತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಮುಖಭಂಗ ಅನುಭವಿಸಿದೆ. ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯ ಗೆಲುವು ಮುಂದಿನ ಲೋಕಸಭೆಯ ಚುನಾವಣೆಗೆ ನಮಗೆ ಸಿಕ್ಕ ದೊಡ್ಡ ಶಕ್ತಿ’ ಎಂದು ವ್ಯಾಖ್ಯಾನಿಸಿದರು.

‘ಕುಮಾರಸ್ವಾಮಿ, ರೇವಣ್ಣ ಅವರಿಗೆ ಹಾಸನವೇ ಇಡೀ ರಾಜ್ಯ ಇದ್ದಂತೆ’ ಎಂದು ‘ಕೆಶಿಫ್‌’ ಕಚೇರಿಯನ್ನು ಬೆಳಗಾವಿಯಿಂದ ಹಾಸನಕ್ಕೆ ಸ್ಥಳಾಂತರಿಸಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದರು.

ಆರ್ಥಿಕ ಸ್ಥಿತಿಗತಿಯ ಶ್ವೇತಪತ್ರ ಹೊರಡಿಸಿ

ಬೀದರ್: ‘ರಾಜ್ಯ ಸರ್ಕಾರದ ಹಣಕಾಸು ಪರಿಸ್ಥಿತಿ ಹದಗೆಟ್ಟಿದ್ದು, ತಕ್ಷಣ ಆರ್ಥಿಕ ಸ್ಥಿತಿಗತಿ ಕುರಿತು ಶ್ವೇತಪತ್ರ ಹೊರಡಿಸಬೇಕು’ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದರು.

ಗುರುವಾರ ನಗರದಲ್ಲಿ ಬಿಜೆಪಿ ಶಕ್ತಿಕೇಂದ್ರದ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಿಂತು ಹೋಗಿವೆ. ಫಲಾನುಭವಿಗಳಿಗೆ ವೃದ್ಧಾಪ್ಯ ಹಾಗೂ ಅಂಗವಿಕಲರ ಮಾಸಾಶನ ದೊರೆಯುತ್ತಿಲ್ಲ. ಹಾಲು ಉತ್ಪಾದನೆ ಕಡಿಮೆಯಾಗಿದೆ. ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ತಿಳಿದುಕೊಳ್ಳುವ ಹಕ್ಕು ರಾಜ್ಯದ ಜನರಿಗೆ ಇದೆ’ ಎಂದು ಹೇಳಿದರು.

‘ಸಹಕಾರ ಬ್ಯಾಂಕ್‌ಗಳಿಂದ ರೈತರು ಪಡೆದಿರುವ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾದ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯ ಸರ್ಕಾರದ ರೈತರ ಸಾಲ ಮನ್ನಾ ಘೋಷಣೆ ಸ್ಪಷ್ಟವಾಗಿಲ್ಲ’ಎಂದು ಅಸಮಾಧಾನ ವ್ಯಕ್ತಪಡಿಸಿದರು.

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !