ಶನಿವಾರ, ಏಪ್ರಿಲ್ 4, 2020
19 °C

ಐಎಂಎ ಪ್ರಕರಣ: ಎಲ್.ಸಿ ನಾಗರಾಜ್ ವಿರುದ್ಧದ ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್ ನಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಒಂದು ಲಕ್ಷ ಷೇರುದಾರರಿಂದ ₹ 4,000 ಕೋಟಿ ದೋಚಿ, ವಂಚಿಸಿದ ಐಎಂಎ (ಐ ಮಾನಿಟರಿ ಅಡ್ವೈಸರಿ) ಕಂಪನಿ ಪರ ವರದಿ ಕೊಡಲು ₹ 4.5 ಕೋಟಿ ಲಂಚ ಪಡೆದ ಆರೋಪದ ಮೇಲೆ ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಎಲ್‌.ಸಿ. ನಾಗರಾಜ್‌ ಅವರ ವಿರುದ್ಧದ ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಈ ಕುರಿತಂತೆ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಬಿ.ಎ. ಪಾಟೀಲ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಪ್ರಕಟಿಸಿದೆ.

‘ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಬಾಕಿ ಇದೆ. ಅಂತೆಯೇ, ಅಮಿತ್ ಶಾ ವಿರುದ್ಧದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಲ್ಲಿ ಮಹತ್ತರವಾದ ಕ್ರಿಮಿನಲ್ ಪ್ರಕರಣಗಳಲ್ಲಿ ವ್ಯಾಪಕ ಸಾರ್ವಜನಿಕ ಹಿತಾಸಕ್ತಿ ಅಡಗಿರುವಾಗ ಎರಡು ಎಫ್ಐಆರ್ ದಾಖಲು ಮಾಡಿದ್ದರೆ ಅದು ತಪ್ಪೇನಲ್ಲ ಎಂಬ ಅಂಶವನ್ನು ಉಲ್ಲೇಖಿಸಿರುವ ನ್ಯಾಯಪೀಠ, ಸಿಬಿಐ ದಾಖಲಿಸಿರುವ ಎಫ್ಐರ್ ಕಾನೂನು ಬದ್ಧವಾಗಿದೆ" ಎಂದು ಅಭಿಪ್ರಾಯಪಟ್ಟು ನಾಗರಾಜ್ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.

ಸಿಬಿಐ ಪರ ವಕೀಲ ಪಿ. ಪ್ರಸನ್ನಕುಮಾರ್ ಹಾಗೂ ಎಲ್.ಸಿ‌.‌ ನಾಗರಾಜ್ ಪರ ಹಿರಿಯ ವಕೀಲ ಸಿ.ಎಚ್. ಜಾಧವ್ ವಾದ ಮಂಡಿಸಿದ್ದರು.

ಈ ಪ್ರಕರಣದಲ್ಲಿ ನಾಗರಾಜ್ ಅವರನ್ನು ಎಸ್‌ಐಟಿ ಅಧಿಕಾರಿಗಳು ಈ ಮೊದಲು ಬಂಧಿಸಿದ್ದರು. ಈ ಪ್ರಕರಣದಲ್ಲಿ ಇನ್ನೂ ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ಆರೋಪಿಗಳನ್ನಾಗಿ ಮಾಡಲಾಗಿರುವುದನ್ನು ಸ್ಮರಿಸಬಹುದು.

ನಾಗರಾಜ್‌, ಐಎಂಎ ಪ್ರಕರಣದಲ್ಲಿ ಬಂಧನಕ್ಕೊಳಗಾದ ಮೊದಲ ಸರ್ಕಾರಿ ಅಧಿಕಾರಿ. ಕೆಎಎಸ್‌ 1998ನೇ ಬ್ಯಾಚ್‌ಗೆ ಸೇರಿದ ಇವರು, ಮೂರು ಕಂತುಗಳಲ್ಲಿ ಲಂಚ ಪಡೆದ ಆರೋಪಕ್ಕೆ ಒಳಗಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು