ಶನಿವಾರ, ಜೂಲೈ 11, 2020
23 °C

ಇಂದಿರಾ ಕ್ಯಾಂಟೀನ್‌ ಅಕ್ರಮ ಆರೋಪ : ಸಿದ್ದರಾಮಯ್ಯ, ಜಾರ್ಜ್‌ ವಿರುದ್ಧದ ಅರ್ಜಿ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಿಗೆ ಊಟ ಮಾಡಿದ ಜನರ ಸಂಖ್ಯೆಗಿಂತ ಹೆಚ್ಚು ಹಣ ಬಿಡುಗಡೆ ಮಾಡುವ ಮೂಲಕ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‌ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿ ಸಲ್ಲಿಸಿದ್ದ ದೂರನ್ನು ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್‌ ಶೆಟ್ಟಿ ವಜಾ ಮಾಡಿದ್ದಾರೆ.

ಗಣೇಶ್‌ ಸಿಂಗ್‌ ಎಂಬುವರು ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ ಲೋಕಾಯುಕ್ತ, ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ನಗರಾಭಿವೃದ್ಧಿ ಸಚಿವರ ವಿರುದ್ಧದ ಆರೋಪದಲ್ಲಿ ಹುರುಳಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜಿಯನ್ನು ವಜಾ ಮಾಡಿದ್ದಾರೆ.

ಆದರೆ, ಈ ಪ್ರಕರಣದಲ್ಲಿ ಬಿಬಿಎಂಪಿ ಅಂದಿನ ಕಮಿಷನರ್‌ ಹಾಗೂ ಇಂದಿರಾ ಕ್ಯಾಂಟೀನ್‌ಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಆಗಿನ ವಿಶೇಷ ಕಮಿಷನರ್‌ ವಿರುದ್ಧದ ವಿಚಾರಣೆಯನ್ನು ಲೋಕಾಯುಕ್ತರು ಮುಂದುವರಿಸಲಿದ್ದಾರೆ. ಈ ದೂರಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಜುಲೈ 15ರವರೆಗೆ ಅವರಿಗೆ ಕಾಲಾವಕಾಶ ನೀಡಲಾಗಿದೆ.

ಇಂದಿರಾ ಕ್ಯಾಂಟೀನ್‌ಗೆ ಹಣ ಬಿಡುಗಡೆ ಮಾಡುವ ತೀರ್ಮಾನ ಸಚಿವ ಸಂಪುಟದಲ್ಲಿ ಕೈಗೊಳ್ಳಲಾಗಿದೆ. ಈ ತೀರ್ಮಾನದ ಬಳಿಕ ಜವಾಬ್ದಾರಿಗಳನ್ನು ಬಿಬಿಎಂಪಿ ಅಧಿಕಾರಿಗಳು ನಿರ್ವಹಿಸಿದ್ದಾರೆ. ಹೀಗಾಗಿ, ಸಿದ್ದರಾಮಯ್ಯ ಮತ್ತು ಜಾರ್ಜ್‌  ಪಾತ್ರವೇನೂ ಇದರಲ್ಲಿ ಇದ್ದಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಲ್ಲದೆ, ಸಿದ್ದರಾಮಯ್ಯ ಮತ್ತು ಜಾರ್ಜ್‌ ಅವರ ವಿರುದ್ಧ ಮಾಡಿರುವ ಆರೋಪಗಳಿಗೆ ಪೂರಕವಾಗಿ ಅರ್ಜಿದಾರರು ಯಾವುದೇ ದಾಖಲೆ ಅಥವಾ ಆಧಾರ ಒದಗಿಸಿಲ್ಲ. ಇಬ್ಬರೂ ಈಗ ಅಧಿಕಾರದಲ್ಲಿ ಇಲ್ಲದಿರುವುದರಿಂದ ವಿಚಾರಣೆ ಮುಂದುವರಿಸಲು ಯಾವುದೇ ಕಾರಣವೂ ಕಾಣುತ್ತಿಲ್ಲ  ಎಂದು ಲೋಕಾಯಕ್ತ ನ್ಯಾಯಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

ಇಂದಿರಾ ಕ್ಯಾಂಟೀನ್‌ ಅಕ್ರಮಗಳಿಗೆ ಸಂಬಂಧಿಸಿದಂತೆ ಇನ್ನೂ ಕೆಲವು ದೂರುಗಳು ಲೋಕಾಯುಕ್ತರ ಮುಂದಿದ್ದು, ವಿಚಾರಣೆ ನಡೆಯುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು