ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಳಿ ಸಂರಕ್ಷಿತ ಪ್ರದೇಶದಲ್ಲಿ ಅನಧಿಕೃತ ವಿದ್ಯುತ್ ಕಾಮಗಾರಿ

Last Updated 19 ಏಪ್ರಿಲ್ 2019, 20:15 IST
ಅಕ್ಷರ ಗಾತ್ರ

ಬೆಂಗಳೂರು: ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಅಣಶಿ ವನ್ಯಜೀವಿ ವಲಯದ ವ್ಯಾಪ್ತಿಯಲ್ಲಿ ಕಮರಗಾವ್ ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಒದಗಿಸಲು ನೂರಾರು ವಿದ್ಯುತ್ ಕಂಬಗಳನ್ನು ಅನಧಿಕೃತವಾಗಿ ಅಳವಡಿಸಲಾಗಿದೆ.

ಈ ಕಾಮಗಾರಿಗೆ ರಾಜ್ಯ ಹಾಗೂ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಒಪ್ಪಿಗೆಯನ್ನೇ ಪಡೆದಿಲ್ಲ. ವಿದ್ಯುತ್ ಕಂಬಗಳನ್ನು ಅಳವಡಿಸುವ ವೇಳೆ ಹಲವಾರು ಮರಗಳನ್ನು ಕಡಿಯಲಾಗಿದೆ. ಅನಧಿಕೃತ ಕಾಮಗಾರಿ ಕೈಗೊಂಡಿರುವ ಗುತ್ತಿಗೆದಾರರು, ಬಳಕೆದಾರರ ಸಂಸ್ಥೆ ಹಾಗೂ ಕರ್ತವ್ಯ ನಿರ್ಲಕ್ಷ್ಯ ತೋರಿರುವ ಅರಣ್ಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪರಿಸರ ಹೋರಾಟಗಾರರು ಆಗ್ರಹಿಸಿದ್ದಾರೆ.

ಈ ಕಾಮಗಾರಿ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಸೆಕ್ಷನ್ 27, 35 (6) ಹಾಗೂ 38 (ಓ) (1) (ಬಿ), ಅರಣ್ಯ ಸಂರಕ್ಷಣಾ ಕಾಯ್ದೆ 1980, ಕರ್ನಾಟಕ ಮರಗಳ ಸಂರಕ್ಷಣೆ ಕಾಯ್ಡೆ 1976 ಹಾಗೂ ಸುಪ್ರೀಂ ಕೋರ್ಟ್‌ ಆದೇಶಗಳ ಸ್ಪಷ್ಟ ಉಲ್ಲಂಘನೆ.

ಬಳಕೆದಾರ ಸಂಸ್ಥೆಗಳು ರಕ್ಷಿತ ಹಾಗೂ ಸಂರಕ್ಷಿತ ಪ್ರದೇಶಗಳಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಅನುಮತಿ ಪಡೆಯಲು ಕೇಂದ್ರ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯವು ಪರಿವೇಷ್ ಎಂಬ ವೆಬ್‌ಸೈಟ್‌ ಅಭಿವೃದ್ಧಿಪಡಿಸಿದ್ದು, ಬಳಕೆದಾರ ಸಂಸ್ಥೆಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬಹುದು. ದೇಶದ ಹೆಚ್ಚಿನ ಕಡೆಗಳಲ್ಲಿ ಈ ಕಾರ್ಯವಿಧಾನವನ್ನು ಅನುಸರಿಸಲಾಗುತ್ತಿದೆ. ಆದರೆ, ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮಾತ್ರ ಬಳಕೆದಾರ ಸಂಸ್ಥೆಗಳು ಬಹುತೇಕ ಎಲ್ಲ ಕಾಮಗಾರಿಗಳಿಗೆ ಅನುಮತಿ ಪಡೆಯುವ ಗೋಜಿಗೆ ಹೋಗುವುದೇ ಇಲ್ಲ. ಬದಲಾಗಿ ತರಾತುರಿಯಲ್ಲಿ ಕಾಮಗಾರಿ ಮುಗಿಸುತ್ತಾರೆ ಎಂದು ಹೋರಾಟಗಾರರೊಬ್ಬರು ದೂರಿದರು.

‘ಇದನ್ನು ಪ್ರಶ್ನಿಸಲು ಹೋಗುವ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಅಭಿವೃದ್ಧಿ ವಿರೋಧಿಗಳೆಂದು ಬಿಂಬಿಸಲಾಗುತ್ತಿದೆ. ಅರಣ್ಯ ಇಲಾಖೆ ಅಭಿವೃದ್ಧಿ ಮಾಡಬೇಡಿ ಎಂದು ಎಲ್ಲಿಯೂ ಹೇಳಿಲ್ಲ. ಬದಲಾಗಿ ಕಾನೂನಿನ ಚೌಕಟ್ಟಿನಲ್ಲಿ ಅನುಮತಿ ಪಡೆದು ಮಾಡುವಂತೆ ಹೇಳುತ್ತಿದೆ. ಆದರೆ, ಇದನ್ನೇ ಮುಂದಿಟ್ಟುಕೊಂಡು ಅರಣ್ಯ ಇಲಾಖೆಯನ್ನು ಬಲಿಪಶು ಮಾಡಲಾಗುತ್ತಿದೆ’ ಎಂದು ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT