ಬುಧವಾರ, ಏಪ್ರಿಲ್ 21, 2021
23 °C

ಕೊಡಗು ಮಳೆಗೆ ₹2 ಸಾವಿರ ಕೋಟಿ ನಷ್ಟ: 4 ಸಾವಿರ ಎಕರೆ ಕಾಫಿ ತೋಟಕ್ಕೆ ಹಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸುರಿದ ಮಹಾಮಳೆ, ಭೂಕುಸಿತದಿಂದ ಅಂದಾಜು ₹ 2 ಸಾವಿರ ಕೋಟಿ ನಷ್ಟ ಸಂಭವಿಸಿದೆ ಎಂದು ಜಿಲ್ಲಾಡಳಿತ ಅಂದಾಜು ಮಾಡಿದೆ.

ಮಡಿಕೇರಿ, ಸೋಮವಾರಪೇಟೆ ತಾಲ್ಲೂಕಿನಲ್ಲಿ ಹೆಚ್ಚು ಹಾನಿಯಾಗಿದೆ. ಭೂಕುಸಿತದಿಂದ 4 ಸಾವಿರ ಎಕರೆಯಷ್ಟು ಕಾಫಿ ತೋಟಕ್ಕೆ ಹಾನಿಯಾಗಿದೆ. 716 ಮನೆಗಳು ಸಂಪೂರ್ಣ ಕುಸಿದಿವೆ. 404 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 32 ಗ್ರಾಮಗಳ ಜನರು ಸಂಕಷ್ಟಕ್ಕೆ ಒಳಗಾಗಿದ್ದು, 10 ಗ್ರಾಮಗಳಲ್ಲಿ ಭೂಕುಸಿತ ಸಂಭವಿಸಿ ಅಪಾರ ನಷ್ಟ ಉಂಟಾಗಿದೆ ಎಂದು ಪ್ರಾಥಮಿಕ ಸಮೀಕ್ಷೆಯಲ್ಲಿ ನಷ್ಟವನ್ನು ಅಂದಾಜಿಸಿದೆ.

1,500 ಕಿ.ಮೀ. ಗ್ರಾಮೀಣ ರಸ್ತೆಗಳಿಗೆ ಹಾನಿಯಾಗಿದೆ. 150 ಕಿ.ಮೀ. ರಸ್ತೆಯನ್ನು ಪರ್ಯಾಯ ಮಾರ್ಗದಲ್ಲಿ ಹೊಸದಾಗಿ ನಿರ್ಮಿಸಬೇಕಿದೆ. 58 ಸೇತುವೆ, 258 ಕಟ್ಟಡಗಳಿಗೆ ಹಾನಿಯಾಗಿದೆ.

ದತ್ತು ಯೋಜನೆ: ಮನೆಗಳ ನಿರ್ಮಾಣ, ರಸ್ತೆ, ಸೇತುವೆ, ಕಟ್ಟಡಗಳ ದುರಸ್ತಿ, ಮಕ್ಕಳ ಶಿಕ್ಷಣ ಸೇರಿದಂತೆ ಸಂತ್ರಸ್ತರಿಗೆ ಸವಲತ್ತು ಒದಗಿಸಲು ದತ್ತು ಯೋಜನೆ ಜಾರಿಗೆ ಜಿಲ್ಲಾಡಳಿತ ಮುಂದಾಗಿದೆ. ಸಂಘ, ಸಂಸ್ಥೆಗಳು ಪ್ರವಾಹಪೀಡಿತ ಗ್ರಾಮಗಳನ್ನು ದತ್ತು ಪಡೆದು ಅಭಿವೃದ್ಧಿ ಮಾಡುವುದಾದರೆ ಅಂತಹ ಗ್ರಾಮಗಳನ್ನು ಬಿಟ್ಟುಕೊಡಲು ಜಿಲ್ಲಾಡಳಿತ ನಿರ್ಧರಿಸಿದೆ.

ವಿಶೇಷ ಅನ್ನಭಾಗ್ಯ ಯೋಜನೆ: ಪ್ರವಾಹ ಪೀಡಿತ ಗ್ರಾಮಗಳಿಗೆ ವಿಶೇಷ ಅನ್ನಭಾಗ್ಯ ಯೋಜನೆ ಜಾರಿ ಮಾಡಲಾಗಿದ್ದು, ಪ್ರತಿ ಕುಟುಂಬಕ್ಕೆ ₹ 10 ಕೆ.ಜಿ. ಅಕ್ಕಿ, ಅಡುಗೆ ಎಣ್ಣೆ, ಸಕ್ಕರೆ, ಬೇಳೆ, ಸೀಮೆಎಣ್ಣೆ ವಿತರಣೆ ಮಾಡಲಾಗುತ್ತಿದೆ.

‘ಗ್ರಾಮೀಣ ಪ್ರದೇಶಕ್ಕೆ 17,160 ಲೀಟರ್‌ ಸೀಮೆಎಣ್ಣೆ ವಿತರಿಸಲಾಗಿದೆ. 153 ಕುಟುಂಬಗಳಿಗೆ ಗ್ಯಾಸ್‌ ಸ್ಟೌ ವಿತರಣೆ ಮಾಡಲಾಗಿದೆ. ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್‌ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಅದೂ ಸಾಧ್ಯವಾಗದಿದ್ದರೆ, ಮನೆ ನಿರ್ಮಿಸುವ ತನಕ ಬಾಡಿಗೆಯ ಹಣ ಪಾವತಿಸುವ ಕುರಿತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸುತ್ತೇನೆ’ ಎಂದು ಆಹಾರ ಸಚಿವ ಜಮೀರ್‌ ಅಹ್ಮದ್‌ ಮಾಹಿತಿ ನೀಡಿದರು.

‘ಎಪಿಎಲ್‌, ಬಿಪಿಎಲ್‌ ಕಾರ್ಡ್‌ ಕಳೆದುಕೊಂಡ ಸಂತ್ರಸ್ತರಿಗೆ ನಕಲು ಪ್ರತಿ ನೀಡುವ ಪ್ರತಿಕ್ರಿಯೆ ಆರಂಭವಾಗಿದೆ. ಸಂತ್ರಸ್ತರು ಆತಂಕಕ್ಕೆ ಒಳಗಾಗಬಾರದು. ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯ ಪುಸ್ತಕ ವಿತರಣೆ ಮಾಡಲಾಗುವುದು’ ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು