ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಇಎ ದುಡ್ಡಿನ ಮೇಲೆ ಸರ್ಕಾರದ ಕಣ್ಣು

Last Updated 28 ಮೇ 2019, 18:38 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಬಳಿ ಬಳಕೆಯಾಗದೆ ಉಳಿದಿರುವ ಸುಮಾರು ₹ 260 ಕೋಟಿಯನ್ನು ಬೇರೆಡೆಗೆ ವರ್ಗಾಯಿಸುವನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿದ್ದು, ಅದಕ್ಕಾಗಿ 2006ರ ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳು (ಪ್ರವೇಶ ಪ್ರಕ್ರಿಯೆ ನಿಯಂತ್ರಣ ಮತ್ತು ಶುಲ್ಕ ನಿಗದಿ) ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ.

‘ಈ ಹಣವನ್ನು ಬೇರೆ ಉದ್ದೇಶಕ್ಕೆ ವರ್ಗಾವಣೆ ಮಾಡಲು ಹಲವು ವರ್ಷಗಳಿಂದ ಪ್ರಯತ್ನಿಸುತ್ತಲೇ ಇದ್ದರೂ ಅದು ಸಾಧ್ಯವಾಗುತ್ತಿಲ್ಲ, ಸದ್ಯದ ನಿಯಮಗಳ ಅಡಿಯಲ್ಲಿ ಇಲ್ಲಿಂದ ಹಣ ವರ್ಗಾವಣೆ ಸಾಧ್ಯವಿಲ್ಲ. ಅದಕ್ಕಾಗಿ ಉಳಿದಿರುವ ಒಂದೇ ದಾರಿ ಎಂದರೆ ಕಾಯ್ದೆಗೆ ತಿದ್ದುಪಡಿ ತರುವುದು’ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಸಿಇಟಿ ಫಲಿತಾಂಶ ಪ್ರಕಟಿಸಿದ ದಿನ ಪತ್ರಕರ್ತರಿಗೆ ತಿಳಿಸಿದ್ದರು.

‘ಕೆಇಎ ಬಳಿ ಇರುವ ದುಡ್ಡನ್ನು ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬಳಸಬೇಕಾಗಿದೆ. ಮುಂಬರುವ ಅಧಿವೇಶನದಲ್ಲಿ ಕಾಯ್ದೆಗೆ ತಿದ್ಪಪಡಿ ತರಲಾಗುವುದು’ ಎಂದರು.

ಸರ್ಕಾರ ಕೆಇಎ ದುಡ್ಡಿನ ಮೇಲೆ ಕಣ್ಣಿಟ್ಟಿರುವುದು ಇದೇ ಮೊದಲ ಬಾರಿಯಲ್ಲ, ಬಸವರಾಜ ರಾಯರಡ್ಡಿ ಅವರು ಉನ್ನತ ಶಿಕ್ಷಣ ಸಚಿವರಾಗಿದ್ದಾಗಲೂ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜು ನಿರ್ಮಾಣಕ್ಕಾಗಿ ಹಣವನ್ನು ವರ್ಗಾಯಿಸುವಂತೆ ಕೇಳಿದ್ದರು.

ಇದು ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ದುಡ್ಡಾಗಿರುವುದರಿಂದ ಅದನ್ನು ವರ್ಗಾವಣೆ ಮಾಡುವುದಕ್ಕೆ ಕೆಇಎ ಅಧಿಕಾರಿಗಳ ವಿರೋಧ ಇದೆ.

‘ಕೆಇಎ ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, ಸರ್ಕಾರ ಇದಕ್ಕೆ ಹಣಕಾಸು ಒದಗಿಸುವುದಿಲ್ಲ. ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಹಣದಿಂದಲೇ ಇಡೀ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಕೆಇಎ ಇಂದು ಹಲವು ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಾಗಿ ವಿದ್ಯಾರ್ಥಿಗಳಿಂದ ಶುಲ್ಕ ಸಂಗ್ರಹಿಸುತ್ತಿದೆ. ಈಚಿನ ದಿನಗಳಲ್ಲಿ ಇತರ ಹಲವು ನೇಮಕಾತಿಗಳಿಗಾಗಿಯೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿದೆ. ಈ ಹಣ ವಿದ್ಯಾರ್ಥಿಗಳದ್ದು, ಹೀಗಾಗಿ ಅವರಿಗಾಗಿಯೇ ಇದನ್ನು ಬಳಸಬೇಕು’ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

‘ಸಂಗ್ರಹವಾಗಿರುವ ಹಣವನ್ನು ಬಳಸದೆ ಇದ್ದರೆ ಆದಾಯ ತೆರಿಗೆ ಇಲಾಖೆಯಿಂದ ಆಕ್ಷೇಪ ಬರುತ್ತದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ವಿಚಾರದಲ್ಲೂ ಇಂತಹದೇ ಸಮಸ್ಯೆ ಎದುರಾಗಿತ್ತು, ಆದಾಯ ತೆರಿಗೆ ಇಲಾಖೆ ಜಪ್ತಿ ಮಾಡಿಕೊಂಡಿದ್ದ ₹400 ಕೋಟಿಯನ್ನು ವಾಪಸ್‌ ಪಡೆಯಲು ಬಹಳ ಪ್ರಯಾಸಪಡಬೇಕಾಗಿ ಬಂದಿತ್ತು’ ಎಂದು ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT