ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕ ಕಾಯ್ದೆ ತಿದ್ದುಪಡಿಗೆ ಇಲಾಖೆಯಿಂದಲೇ ಆಕ್ಷೇಪ

Last Updated 14 ಮೇ 2020, 2:07 IST
ಅಕ್ಷರ ಗಾತ್ರ

ಬೆಂಗಳೂರು: ಉತ್ತರ ಪ್ರದೇಶದ ಮಾದರಿಯಲ್ಲಿ ಉದ್ದಿಮೆಗಳಿಗೆ ಕಾರ್ಮಿಕ ಕಾಯ್ದೆಗಳಿಂದ ವಿನಾಯಿತಿ ನೀಡುವ ಪ್ರಸ್ತಾಪಕ್ಕೆ ಕಾರ್ಮಿಕ ಇಲಾಖೆಯೇ ಆಕ್ಷೇಪ ವ್ಯಕ್ತಪಡಿಸಿದೆ.

ಉತ್ತರ ಪ್ರದೇಶದ ಮಾದರಿ ಅನುಸರಿಸುವ ಸಂಬಂಧ ಪ್ರಸ್ತಾವನೆ ಸಲ್ಲಿಸುವಂತೆ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೀಡಿದ್ದ ಮೌಖಿಕ ಆದೇಶಕ್ಕೆ ಕಾರ್ಮಿಕ ಆಯುಕ್ತರು ಉತ್ತರ ನೀಡಿ ಪತ್ರ ಬರೆದಿದ್ದಾರೆ.

‘ಉತ್ತರ ಪ್ರದೇಶ ಮತ್ತು ಕರ್ನಾಟಕದ ಪರಿಸ್ಥಿತಿಗಳು ವಿಭಿನ್ನವಾಗಿವೆ. ಲಾಕ್‌ಡೌನ್ ಸಂದರ್ಭದಲ್ಲಿ 7 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೇರೆ ಬೇರೆ ರಾಜ್ಯಗಳಿಂದ ಉತ್ತರ ಪ್ರದೇಶಕ್ಕೆ ವಾಪಸ್ ಹೋಗಿದ್ದಾರೆ. ಅವರೆಲ್ಲರಿಗೂ ಉದ್ಯೋಗ ಕಲ್ಪಿಸುವ ಸಲುವಾಗಿ ಬಂಡವಾಳಗಾರರನ್ನು ಆಕರ್ಷಿಸಲು ಅಲ್ಲಿನ ರಾಜ್ಯ ಸರ್ಕಾರ ಕಾರ್ಮಿಕ ಕಾಯ್ದೆಗಳಿಗೆ ವಿನಾಯಿತಿ ನೀಡಿ ಸುಗ್ರೀವಾಜ್ಞೆ ಹೊರಡಿಸಿದೆ ಎಂಬ ಮಾಹಿತಿ ಸಿಕ್ಕಿದೆ’ ಎಂದು ಅವರು ವಿವರಿಸಿದ್ದಾರೆ.

‘ಕರ್ನಾಟಕದ ಪರಿಸ್ಥಿತಿ ಭಿನ್ನವಾಗಿದೆ. ರಾಜ್ಯದಲ್ಲಿದ್ದ ವಲಸೆ ಕಾರ್ಮಿಕರು ಹೊರ ರಾಜ್ಯಗಳಲ್ಲಿರುವ ತಮ್ಮ ಊರುಗಳಿಗೆ ವಾಪಸ್ ಹೋಗಿದ್ದಾರೆ. ಉತ್ತರ ಪ್ರದೇಶಕ್ಕೆ ಹೋಲಿಸಿದರೆ ಕೈಗಾರಿಕೆ ಮತ್ತು ವಾಣಿಜ್ಯ ವ್ಯವಹಾರದಲ್ಲಿ ಹೆಚ್ಚಿನ ಪ್ರಗತಿಯನ್ನು ರಾಜ್ಯ ಸಾಧಿಸಿದೆ. ಕಾರ್ಮಿಕ ಕಾಯ್ದೆಗಳಿಂದ ಉದ್ದಿಮೆಗಳಿಗೆ ವಿನಾಯಿತಿ ನೀಡಿದರೆ ಕಾರ್ಮಿಕರಿಗೆ ಶಾಸನಬದ್ಧ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಲು ಸಾಧ್ಯವಾಗುವುದಿಲ್ಲ’ ಎಂದು ಅವರಯ ಅಭಿಪ್ರಾಯಪಟ್ಟಿದ್ದಾರೆ.

‘ಈ ಬಗ್ಗೆ ಭಾಗೀದಾರರ ಜತೆ ಸಮಾಲೋಚನೆ ನಡೆಸಿ ನಿರ್ಧಾರ ಕೈಗೊಳ್ಳುವುದು ಸೂಕ್ತ’ ಎಂದು ಅವರು ಹೇಳಿದ್ದಾರೆ.

ಕಾರ್ಮಿಕ ಕಾಯ್ದೆಯ ತಿದ್ದುಪಡಿಗಾಗಿ ಸುಗ್ರೀವಾಜ್ಞೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದಕ್ಕೆ ವಿರೋಧ ಪಕ್ಷ ಹಾಗೂ ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯೊಳಗೆ ಕಾರ್ಮಿಕ ಆಯುಕ್ತರ ಪತ್ರ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT