ಸೋಮವಾರ, ಮಾರ್ಚ್ 8, 2021
24 °C
ಸಿಬಿಐ ತನಿಖೆ ಕೋರಿ ಪಿಐಎಲ್‌

ವಕೀಲೆ ಧರಣಿ ಸಾವು ಪ್ರಕರಣ: ರಾಜ್ಯ ಗೃಹ ಇಲಾಖೆಗೆ ಹೈಕೋರ್ಟ್‌ ನೋಟಿಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದ ಯುವ ವಕೀಲೆ ಎಸ್‌.ಧರಣಿ ಸಾವಿನ ಪ್ರಕರಣವನ್ನು ಸಿಬಿಐ ತನಿಖಗೆ ವಹಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ಬೆಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎಲ್‌.ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ಡಿಜಿ ಮತ್ತು ಐಜಿಪಿ, ನಗರ ಪೊಲೀಸ್‌ ಆಯುಕ್ತರು, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ, ವೈಟ್‌ಫೀಲ್ಡ್‌ ಎಸಿಪಿ, ಮಹದೇವಪುರ ಪೊಲೀಸ್‌ ಠಾಣಾಧಿಕಾರಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳಿಗೂ ನೋಟಿಸ್‌ ಜಾರಿಗೊಳಿಸುವಂತೆ ನ್ಯಾಯಪೀಠ ಆದೇಶಿಸಿದೆ.

‘ವಕೀಲೆ ಧರಣಿ ಅವರು 2018ರ ಡಿಸೆಂಬರ್‌ 31ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ಧರಣಿ ವಾಸವಿದ್ದ ಮನೆ ಕಬಳಿಸಲು ಸ್ಥಳೀಯ ಪಾಲಿಕೆ ಸದಸ್ಯ ವಿ.ಸುರೇಶ್‌ ಹಾಗೂ ಆತನ ಸಹಚರರು ಕೊಲೆ ಬೆದರಿಕೆ ಹಾಕಿದ್ದರು. ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಲಾಗಿತ್ತು. ಇದರಿಂದಾಗಿ ಧರಣಿ ಆತ್ಮಹತ್ಯೆಗೆ ಶರಣಾಗಿದ್ದಾರೆ’ ಎಂಬುದು ಸಂಘದ ಆರೋಪ.

ಕೋರಿಕೆ ಏನು?: ‘ಧರಣಿ ಪರಿಶಿಷ್ಟ ಜಾತಿಗೆ ಸೇರಿದ ವಕೀಲೆ. ಅವರ ಸಾವಿಗೆ ಸುರೇಶ್‌ ಮೂಲ ಕಾರಣ. ಸುರೇಶ್‌ ರಾಜಕೀಯ ಪ್ರಭಾವ ಹೊಂದಿದ್ದು ಪೊಲೀಸರು ಅವರ ವಿರುದ್ಧ ವಿಚಾರಣೆ ನಡೆಸುತ್ತಿಲ್ಲ. ಸರ್ಕಾರ ಆದ್ಯತೆಯ ಮೇರೆಗೆ ಈ ಪ್ರಕರಣದ ವಿಚಾರಣೆಗೆ ಮುಂದಾಗಬೇಕಿತ್ತು. ಆದರೆ, ಆಗಿಲ್ಲ. ಆದ್ದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ಧರಣಿ ಕುಟುಂಬಕ್ಕೆ ಸರ್ಕಾರ ₹ 50 ಲಕ್ಷ ಪರಿಹಾರ ನೀಡುವಂತೆ ನಿರ್ದೇಶಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು