ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರಶೈವರ ‘ಮತ’ ಪ್ರಸ್ತಾಪ ವಿರೋಧಿಗಳ ತೀವ್ರ ಟೀಕೆ

Last Updated 24 ನವೆಂಬರ್ 2019, 19:34 IST
ಅಕ್ಷರ ಗಾತ್ರ

ಬೆಂಗಳೂರು: ಉಪಚುನಾವಣೆಯಲ್ಲಿ ವೀರಶೈವ– ಲಿಂಗಾಯತ ಸಮುದಾಯವು ಬಿಜೆಪಿ ಅಭ್ಯರ್ಥಿಗಳನ್ನೇ ಬೆಂಬಲಿಸುವಂತೆ ಗೋಕಾಕನಲ್ಲಿ ಶನಿವಾರ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭಾನುವಾರ ಸಹ ಅದೇ ಧಾಟಿಯಲ್ಲಿ ಮಾತನಾಡಿದ್ದಾರೆ. ಮುಖ್ಯಮಂತ್ರಿ ಹೇಳಿಕೆಗೆ ವಿರೋಧ ಪಕ್ಷಗಳ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಗೋಕಾಕ ಕ್ಷೇತ್ರದ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಪರ ಪ್ರಚಾರದ ಸಂದರ್ಭದಲ್ಲಿ ‘ಈ ಸರ್ಕಾರ ಪೂರ್ಣಾವಧಿ ಇರಬೇಕಾದರೆ, ವೀರಶೈವ– ಲಿಂಗಾಯತ ಸಮುದಾಯದ ಮತಗಳು ಬೇರೆ ಪಕ್ಷಗಳಿಗೆ ಹೋಗಬಾರದು’ ಎಂದು ಯಡಿಯೂರಪ್ಪ ಮನವಿ ಮಾಡಿದ್ದರು.

ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಯಡಿಯೂರಪ್ಪ,‘ಈಗ ನಡೆಯುತ್ತಿರುವ ಉಪ
ಚುನಾವಣೆಯೂ ಸೇರಿದಂತೆ ಯಾವುದೇ ಸಂದರ್ಭದಲ್ಲೂ ವೀರಶೈವ ಸಮಾಜದವರು ನಮ್ಮ ಕೈ ಬಿಡುವುದಿಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

‘ಕಣದಲ್ಲಿರುವ 15 ಅನರ್ಹ ಶಾಸಕರ ಪ್ರಯತ್ನದಿಂದ ನಾನು ಮುಖ್ಯಮಂತ್ರಿ ಆಗಿದ್ದೇನೆ. ಸಣ್ಣಪುಟ್ಟ ವ್ಯತ್ಯಾಸ ಬದಿಗಿಟ್ಟು 15 ಅಭ್ಯರ್ಥಿಗಳನ್ನೂ ವೀರಶೈವ ಸಮುದಾಯವರು ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.

ಆಯೋಗಕ್ಕೆ ದೂರು– ಎಚ್‌ಡಿಕೆ: ‘ಮುಖ್ಯಮಂತ್ರಿ ಯಡಿಯೂರಪ್ಪ ಅವರು ವೀರಶೈವ– ಲಿಂಗಾಯತರು ಬಿಜೆಪಿಗೆ ಮತ ಹಾಕಬೇಕು ಎಂದು ಹೇಳುವ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಕೆ.ಆರ್‌.ಪೇಟೆಯಲ್ಲಿ ತಿಳಿಸಿದ್ದಾರೆ.

ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌, ‘ಯಾರೇ ಆಗಲಿ ಚುನಾವಣೆ ಸಂದರ್ಭದಲ್ಲಿ ಪ್ರಾಂತೀಯ ಭಾವನೆ ಕೆರಳಿಸುವುದು, ಧರ್ಮ ಮತ್ತು ಜಾತಿಯ ವಿಚಾರಗಳನ್ನು ಪ್ರಸ್ತಾಪಿಸುವುದು ಸರಿಯಲ್ಲ’ ಎಂದು ಶಿರಸಿಯಲ್ಲಿ ಹೇಳಿದ್ದಾರೆ.

ಬಚ್ಚೇಗೌಡರಿಗೆ ಶಿಸ್ತು ಕ್ರಮದ ಎಚ್ಚರಿಕೆ

ಸಂಸದ ಬಿ.ಎನ್‌.ಬಚ್ಚೇಗೌಡ ಇನ್ನೆರಡು ದಿನಗಳಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳದಿದ್ದರೆ, ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಬಚ್ಚೇಗೌಡ ಅವರೊಂದಿಗೆ ಮಾತನಾಡಿರುವ ಯಡಿಯೂರಪ್ಪ, ‘ಈಗಾಗಲೇ ಹೊಸಕೋಟೆ ಮತ್ತು ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಪ್ರಚಾರ ನಡೆಸುವಂತೆ ಸೂಚಿಸಲಾಗಿದೆ. ಈ ಬಗ್ಗೆ ಶಾಂತವಾಗಿ ಯೋಚಿಸಿ. ಬಳಿಕ ನಿರ್ಣಯ ತೆಗೆದುಕೊಂಡು ಪ್ರಚಾರದಲ್ಲಿ ತೊಡಗಬೇಕು. ಪ್ರತಿದಿನ ಕನಿಷ್ಠ ಎರಡು ಸಭೆಗಳಲ್ಲಾದರೂ ಭಾಗವಹಿಸಬೇಕು’ ಎಂದು ಖಡಕ್‌ ಸೂಚನೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT