ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ 20 ದಿನ ಸಂಪೂರ್ಣ ಲಾಕ್‌ಡೌನ್‌ ಮಾಡಿ: ಎಚ್‌.ಡಿ.ಕುಮಾರಸ್ವಾಮಿ

ಅಕ್ಷರ ಗಾತ್ರ

ಬೆಂಗಳೂರು: ಲಾಕ್‌ಡೌನ್‌ ಸಡಿಲಿಕೆ ನಂತರದಲ್ಲಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ನಿರ್ದಿಷ್ಟ ಪ್ರದೇಶಗಳಲ್ಲಿ ನಿರ್ಬಂಧ ವಿಧಿಸಿ ಆದೇಶಿಸಿದೆ. ಆದರೆ, ಬೆಂಗಳೂರು ಸಂಪೂರ್ಣ ಲಾಕ್‌ಡೌನ್‌ ಮಾಡುವಂತೆ ಜೆಡಿಎಸ್‌ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಸರ್ಕಾರದ ಕ್ರಮಗಳನ್ನು ಉದ್ದೇಶಿಸಿ ಅವರು ಮಂಗಳವಾರ ಟ್ವೀಟ್‌ ಮಾಡಿದ್ದು, 'ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ. ಕೆಲವೇ ಪ್ರದೇಶಗಳಲ್ಲಿ ಸೀಲ್‌ಡೌನ್, ಲಾಕ್‌ಡೌನ್ ಮಾಡಿದರೆ ಪ್ರಯೋಜನವಿಲ್ಲ.‌ ಬೆಂಗಳೂರು ನಿವಾಸಿಗಳು ಬದುಕುಳಿಯಬೇಕಾದರೆ ಈ ಕೂಡಲೇ ಕನಿಷ್ಟ 20 ದಿನ‌ ಸಂಪೂರ್ಣ ಲಾಕ್‌ಡೌನ್ ಮಾಡಿ. ಇಲ್ಲವಾದಲ್ಲಿ ಬೆಂಗಳೂರು ಮತ್ತೊಂದು ಬ್ರೆಜಿಲ್ ಆಗಲಿದೆ. ಜನರ ಆರೋಗ್ಯ ಮುಖ್ಯವೇ ಹೊರತು ಆರ್ಥಿಕತೆಯಲ್ಲ' ಎಂದಿದ್ದಾರೆ.

'ಬಡವರು, ಕಾರ್ಮಿಕರಿಗೆ ಕೂಡಲೇ ಪಡಿತರ ವಿತರಿಸಿ. ರಾಜ್ಯದ 50 ಲಕ್ಷ ಮಂದಿ ಶ್ರಮಿಕ ವರ್ಗಕ್ಕೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಬೇಕು. ಚಾಲಕರು, ನೇಕಾರರು, ಮಡಿವಾಳರು ಸೇರಿದಂತೆ ವಿವಿಧ ವರ್ಗಕ್ಕೆ ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿರುವ ಪರಿಹಾರ ದಕ್ಕಿಲ್ಲ' ಎಂದು ಲಾಕ್‌ಡೌನ್‌ನಿಂದ ಕಷ್ಟಕ್ಕೆ ಗುರಿಯಾಗಿರುವ ಜನರಿಗೆ ಪರಿಹಾರ ನೀಡುವಂತೆ ಕೇಳಿದ್ದಾರೆ.

'ಬರೀ ಪ್ಯಾಕೇಜ್ ಘೋಷಣೆ ಮಾಡಿದರೆ ಸಾಲದು. ಅದರ ಅನುಷ್ಠಾನಕ್ಕೆ ತಕ್ಷಣ ಕಾರ್ಯೋನ್ಮುಖವಾಗಬೇಕು. ಪ್ಯಾಕೇಜ್ ಘೋಷಣೆ ಮಾಡಿ, ಸರ್ಕಾರ ಅಂಗೈಯಲ್ಲಿ ಅರಮನೆ ತೋರಿಸಬಾರದು.' ಎಂದು ಟ್ವೀಟಿಸಿದ್ದಾರೆ.

ಕೋವಿಡ್‌ 19 ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆಯಾಗಿರುವ ಸಿದ್ದಾಪುರ, ವಿ.ವಿ.ಪುರ, ಚಿಕ್ಕಪೇಟೆ, ಕೆ.ಆರ್‌.ಮಾರುಕಟ್ಟೆ ಹಾಗೂ ಕಲಾಸಿಪಾಳ್ಯ ಸಗಟು ಮಾರುಕಟ್ಟೆಗಳು ಸೇರಿ ನಗರದ ಒಟ್ಟು ಐದು ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗುತ್ತಿದೆ.

ಸೋಮವಾರದ ವರೆಗೂ ರಾಜ್ಯದಲ್ಲಿ 9,399 ಮಂದಿಗೆ ಸೋಂಕು ತಗುಲಿದ್ದು, 142 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲೇ ಒಟ್ಟು 1,398 ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 67 ಮಂದಿ ಸಾವಿಗೀಡಾಗಿದ್ದಾರೆ. 411 ಮಂದಿ ಗುಣಮುಖರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT