ಮಂಗಳವಾರ, ಮೇ 26, 2020
27 °C

ಲಾಕ್‌ಡೌನ್ ವಿಸ್ತರಣೆ ಬಗ್ಗೆ ನಾಳೆ ತೀರ್ಮಾನ: ಯಡಿಯೂರಪ್ಪ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಇನ್ನೂ 15 ದಿನಗಳ ಕಾಲ ಲಾಕ್‌ಡೌನ್‌ ವಿಸ್ತರಿಸಲು ಸಚಿವ ಸಂಪುಟದ ಎಲ್ಲ ಸದಸ್ಯರು ಒತ್ತಾಯ ಮಾಡಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಜತೆ ಚರ್ಚಿಸಿ ಅಂತಿಮ ತೀರ್ಮಾನ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಅವರು ವಿವರ ನೀಡಿದರು.

ಲಾಕ್‌ಡೌನ್‌ ಅನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು. ಒಂದು ವೇಳೆ ಯಾರಾದರೂ ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಬೆಂಗಳೂರಿನಲ್ಲಿ ಲಾಕ್‌ಡೌನ್‌ ಉಲ್ಲಂಘಿಸಿದವರ ಸುಮಾರು 10,000 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಒಂದು ವೇಳೆ ಜನ ಕಿವಿಗೊಡದೇ ಇದ್ದಲ್ಲಿ, ಮತ್ತಷ್ಟು ಕಠಿಣ ಕ್ರಮ ತಗೆದುಕೊಳ್ಳಲಾಗುವುದು ಎಂದು ಯಡಿಯೂರಪ್ಪ ಎಚ್ಚರಿಕೆ ನೀಡಿದರು.

ಸಚಿವರು ಮತ್ತು ಶಾಸಕರ ವೇತನ ಕಡಿತ: ಕೋವಿಡ್‌–19 ವಿರುದ್ಧದ ಹೋರಾಟಕ್ಕೆ ಸಚಿವರು, ಶಾಸಕರು ಮತ್ತು ವಿಧಾನಪರಿಷತ್‌ ಸದಸ್ಯ ವೇತನದಲ್ಲಿ ಶೇ 30 ರಷ್ಟು  ಕಡಿತ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಸ್ಪೀಕರ್‌, ಡೆಪ್ಯೂಟಿ ಸ್ಪೀಕರ್‌ಗಳ ವೇತನ ಕಡಿತ ಮಾಡಲಾಗುವುದು. ಇದಕ್ಕೆ ಎಲ್ಲ ಪಕ್ಷಗಳ ನಾಯಕರೂ ಒಪ್ಪಿಗೆ ನೀಡಲಾಗಿದೆ. ವೇತನ ಕಡಿತದಿಂದ ಸುಮಾರು ₹16 ಕೋಟಿಗಳಷ್ಟು ಉಳಿತಾಯವಾಗುತ್ತದೆ. ಈ ಹಣವನ್ನು ಕೋವಿಡ್‌–19 ನಿಧಿಗೆ ನೀಡಲು ತೀರ್ಮಾನಿಸಲಾಗಿದೆ. ಇದಕ್ಕಾಗೊ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು