ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊರಬರದ ಪಟ್ಟಿ, ತುಮಕೂರು ಗೊಂದಲ: ಕೈ–ಕಮಲ ಅಭ್ಯರ್ಥಿ ಅಸ್ಪಷ್ಟ

22ಕ್ಕೆ ಕಾಂಗ್ರೆಸ್‌ ಸಭೆ
Last Updated 18 ಮಾರ್ಚ್ 2019, 20:17 IST
ಅಕ್ಷರ ಗಾತ್ರ

ಬೆಂಗಳೂರು: ಮೊದಲ ಹಂತದಲ್ಲಿ ಮತದಾನ ನಡೆಯಲಿರುವರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಮಂಗಳವಾರಆರಂಭವಾಗಲಿದ್ದು, ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿಲ್ಲ. ಇದರಿಂದಾಗಿ ಆಕಾಂಕ್ಷಿ ಸ್ಪರ್ಧಾಳುಗಳು ಗೊಂದಲದಲ್ಲಿ ಸಿಲುಕಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ನ ಮಿತ್ರ ಪಕ್ಷವಾಗಿರುವ ಜೆಡಿಎಸ್‌ ಮಂಡ್ಯ, ಹಾಸನ ಹಾಗೂ ಶಿವಮೊಗ್ಗ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಿ ಪ್ರಚಾರ ಆರಂಭಿಸಿದೆ.

ಪಕ್ಷಕ್ಕೆ ಹಂಚಿಕೆಯಾಗಿರುವ ಉಳಿದ ಐದು ಕ್ಷೇತ್ರಗಳಿಗೆ ‘ಕೈ’ ನಾಯಕರ ಜತೆಗೆ ಸಮಾಲೋಚಿಸಿ ಪಟ್ಟಿ ಪ್ರಕಟಿಸಲು ತೀರ್ಮಾನಿಸಿದೆ. ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ ಸಂಬಂಧ ಜೆಡಿಎಸ್‌ ನಾಯಕರ ಸಭೆ ಸೋಮವಾರ ರಾತ್ರಿ ನಡೆಯಿತು.

ಬಿಜೆಪಿ ಅಭ್ಯರ್ಥಿಗಳ ಪಟ್ಟಿಗೆ ಕೇಂದ್ರ ಚುನಾವಣಾ ಸಮಿತಿ ಸೋಮವಾರ ಅಂತಿಮ ರೂಪ ನೀಡಬೇಕಿತ್ತು. ಗೋವಾ ಮುಖ್ಯಮಂತ್ರಿ ಮನೋಹರ ಪರ‍್ರೀಕರ್‌ ಅವರ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಅಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ನಾಯಕರು ತೆರಳಿದರು. ಹೀಗಾಗಿ ಸಭೆ ಮಂಗಳವಾರಕ್ಕೆ ಮುಂದೂಡಿಕೆಯಾಗಿದೆ.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹಾಗೂ ರಾಜ್ಯ ನಾಯಕರು ಅಮಿತ್‌ ಶಾ ಅವರನ್ನು ಮಂಗಳವಾರ ಬೆಳಿಗ್ಗೆ ಭೇಟಿ ಮಾಡಲಿದ್ದು, ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ನೀಡಲಿದ್ದಾರೆ. ಬಳಿಕ ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆಯಲಿದ್ದು, ಸಂಜೆ ಅಥವಾ ಬುಧವಾರ ಹುರಿಯಾಳುಗಳ ಪಟ್ಟಿಪ್ರಕಟಗೊಳ್ಳುವ ಸಾಧ್ಯತೆ ಇದೆ. ಒಂದೇ ಕಂತಿನಲ್ಲಿ 28 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆಯಾಗುವುದು ಅನುಮಾನ ಎಂದು ಮೂಲಗಳು ತಿಳಿಸಿವೆ.

ಹಾಲಿ ಸಂಸದರು ಇರುವ 5ರಿಂದ 6 ಕ್ಷೇತ್ರಗಳಿಗೆ 2ರಿಂದ 3 ಆಕಾಂಕ್ಷಿಗಳ ಹೆಸರನ್ನು ರಾಜ್ಯ ನಾಯಕರು ಕಳುಹಿಸಿದ್ದು, ಕೆಲವು ಸಂಸದರಿಗೆ ಟಿಕೆಟ್‌ ಕೈತಪ್ಪುವ ಆತಂಕವೂ ಎದುರಾಗಿದೆ.

ಕಾಂಗ್ರೆಸ್‌ ಸಭೆ 22ರಂದು

20 ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿರುವ ಕಾಂಗ್ರೆಸ್‌ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಆದರೆ, ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಿಗದಿಯಾಗಿದ್ದ ಕೇಂದ್ರ ಚುನಾವಣಾ ಸಮಿತಿ ಸಭೆಯನ್ನು ಮುಂದೂಡಲಾಗಿದೆ.

ಇದೇ 22ರಂದು ಸಭೆ ನಡೆಸಲು ತೀರ್ಮಾನಿಸಲಾಗಿದೆ. ಮೊದಲ ಹಂತದಲ್ಲಿ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಬೇಕಿರುವುದರಿಂದ ರಾಹುಲ್‌ ಅವರೇ ಸಭೆ ಮುಂದೂಡುವಂತೆ ಸೂಚಿಸಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ತುಮಕೂರು ಕ್ಷೇತ್ರವನ್ನು ಬಿಟ್ಟುಕೊಡುವಂತೆ ಕಾಂಗ್ರೆಸ್‌ ನಾಯಕರು ಜೆಡಿಎಸ್‌ ನಾಯಕರ ಮೇಲೆ ಒತ್ತಡ ಹೇರಿದ್ದಾರೆ. ಆದರೆ, ಜೆಡಿಎಸ್‌ ನಾಯಕರು ಇದಕ್ಕೆ ಮಣಿದಿಲ್ಲ. ಈ ಕ್ಷೇತ್ರ ತಮ್ಮಿಂದ ತಪ್ಪಿಹೋಗಿದೆ ಎಂಬ ತೀರ್ಮಾನಕ್ಕೆ ಕೈನಾಯಕರು ಬಂದಿದ್ದಾರೆ. ಈ ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಕಣಕ್ಕಿಳಿಯುವುದು ಬಹುತೇಕ ಖಚಿತ.

ಈ ನಡುವೆ, ಮೈತ್ರಿಕೂಟದ ಅಭ್ಯರ್ಥಿಗಳ ಆಯ್ಕೆಯಲ್ಲಿನ ಗೊಂದಲದ ಬಗ್ಗೆ ರಾಜ್ಯ ಪ್ರವಾಸದಲ್ಲಿರುವ ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ ನಾಯಕರಿಂದ ಮಾಹಿತಿ ಪಡೆದಿದ್ದಾರೆ ಎಂದು ಮೂಲಗಳು ಹೇಳಿವೆ.

ಮಂಡ್ಯ: ನಿಖಿಲ್ ಎದುರು ಸುಮಲತಾ

ಮಂಡ್ಯ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ನಟಿ ಸುಮಲತಾ ಅಂಬರೀಷ್‌ ಪ್ರಕಟಿಸಿದ್ದಾರೆ. ಅವರ ಪರ ನಿರಂತರ ಪ್ರಚಾರ ನಡೆಸುವುದಾಗಿ ನಟರಾದ ದರ್ಶನ್‌ ಹಾಗೂ ಯಶ್ ಪ್ರಕಟಿಸಿದರು. ನಟರಾದ ಸುದೀಪ್‌ ಹಾಗೂ ಪುನೀತ್‌ ರಾಜ್‌ಕುಮಾರ್ ಸಹ ಸುಮಲತಾಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಹೇಳಿದರು.

‘ಸಿನಿಮಾದವರೆಲ್ಲ ಈಗ ಮಾತನಾಡಲು ಬಂದಿದ್ದಾರೆ. ಮಾತನಾಡಲಿ ಬಿಡಿ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಸುಮಲತಾ ಘೋಷಣೆಯ ಬೆನ್ನಲ್ಲೇ, ಕುಮಾರಸ್ವಾಮಿ ಅವರು ಸಣ್ಣ ನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು ಜತೆಗೆ ಸಭೆ ನಡೆಸಿ ಮಗನನ್ನು ಗೆಲ್ಲಿಸುವ ಬಗ್ಗೆ ಕಾರ್ಯತಂತ್ರ ರೂಪಿಸಿದರು.

ಉಡುಪಿಗೆ ಪ್ರಮೋದ್‌ ಮೈತ್ರಿ ಅಭ್ಯರ್ಥಿ!

ಮೈತ್ರಿಕೂಟದ ಒಪ್ಪಂದದ ಪ್ರಕಾರ, ಉಡುಪಿ–ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದ್ದರೂ, ಕಾಂಗ್ರೆಸ್‌ ಮುಖಂಡ ಪ್ರಮೋದ್‌ ಮಧ್ವರಾಜ್‌ ಅವರನ್ನು ಕಣಕ್ಕೆ ಇಳಿಸುವ ಬಗ್ಗೆ ದೋಸ್ತಿಗಳು ಗಂಭೀರ ಚಿಂತನೆ ನಡೆಸಿದ್ದಾರೆ.

‘ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವಂತೆ ದೇವೇಗೌಡರು ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಹಾಗೂ ಕಾಂಗ್ರೆಸ್‌ ನಾಯಕರ ಒಪ್ಪಿಗೆ ಪಡೆದು ಅಂತಿಮ ನಿರ್ಧಾರ ಪ್ರಕಟಿಸುತ್ತೇನೆ’ ಎಂದು ಪ್ರಮೋದ್‌ ಮಧ್ವರಾಜ್‌ ಸ್ಪಷ್ಟಪಡಿಸಿದರು.‌ ‘ಪ್ರಮೋದ್‌ ಅವರು ಬೇರೆಯವರೇನಲ್ಲ, ಅವರು ನಮ್ಮವರೇ. ಒಟ್ಟಾಗಿ ಕುಳಿತು ಮಾತಾಡಿ ನಿರ್ಧರಿಸುತ್ತೇವೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಶೃಂಗೇರಿಯಲ್ಲಿ ತಿಳಿಸಿದರು.

ಇಂದಿನಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಮಂಡ್ಯ, ತುಮಕೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಉಡುಪಿ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಏ. 18ರಂದು ಮತದಾನ ನಡೆಯಲಿದೆ. ಈ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇದೇ 26 ‌ಕೊನೆ ದಿನ. 27ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆಯಲು 29ರಂದು ಕೊನೆಯ ದಿನ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT