ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಷಡ್ಯಂತ್ರದಿಂದ ಸೋಲು: ವರಿಷ್ಠರಿಗೆ ದೂರು’

ಕಾಂಗ್ರೆಸ್‌ ಶಾಸಕರ ವಿರುದ್ಧ ಕ್ರಮಕ್ಕೆ ಮುನಿಯಪ್ಪ ಆಗ್ರಹ
Last Updated 1 ಜೂನ್ 2019, 20:18 IST
ಅಕ್ಷರ ಗಾತ್ರ

ನವದೆಹಲಿ: ‘ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್‌ನ ಏಳು ಜನ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದೆ. ಅವರಲ್ಲೇ ಕೆಲವರು ಷಡ್ಯಂತ್ರ ರೂಪಿಸಿ ನನ್ನ ಸೋಲಿಗೆ ಕಾರಣರಾಗಿದ್ದಾರೆ. ಈ ಕುರಿತು ಹೈಕಮಾಂಡ್‌ಗೆ ದೂರು ಸಲ್ಲಿಸಿದ್ದೇನೆ’ ಎಂದು ಮಾಜಿ ಸಂಸದ ಕೆ.ಎಚ್‌. ಮುನಿಯಪ್ಪ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಕೋಲಾರ ಜಿಲ್ಲೆಯ ಕೆಲವು ಶಾಸಕರು ವಿನಾಕಾರಣ ನನ್ನ ವಿರುದ್ಧ ಪ್ರಚಾರ ಮಾಡಿದರು. ಎಲ್ಲರೂ ಒಟ್ಟಾಗಿ ಶ್ರಮಿಸಿದ್ದರೆ ನನ್ನ ಗೆಲುವು ಸುಲಭ ಸಾಧ್ಯವಾಗುತ್ತಿತ್ತು’ ಎಂದರು.

‘ಲೋಕಸಭೆ ಚುನಾವಣೆಯಲ್ಲಿ ನನ್ನ ವಿರುದ್ಧ ಪ್ರಚಾರ ಮಾಡುವ ಮೂಲಕ ಪಕ್ಷಕ್ಕೆ ದ್ರೋಹ ಬಗೆದವರ ಬಗ್ಗೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರಿಗೆ ದೂರು ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ್ದೇನೆ. 30 ವರ್ಷಗಳಿಂದ ಹಳೆ ಮೈಸೂರು ಭಾಗದ ಕಾಂಗ್ರೆಸ್‌ ಬೆಂಬಲಿಗರು ಜನತಾದಳದ ವಿರುದ್ಧ ಕೆಲಸ ಮಾಡಿದ್ದಾರೆ. ಈಗ ಆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದು, ಫಲಿತಾಂಶದಲ್ಲಿ ವ್ಯತ್ಯಾಸ ಉಂಟಾಗಲು ಪ್ರಮುಖ ಕಾರಣವಾಯಿತು’ ಎಂದು ಅವರು ವಿಶ್ಲೇಷಿಸಿದರು.

‘ಮಿತ್ರ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಒಂದಾಗಿ ಕೆಲಸ ಮಾಡದ್ದರಿಂದ ಮೈತ್ರಿಕೂಟಕ್ಕೆ ಹಿನ್ನಡೆಯಾಯಿತು. 18 ಕ್ಷೇತ್ರಗಳಲ್ಲಿ ಗೆಲ್ಲಬಹುದಾಗಿದ್ದ ಅವಕಾಶವನ್ನು ನಾವು ಕಳೆದುಕೊಳ್ಳುವಂತಾಯಿತು. ನಮ್ಮನಮ್ಮಲ್ಲಿ ಕಚ್ಚಾಟದಿಂದ ಬೇಸತ್ತ ಜನರು ಮೋದಿ ಅಲೆಗೆ ಮನಸೋತು ಮತ ನೀಡಿದರು’ ಎಂದು ಅವರು ಹೇಳಿದರು.

ಎಲ್ಲೆಡೆ ಬಿಜೆಪಿ ಅಭ್ಯರ್ಥಿಗಳಿಗೆ ಎರಡರಿಂದ ಮೂರು ಲಕ್ಷಗಳ ಅಂತರದ ಗೆಲುವು ದೊರೆತಿರುವುದು ಸಂಶಯಕ್ಕೆ ಕಾರಣವಾಗಿದೆ. ಮತ ಯಂತ್ರಗಳ ದುರ್ಬಳಕೆ ಆಗಿರುವ ಸಾಧ್ಯತೆಯ ಕುರಿತು ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಪಕ್ಷದಿಂದ ಮನವಿ ಸಲ್ಲಿಸುವಂತೆ ವರಿಷ್ಠರಲ್ಲಿ ಕೋರಲಾಗಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT