ಬುಧವಾರ, ಮೇ 12, 2021
18 °C

ಮಹದಾಯಿ ಯೋಜನೆಯ ಅನುಷ್ಠಾನ; 20 ದಿನದೊಳಗೆ ನಿರ್ಧಾರ ಪ್ರಕಟ: ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೆಳಗಾವಿ: ಉತ್ತರ ಕರ್ನಾಟಕದ ಬಹುದಿನಗಳ ಬೇಡಿಕೆಯಾದ ಮಹದಾಯಿ ಯೋಜನೆಯ ಅನುಷ್ಠಾನ ಹಾಗೂ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಿರಂತರ ಚಟುವಟಿಕೆ ನಡೆಸುವ ಕುರಿತು 15–20 ದಿನದಲ್ಲಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಇಲ್ಲಿನ ನೆಹರು ನಗರದಲ್ಲಿ ಕನ್ನಡ ಭವನವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. 

‘ಬೆಳಗಾವಿಯೂ ಸೇರಿದಂತೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮೊದಲಿನಿಂದಲೂ ಪ್ರಾಶಸ್ತ್ಯ ಕೊಟ್ಟಿದ್ದೇನೆ. ಉತ್ತರ ಕರ್ನಾಟಕವನ್ನು ಸರ್ಕಾರ ಕಡೆಗಣಿಸಿದೆ ಎಂದು ಕೆಲವರು ಆಪಾದನೆ ಮಾಡುತ್ತಿದ್ದಾರೆ. ಇದರ ಬಗ್ಗೆ ಯಾರೂ ತೆಲೆಕೆಡಿಸಿಕೊಳ್ಳಬಾರದು. ಉತ್ತರ, ದಕ್ಷಿಣ ಎಂಬ ತಾರತಮ್ಯ ಇಲ್ಲದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತವೆ’ ಎಂದರು.

‘ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಳಗಾವಿಗೆ 2ನೇ ರಾಜಧಾನಿ ಸ್ಥಾನಮಾನ ಘೋಷಿಸಿದ್ದೆ. ವಿಧಾನ ಮಂಡಲದ ಅಧಿವೇಶನ ನಡೆಸಿದ್ದೆ. ಅದಕ್ಕೆ ಪೂರಕವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. 20 ತಿಂಗಳ ಕಾಲಾವಕಾಶದಲ್ಲಿ 19 ಬಾರಿ ಬೆಳಗಾವಿಗೆ ಭೇಟಿ ನೀಡಿದ್ದೆ’ ಎಂದು ನೆನಪಿಸಿಕೊಂಡರು.

ಮೈತ್ರಿ ಸರ್ಕಾರ ಐದು ವರ್ಷ ಅಧಿಕಾರ ನಡೆಸುತ್ತದೆ. ಯಾರೂ ಸಂಶಯ ಪಡಬೇಕಿಲ್ಲ. ಈಗ ನಡೆದಿರುವ ಕೆಲ ರಾಜಕೀಯ ಬೆಳವಣಿಗೆಗಳು ಅವಾಸ್ತವಿಕವಾಗಿದ್ದು, ಇದರಿಂದ ಸರ್ಕಾರ ಉರುಳುತ್ತದೆ ಎಂದು ಯಾರೂ ಆತಂಕ ಪಡಬೇಕಾಗಿಲ್ಲ ಎಂದರು.

‘ರೈತರ ಸಾಲ ಮನ್ನಾ ಮಾಡಿದ್ದರೂ ಕೆಲವು ಬ್ಯಾಂಕ್‌ಗಳು ಸಾಲ ವಸೂಲಾತಿಗೆ ಮುಂದಾಗಿವೆ. ರೈತರ ಆಸ್ತಿ ಜಪ್ತಿ ಮಾಡುವ ಬೆದರಿಕೆ ಹಾಕಿರುವುದು ನನಗೆ ಗೊತ್ತಾಗಿದೆ. ಅಂತಹ ಬ್ಯಾಂಕ್‌ಗಳ ಮ್ಯಾನೇಜರ್‌ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಹೇಳಿದರು.

ರಾಜ್ಯಸಭೆ ಸದಸ್ಯ, ಸಾಂಸ್ಕೃತಿಕ ಕನ್ನಡ ಭವನ ಸಮಿತಿ ಅಧ್ಯಕ್ಷ ಪ್ರಭಾಕರ ಕೋರೆ ಮಾತನಾಡಿ, ‘ಈ ಭವನಕ್ಕೆ ರಂಗಕರ್ಮಿ ಡಾ. ಏಣಿಗಿ ಬಾಳಪ್ಪ ಹೆಸರು ಇಡಲು ನಿರ್ಧರಿಸಲಾಗಿದೆ’ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮನು ಬಳಿಗಾರ್‌, ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ, ಸಂಸದ ಸುರೇಶ ಅಂಗಡಿ, ಪ್ರಕಾಶ ಹುಕ್ಕೇರಿ, ಶಾಸಕರಾದ ಸತೀಶ್‌ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ, ಅಭಯ ಪಾಟೀಲ, ಅನಿಲ ಬೆನಕೆ, ಮಹಾಂತೇಶ ಕವಟಗಿಮಠ, ಮಹಾಂತೇಶ ಕೌಜಲಗಿ, ದುರ್ಯೋಧನ ಐಹೊಳೆ, ಗಣೇಶ ಹುಕ್ಕೇರಿ, ಮೇಯರ್‌ ಬಸಪ್ಪ ಚಿಕ್ಕಲದಿನ್ನಿ, ಉಪಮೇಯರ್‌ ಮಧುಶ್ರೀ ಪೂಜಾರಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು