ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹದಾಯಿ ಯೋಜನೆ, ಕೃಷ್ಣಾ ನೀರು ಹಂಚಿಕೆ ಕುರಿತು ಶೀಘ್ರ ಚರ್ಚೆ: ರಮೇಶ್‌ ಜಾರಕಿಹೊಳಿ

Last Updated 18 ಮೇ 2020, 10:24 IST
ಅಕ್ಷರ ಗಾತ್ರ

ಬೆಳಗಾವಿ: ಪ್ರತಿ ವರ್ಷ ಬೇಸಿಗೆಯಲ್ಲಿ ಉಂಟಾಗುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮಹಾರಾಷ್ಟ್ರದ ಜತೆ ಕೃಷ್ಣಾ ನದಿ ನೀರು ವಿನಿಮಯ ಮಾಡಿಕೊಳ್ಳುವ ಕುರಿತು ಶೀಘ್ರದಲ್ಲೇ ಉನ್ನತ ಮಟ್ಟದ ಸಭೆ ನಡೆಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

ಇಲ್ಲಿನ ಕರ್ನಾಟಕ ನೀರಾವರಿ ನಿಗಮದ ಉತ್ತರ ವಲಯದ ಮುಖ್ಯ ಎಂಜಿನಿಯರ್ ಕಚೇರಿಯಲ್ಲಿ ಸೋಮವಾರ ನಡೆದ ಗಟ್ಟಿ ಬಸವಣ್ಣ ಯೋಜನೆ ಕುರಿತ ಸಭೆಗಿಂತ ಮುಂಚೆ ಅವರು ಸುದ್ದಿಗಾರರ ಜೊತೆ ಮಾತನಾಡಿದರು.

ಮಹಾರಾಷ್ಟ್ರ ಜತೆ ನೀರು ವಿನಿಮಯ ಕುರಿತು ಶೀಘ್ರದಲ್ಲಿಯೇ ಆ ರಾಜ್ಯದ ನೀರಾವರಿ ಸಚಿವರ ಜತೆ ಬೆಂಗಳೂರಿನಲ್ಲಿ ಚರ್ಚೆ ನಡೆಸಲಾಗುವುದು. ಆದರೆ ಸಭೆಯ ದಿನಾಂಕ ಇನ್ನೂ ನಿಗದಿ ಆಗಿಲ್ಲ ಎಂದರು.

ಸಭೆಯಲ್ಲಿ ಪರಸ್ಪರ ಚರ್ಚಿಸಿದ ಬಳಿಕವೇ ನೀರು ವಿನಿಮಯ ಕುರಿತು ಸರ್ಕಾರದ ತೀರ್ಮಾನ‌ ಪ್ರಕಟಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರೈತರ ಹಿತರಕ್ಷಣೆ ಮತ್ತು ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಅವರ ಆಶಯದ ಪ್ರಕಾರವೇ ಕೆಲಸ ಮಾಡಲಾಗುತ್ತಿದೆ. ರಾಜ್ಯದ ಎಲ್ಲ ಜಲಾಶಯಗಳಿಗೆ ಭೇಟಿ ನೀಡಿ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗುತ್ತಿದೆ. ಮುಂದಿನ ವಾರ ಮೈಸೂರು ಭಾಗದಲ್ಲಿ ಪ್ರವಾಸ ಮಾಡಲಿದ್ದೇನೆ. ಬೆಳಗಾವಿ ಜಿಲ್ಲೆಯ ಎಲ್ಲ 18 ವಿಧಾನಸಭಾ ಕ್ಷೇತ್ರದಲ್ಲಿ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ಚುರುಕುಗೊಳಿಸಲಾಗುತ್ತದೆ ಎಂದು ತಿಳಿಸಿದರು.

ರಸ್ತೆ ಮೂಲಕ ದೆಹಲಿಗೆ ಪ್ರಯಾಣ-ಚಿಂತನೆ

ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಜಲ ಆಯೋಗದ ಜತೆ ಚರ್ಚಿಸಿ, ಮನವರಿಕೆ ಮಾಡಬೇಕಿದೆ. ಆದರೆ ಕೋವಿಡ್ ಹಿನ್ನೆಲೆಯಲ್ಲಿ ವಿಮಾನ ಸಂಚಾರ ಸ್ಥಗಿತಗೊಳಿಸಿರುವುದರಿಂದ ರಸ್ತೆ ಮಾರ್ಗದ ಮೂಲಕವೇ ದೆಹಲಿಗೆ ತೆರಳುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ವೈದ್ಯರ ಸಲಹೆ ಮತ್ತು ಸರ್ಕಾರದ ಮಾರ್ಗಸೂಚಿ ಪಾಲಿಸಿದರೆ ಕೊರೊನಾ ತಡೆಗಟ್ಟುವುದು ದೊಡ್ಡ ಸವಾಲಲ್ಲ. ಆದ್ದರಿಂದ ಎಲ್ಲರೂ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕೋರಿದರು.

ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರು, ಜಿಲ್ಲೆಯ ಜನರ ಸಮಸ್ಯೆಗಳಿಗೆ ಅತ್ಯುತ್ತಮವಾಗಿ ಸ್ಪಂದಿಸುತ್ತಿದ್ದಾರೆ‌‌ ಎಂದರು. ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT