ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು, ಸುವ್ಯವಸ್ಥೆ ಕಾಪಾಡಲು ಕ್ರಮ ವಹಿಸಿ

ಕೋವಿಡ್-19: ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ
Last Updated 4 ಏಪ್ರಿಲ್ 2020, 14:38 IST
ಅಕ್ಷರ ಗಾತ್ರ

ಬೆಳಗಾವಿ: ‘ಲಾಕ್‌ಡೌನ್ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಬೇಕು. ಅಂತೆಯೇ ಜನರಿಗೆ ದಿನಬಳಕೆ ವಸ್ತುಗಳ ಪೂರೈಕೆಯಲ್ಲಿ ಅನಾನುಕೂಲ ಆಗದಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಸೂಚಿಸಿದರು.

ಕೋವಿಡ್- 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಪ್ರವಾಸಿಮಂದಿರದಲ್ಲಿ ಶನಿವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಮೂವರಿಗೆ ಕೋವಿಡ್–19 ಕಂಡುಬಂದಿರುವುದರಿಂದ ಸೋಂಕು ಹರಡದಂತೆ ಇನ್ನಷ್ಟು ಬಿಗಿ ಕ್ರಮಗಳನ್ನು ವಹಿಸಬೇಕು. ಕಾರ್ಮಿಕರು, ಅಲೆಮಾರಿಗಳು ಮತ್ತು ನಿರ್ಗತಿಕರಿಗೆ ವಸತಿ ಮತ್ತು ಊಟೋಪಹಾರದ ವ್ಯವಸ್ಥೆ ಕಲ್ಪಿಸಬೇಕು. ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಸಂಪೂರ್ಣ ನೆರವು ನೀಡಲಿದೆ’ ಎಂದರು.

ಹಾಲು ವಿತರಣೆ:

‘ಸರ್ಕಾರದ ಮಾರ್ಗಸೂಚಿ ಪ್ರಕಾರ ಘೋಷಿತ ಸ್ಲಂಗಳಲ್ಲಿ ಉಚಿತ ಹಾಲು ವಿತರಣೆಗೆ ಕ್ರಮ ಕೈಗೊಳ್ಳಬೇಕು. ಹಾಲು ವಿತರಣೆಗೆ ಸಂಬಂಧಿಸಿದಂತೆ ಆಯಾ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಇರುವ ಸ್ಲಂಗಳಲ್ಲಿನ ಕುಟುಂಬಗಳ ಮಾಹಿತಿ ನೀಡಿದರೆ ಕೆಎಂಎಫ್‌ನವರ ಜೊತೆ ಮಾತನಾಡಿ ಬೇಡಿಕೆ ಸಲ್ಲಿಸಲಾಗುವುದು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ‘ನೋಂದಾಯಿಸಿಲ್ಲದ ಕಾರ್ಮಿಕರಿಗೂ ಸಹಾಯಧನ ನೀಡುವ ಬಗ್ಗೆ ಪರಿಶೀಲಿಸಬೇಕು’ ಎಂದು ತಿಳಿಸಿದರು.

ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಐಸೋಲೇಷನ್ ವಾರ್ಡ್‌ನಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಮತ್ತು ಸಿಬ್ಬಂದಿಗೆ ಅಗತ್ಯವಿರುವ ಸಾಮಗ್ರಿಗಳ ಮಾಹಿತಿ ಪಡೆದರು.

ಬಿಗಿ ಕ್ರಮ ವಹಿಸಿ:

‘ನಗರ ಪ್ರದೇಶದಲ್ಲಿ ಜನಸಂಚಾರ ನಿಯಂತ್ರಿಸಲು ಇನ್ನಷ್ಟು ಬಿಗಿ ಕ್ರಮದ ಅಗತ್ಯವಿದೆ. ದಿನಸಿ ಹಾಗೂ ತರಕಾರಿ ಖರೀದಿ ನೆಪದಲ್ಲಿ ಸಾಮಾಜಿಕ ಅಂತರ ಪಾಲಿಸದಿರುವುದು ಕಂಡುಬಂದಿದೆ’ ಎಂದು ಶಾಸಕ ಅಭಯ ಪಾಟೀಲ ತಿಳಿಸಿದರು.

ಶಾಸಕ ಅನಿಲ ಬೆನಕೆ, ಎಸ್ಪಿ ಲಕ್ಷ್ಮಣ ನಿಂಬರಗಿ,ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ ಮಾತನಾಡಿದರು.

ವಿಧಾನಪರಿಷತ್‌ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಸಂಸದ ಅಣ್ಣಾಸಾಹೇಬ ಜೊಲ್ಲೆ, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್‌ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT