ವಿಧಾನಮಂಡಲ ಕಲಾ‍ಪ: ಮಲೆನಾಡಿಗೆ ₹150 ಕೋಟಿ

7
ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿಗೆ ₹91 ಕೋಟಿ

ವಿಧಾನಮಂಡಲ ಕಲಾ‍ಪ: ಮಲೆನಾಡಿಗೆ ₹150 ಕೋಟಿ

Published:
Updated:

ಬೆಳಗಾವಿ: ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ ₹150 ಕೋಟಿ ಹಾಗೂ ಬಯಲುಸೀಮೆ ಪ್ರದೇಶಾಭಿವೃದ್ಧಿ
ಮಂಡಳಿಗೆ ಈ ವರ್ಷ ₹91 ಕೋಟಿ ಅನುದಾನ ನೀಡಲಾಗುತ್ತದೆ. ಇದಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸಬೇಕು
‌ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಈ ಎರಡೂ ಮಂಡಳಿಗಳ ಪ್ರತ್ಯೇಕ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಸಭೆಯಲ್ಲಿ ಮಾತನಾಡಿದ ಶಾಸಕರಾದ ಕೆ.ಎಸ್. ಈಶ್ವರಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಹರತಾಳು ಹಾಲಪ್ಪ, ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಿಂದಾಗಿ ರಸ್ತೆಗಳು, ಶಾಲಾ ಕಟ್ಟಡ, ಅಂಗನವಾಡಿಗಳು ಶಿಥಿಲಗೊಂಡಿದ್ದು, ದುರಸ್ತಿಗೆ ಹೆಚ್ಚಿನ ಅನುದಾನ ಒದಗಿಸಬೇಕು ಎಂದು ಮನವಿ ಮಾಡಿದರು.

ಮಂಡಳಿಯಲ್ಲಿ ಪ್ರಸಕ್ತ ವರ್ಷದಲ್ಲಿ ₹52.22 ಕೋಟಿ ಅನುದಾನ ಲಭ್ಯವಿದ್ದು ಇದನ್ನು ₹150 ಕೋಟಿಗೆ ಏರಿಸಲಾಗುವುದು. ಮಂಡಳಿ ವ್ಯಾಪ್ತಿಯ ಎಲ್ಲ 88 ಶಾಸಕರ ವ್ಯಾಪ್ತಿಗೆ ತಲಾ ₹1 ಕೋಟಿ ಅನುದಾನ ನಿಗದಿಪಡಿಸಿ, ಉಳಿದ ಮೊತ್ತವನ್ನು ನನ್ನ ವಿವೇಚನೆಯಂತೆ ಹೆಚ್ಚಿನ ಸಮಸ್ಯೆ ಇರುವ ಕಡೆಗಳಲ್ಲಿ ವೆಚ್ಚ ಮಾಡಲು ಬಳಕೆ ಮಾಡಲಾಗುವುದು ಎಂದು ತಿಳಿಸಿದರು. ಇದಕ್ಕೆ ಎಲ್ಲ ಸದಸ್ಯರು ಒಪ್ಪಿಗೆ ಸೂಚಿಸಿದರು.

ಶಾಸಕ ಕೆ.ಎಸ್.ಈಶ್ವರಪ್ಪ, ‘ಹಿಂದೆ ಯಾವ ಮುಖ್ಯಮಂತ್ರಿಯೂ ಏಕಕಾಲಕ್ಕೆ ಈ ಮೊತ್ತದ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಮೊದಲ ಬಾರಿಗೆ ಇಂತಹ ಕ್ರಮಕೈಗೊಳ್ಳಲಾಗಿದೆ’ ಎಂದು ಶ್ಲಾಘಿಸಿದರು.

ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ, ಮುಜರಾಯಿ ಸಚಿವ ರಾಜಶೇಖರ ಪಾಟೀಲ ಹಾಗೂ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಆರ್ಥಿಕ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಹಾಗೂ ಯೋಜನಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಇದ್ದರು.

ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಪ್ರತಿ ಶಾಸಕರ ವ್ಯಾಪ್ತಿಗೆ ತಲಾ ₹1 ಕೋಟಿಯಂತೆ ₹ 91 ಕೋಟಿ ಕಾಮಗಾರಿಗಳಿಗೆ ಹೆಚ್ಚುವರಿ ಕ್ರಿಯಾ ಯೋಜನೆ ರೂಪಿಸಬೇಕು ಎಂದು ಸೂಚಿಸಿದರು. ಈ ವರ್ಷ ಮಂಡಳಿಗೆ ₹52 ಕೋಟಿ ಮಂಜೂರಾಗಿದ್ದು, ಈವರೆಗೆ ₹ 32 ಕೋಟಿ ಬಿಡುಗಡೆ ಮಾಡಲಾಗಿದೆ ಎಂದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !