ಬುಧವಾರ, ಫೆಬ್ರವರಿ 19, 2020
30 °C

ಮಂಗಳೂರು ಗೋಲಿಬಾರ್: ವರದಿ ಸಲ್ಲಿಕೆಗೆ ನಿರ್ದೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಮಂಗಳೂರು ಗೋಲಿಬಾರ್ ಘಟನೆಗೆ ಸಂಬಂಧಿಸಿದಂತೆ ದಾಖಲಾದ ದೂರುಗಳ ಸಂಬಂಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ವರದಿ ಸಲ್ಲಿಸಿ’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಈ ಕುರಿತಂತೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್.ದೊರೆಸ್ವಾಮಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆಗೆ ಅಂಗೀಕರಿಸಿತು.

ವಿಚಾರಣೆ ವೇಳೆ ಅಡ್ವೊಕೇಟ್‌ ಜನರಲ್ ಪ್ರಭುಲಿಂಗ ಕೆ.ನಾವದಗಿ, ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಈತನಕ ನಡೆಸಿರುವ ಪ್ರಾಥಮಿಕ ವಿಚಾರಣಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದರು. ಅಂತೆಯೇ, ‘ಘಟನೆಯ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ’ ಎಂದು ತಿಳಿಸಿದರು.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ‘ಹಿಂಸಾಚಾರ ನಡೆದಾಗ ಸುತ್ತಮುತ್ತಲ ಪ್ರದೇಶದ ಸಿಸಿಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿರುವ ದೃಶ್ಯಾವಳಿ ಸಂರಕ್ಷಿಸಡಬೇಕು. ಪೊಲೀಸರು ಪ್ರತ್ಯೇಕವಾಗಿ ವಿಡಿಯೋ ರೆಕಾರ್ಡಿಂಗ್ ಮಾಡಿದ್ದರೆ ಆ ಬಗ್ಗೆ ಪ್ರಮಾಣ ಪತ್ರ ಸಲ್ಲಿಸಬೇಕು. ಸಾರ್ವಜನಿಕರು, ಖಾಸಗಿ ವ್ಯಕ್ತಿಗಳು ಹಾಗೂ ಮಾಧ್ಯಮದವರು ವಿಡಿಯೋ ರೆಕಾರ್ಡಿಂಗ್ ಮಾಡಿದ್ದರೆ ಅದನ್ನೂ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸಾರ್ವಜನಿಕ ಪ್ರಕಟಣೆ ಹೊರಡಿಸಬೇಕು. ಮುಂದಿನ ವಿಚಾರಣೆ ವೇಳೆಗೆ, ಜಿಲ್ಲಾ ಮ್ಯಾಜಿಸ್ಟ್ರೇಟ್ (ಜಿಲ್ಲಾಧಿಕಾರಿ) ತನಿಖೆಯ ಪ್ರಗತಿ ವರದಿ ಸಲ್ಲಿಸಬೇಕು’ ಎಂದು ಸೂಚಿಸಿ ವಿಚಾರಣೆಯನ್ನು ಇದೇ 24ಕ್ಕೆ ಮುಂದೂಡಿದೆ.

ಮತ್ತೊಂದು ಅರ್ಜಿ ವಜಾ: ‘ಮಂಗಳೂರು ಗೋಲಿಬಾರ್ ಹಾಗೂ ಹಿಂಸಾಚಾರದ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ಮಹಮದ್ ಇಕ್ಬಾಲ್ ಮತ್ತು ಬಿ.ಉಮರ್ ಸಲ್ಲಿಸಿದ್ದ ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಪೀಠ ಇದೇ ವೇಳೆ ವಜಾಗೊಳಿಸಿದೆ.

‘ಇಕ್ಬಾಲ್‌ ಸಾಮಾಜಿಕ ಕಾರ್ಯಕರ್ತ ಹಾಗೂ ಸಾರ್ವಜನಿಕರ ಮೂಲಭೂತ ಹಕ್ಕುಗಳು ರಕ್ಷಣೆಗೆ ಕೆಲಸ ಮಾಡುತ್ತಿದ್ದು, ಆ ಸಂಬಂಧ‌ ಕೆಲವು ಸಂಸ್ಥೆಗಳನ್ನು ಸ್ಥಾಪಿಸಿದ್ದೇನೆ ಎಂದು ಹೇಳಿದ್ದಾರೆ. ಆದರೆ, ಯಾವ ಸಂಸ್ಥೆ, ಕಚೇರಿ ಹಾಗೂ ಸಿಬ್ಬಂದಿ ಎಂಬ ಬಗ್ಗೆ ಸರಿಯಾದ ಮಾಹಿತಿ ಮಾಡಿಲ್ಲ. ಅಂತೆಯೇ, ಉಮರ್‌ ವಿರುದ್ಧ ಐದು ಕ್ರಿಮಿನಲ್ ಕೇಸು ದಾಖಲಾಗಿವೆ. ಇಬ್ಬರೂ ತಮ್ಮ ಬಗೆಗಿನ ಮಾಹಿತಿ ಮುಚ್ಚಿಟ್ಟಿದ್ದಾರೆ’ ಎಂದು ಅರ್ಜಿ ವಜಾಕ್ಕೆ ಕಾರಣ ನೀಡಿದೆ.

ವಿಚಾರಣೆ ವೇಳೆ ಎಚ್‌.ಎಸ್.ದೊರೆಸ್ವಾಮಿ ಕೋರ್ಟ್‌ ಹಾಲ್‌ನಲ್ಲಿ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು