ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಲಸೆ ಕಾರ್ಮಿಕರಿಗೆ ಸಾಮೂಹಿಕ ಕ್ವಾರಂಟೈನ್

ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಸೂಚನೆ
Last Updated 30 ಮಾರ್ಚ್ 2020, 14:09 IST
ಅಕ್ಷರ ಗಾತ್ರ

ಬೆಳಗಾವಿ: ‘ನೆರೆಯ ರಾಜ್ಯಗಳು ಮತ್ತು ಬೆಂಗಳೂರಿನಿಂದ ವಲಸೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಅಂಥವರನ್ನು ಸರ್ಕಾರದ ನಿರ್ದೇಶನದ ಮೇರೆಗೆ ಸಾಮೂಹಿಕ ಕ್ವಾರಂಟೈನ್ ಕೇಂದ್ರಗಳಲ್ಲಿರಿಸಿ ಉಟೋಪಹಾರ ಒದಗಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಸೂಚಿಸಿದರು.

ಸೋಮವಾರ ತಾಲ್ಲೂಕುಮಟ್ಟದ ಅಧಿಕಾರಿಗಳ ಜೊತೆ ಅವರು ವಿಡಿಯೊ ಸಂವಾದ ನಡೆಸಿದರು.

‘ವಲಸೆ ಕಾರ್ಮಿಕರಿಗೆ ಆಯಾ ತಾಲ್ಲೂಕುಗಳಲ್ಲಿ ಲಭ್ಯವಿರುವ ಸರ್ಕಾರಿ ಕಟ್ಟಡ, ಸಮುದಾಯ ಭವನ, ವಸತಿನಿಲಯಗಳು, ಕಲ್ಯಾಣಮಂಟಪಗಳು ಮೊದಲಾದ ಕಡೆಗಳಲ್ಲಿ ಅವರಿಗೆ ಊಟ, ವಸತಿ ಕಲ್ಪಿಸಬೇಕು. ನೀರು, ಶೌಚಾಲಯ ಮತ್ತಿತರ ಮೂಲಸೌಕರ್ಯ ಒದಗಿಸಬೇಕು’ ಎಂದು ತಿಳಿಸಿದರು.

ಮಾಹಿತಿ ಸಂಗ್ರಹಿಸಿ: ‘ಇಂತಹ ಕೇಂದ್ರಗಳಿಗೆ ಒಬ್ಬ ನೋಡಲ್ ಅಧಿಕಾರಿ, ವೈದ್ಯಕೀಯ ತಂಡ ನಿಯೋಜಿಸಬೇಕು. ಅಗತ್ಯ ಅನುದಾನವನ್ನು ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ತಕ್ಷಣ ಬಿಡುಗಡೆ ಮಾಡಲಾಗುವುದು. ಎಲ್ಲ ವಲಸೆ ಕಾರ್ಮಿಕರ ಮೂಲ ಸ್ಥಳ, ಕೆಲಸ ಮಾಡುವ ಸಂಸ್ಥೆ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಬೇಕು’ ಎಂದು ಸೂಚಿಸಿದರು.

‘ಎರಡು ತಿಂಗಳುಗಳ ಪಡಿತರವನ್ನು ಏಪ್ರಿಲ್ ಮೊದಲ ವಾರದಿಂದಲೇ ವಿತರಿಸಬೇಕು. ಹೆಚ್ಚಿನ ಪ್ರಮಾಣದಲ್ಲಿ ಪಡಿತರ ನೀಡುತ್ತಿರುವುದರಿಂದ ದುರ್ಬಳಕೆ ಆಗದಂತೆ ಎಚ್ಚರ ವಹಿಸಬೇಕು. ದುರ್ಬಳಕೆ ಕಂಡುಬಂದಲ್ಲಿ ಸಂಬಂಧಿಸಿದವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಇದುವರೆಗೆ ಅವಶ್ಯ ಸಾಮಗ್ರಿಗಳ ಸಾಗಣೆ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶವಿತ್ತು. ಸರ್ಕಾರದ ಹೊಸ ಆದೇಶದ ಪ್ರಕಾರ ಎಲ್ಲ ಬಗೆಯ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶವಿದೆ. ಸರಕು ತುಂಬಿದ ಅಥವಾ ಖಾಲಿ ವಾಹನಗಳು ಸಂಚರಿಸಬಹುದು. ಆದರೆ ಆ ವಾಹನಗಳಲ್ಲಿ ಜನರ ಸಾಗಾಣಿಕೆ ಕಡ್ಡಾಯವಾಗಿ ನಿರ್ಬಂಧಿಸಬೇಕು’ ಎಂದು ನಿರ್ದೇಶನ ನೀಡಿದರು.

ಮರುಕಳಿಸಬಾರದು:

‘ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ನ್ಯಾಯಬೆಲೆ ಅಂಗಡಿಯವರಿಗೆ ಥಳಿಸಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು’ ಎಂದು ಎಚ್ಚರಿಕೆ ನೀಡಿದರು.

ಎಸ್ಪಿ ಲಕ್ಷ್ಮಣ ನಿಂಬರಗಿ, ‘ಜಾನುವಾರುಗಳ ಆಹಾರ ಸಾಮಗ್ರಿ, ಕೃಷಿ ಚಟುವಟಿಕೆಗೆ ಅಗತ್ಯವಿರುವ ಬೀಜ, ಗೊಬ್ಬರಗಳ ಸಾಗಣೆಗೆ ಮುಕ್ತ ಅವಕಾಶ ನೀಡಬೇಕು. ಲಾಕ್ ಡೌನ್ ನಿಯಮ‌ ಉಲ್ಲಂಘಿಸಿ‌ ವಿನಾಕಾರಣ ಸಂಚರಿಸುವವರ ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಬೇಕು’ ಎಂದು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ, ಕೃಷಿ ಇಲಾಖೆ ಜಂಟಿ‌ ನಿರ್ದೇಶಕ ಜಿಲಾನಿ ಮೊಖಾಶಿ, ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್ ಕುಮಾರ್, ಎಎಸ್ಪಿ ಅಮರನಾಥ್ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಡಿಎಚ್‌ಒ ಡಾ.ಎಸ್.ವಿ. ಮುನ್ಯಾಳ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಭಾರ ಉಪ ನಿರ್ದೇಶಕ ಗುರುನಾಥ ಕಡಬೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT