ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಕೆದಾಟು ಯೋಜನೆಗೆ ಕೇಂದ್ರ ಜಲ ಆಯೋಗದ ಒಪ್ಪಿಗೆ: ಸಚಿವ ಡಿ.ಕೆ.ಶಿವಕುಮಾರ್

ಯೋಜನೆಯ ಸಾಧ್ಯತಾ ವರದಿಗೆ ಸಹಮತ
Last Updated 27 ನವೆಂಬರ್ 2018, 10:16 IST
ಅಕ್ಷರ ಗಾತ್ರ

ಬೆಂಗಳೂರು: ಮೇಕೆದಾಟು ಯೋಜನೆಗೆ ಕೇಂದ್ರ ಜಲ‌ ಆಯೋಗದ ಒಪ್ಪಿಗೆ ಸಿಕ್ಕಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮೇಕೆದಾಟು ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ. ಇದಕ್ಕೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸುವುದು ಸರಿಯಲ್ಲ. ತಮಿಳುನಾಡಿಗೆ ಸಮಸ್ಯೆಯಾಗದ ರೀತಿ ಯೋಜನೆ ಜಾರಿಗೊಳಿಸುತ್ತೇವೆ. ಗಡಿ ಭಾಗದಲ್ಲಿ ಯೋಜನೆ ಅನುಷ್ಠಾನಕ್ಕೆ ಬರುವುದರಿಂದ ಕೃಷಿಗೆ ನೀರು ಬಳಕೆ ಮಾಡುವುದಿಲ್ಲ. ಅದೇ ಕಾಲಕ್ಕೆ ನ್ಯಾಯಾಲಯದ ಆದೇಶದಂತೆ ತಮಿಳುನಾಡಿಗೆ ಬಿಡುವ ನೀರಿನಲ್ಲಿಯೂ ಯಾವುದೇ ವ್ಯತ್ಯಾಸ ಆಗುವುದಿಲ್ಲ ಎಂದು ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

ತಮಿಳುನಾಡು ಬಯಸಿದರೆ ಮಾತುಕತೆಗೆ ನಾವು ಸದಾ ಸಿದ್ಧ. ಮುಂದಿನ ತಿಂಗಳು 6 ರಂದು ನಡೆಯುವ ಸಭೆಯಲ್ಲಿ ಮುಖ್ಯಮಂತ್ರಿಗಳ ಜತೆ ಸಮಾಲೋಚನೆ ನಡೆಸಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದರು.

ಜಲ ಆಯೋಗ ಒಪ್ಪಿಗೆ: ಮೇಕೆದಾಟು ಯೋಜನೆಯ ಸಾಧ್ಯತಾ ವರದಿಗೆ ಕೇಂದ್ರ ಜಲ ಆಯೋಗವು ಸಹಮತ ವ್ಯಕ್ತಪಡಿಸಿದ್ದು, ಸಂಪೂರ್ಣ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿ ಕಳುಹಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಇದರಿಂದ ಯೋಜನೆ ಅನುಷ್ಠಾನ ಕುರಿತ ರಾಜ್ಯ ಸರ್ಕಾರದ ಯತ್ನಕ್ಕೆ ಮೊದಲ ಜಯ ಸಿಕ್ಕಂತಾಗಿದೆ. 2013 ರಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರವು ಕಾವೇರಿ ನದಿಗೆ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಿಸಲು ತೀರ್ಮಾನಿಸಿತ್ತು. ಯೋಜನೆಗೆ ಒಪ್ಪಿಗೆ ನೀಡುವಂತೆ ಕೇಂದ್ರ ಜಲ ಆಯೋಗಕ್ಕೆ ಮನವಿ ಸಲ್ಲಿಸಿತ್ತು. ಆದರೆ, ಅಂದಿನ ತಮಿಳುನಾಡಿನ ಅಂದಿನ ಮುಖ್ಯಮಂತ್ರಿ ಜಯಲಲಿತಾ ಅವರು ಈ ಯೋಜನೆಗೆ ಅನುಮತಿ ನೀಡದಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದರು. ಹೀಗಾಗಿ ಕೇಂದ್ರ ಯಾವುದೇ ನಿರ್ಧಾರ ತೆಗೆದುಕೊಂಡಿರಲಿಲ್ಲ.

ಆರು ತಿಂಗಳ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೇಂದ್ರದ ಅನುಮತಿ ಸಿಕ್ಕರೆ ಯೋಜನೆ ಆರಂಭಿಸುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು. ಅಲ್ಲದೆ ಯೋಜನೆಯ ಸಾಧ್ಯತೆಯ ಕುರಿತು ರಾಜ್ಯ ಸರ್ಕಾರ ಜುಲೈನಲ್ಲಿ ಕೇಂದ್ರ ಜಲ ಆಯೋಗಕ್ಕೆ ವರದಿ ಸಲ್ಲಿಸಿತ್ತು. ಕಳೆದ ಸೆಪ್ಟೆಂಬರ್‌ನಲ್ಲಿ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ, ಬೆಂಗಳೂರು ಮತ್ತು ಸುತ್ತ ಮುತ್ತಲಿನ ಜಿಲ್ಲೆಗಳ ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆಯ ಅಗತ್ಯತೆ ಕುರಿತು ಮನವರಿಕೆ ಮಾಡಿಕೊಟ್ಟಿದ್ದರು. ಆದಷ್ಟು ಶೀಘ್ರ ಯೋಜನೆಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದರು.

ರಾಜ್ಯ ಸರ್ಕಾರದ ಮನವಿಯ ಹಿನ್ನೆಲೆಯಲ್ಲಿ ಇತ್ತೀಚೆಗೆ ಕೇಂದ್ರ ಜಲ ಆಯೋಗ ಸಭೆ ನಡೆಸಿ ಯೋಜನೆ ಸಾಧ್ಯತೆಯ ಬಗ್ಗೆ ರಾಜ್ಯ ಸರ್ಕಾರ ಕಳುಹಿಸಿದ ಪ್ರಾಥಮಿಕ ಮಾಹಿತಿಗೆ ಒಪ್ಪಿಗೆ ನೀಡಿದ್ದು, ಯೋಜನೆಯ ಬಗ್ಗೆ ಸಂಪೂರ್ಣ ವರದಿ ಸಿದ್ಧಪಡಿಸಿ ಕಳುಹಿಸುವಂತೆ ಸೂಚಿಸಿದೆ. ಅಲ್ಲದೇ ಈ ಯೋಜನೆಯಿಂದ ತಮಿಳುನಾಡಿಗೆ ಕಾವೇರಿಯಿಂದ ಪ್ರತಿ ವರ್ಷ ಬಿಡುವ ನೀರಿನ ಪ್ರಮಾಣದಲ್ಲಿ ಯಾವುದೇ ವ್ಯತಾಸವಾಗದಂತೆ ಯೋಜನಾ ವರದಿ ಸಿದ್ಧಪಡಿಸುವಂತೆ ಸೂಚಿಸಿದೆ ಎನ್ನಲಾಗಿದೆ.

ಯೋಜನೆ ಉದ್ದೇಶ: ಬೆಂಗಳೂರಿನಿಂದ 100 ಕಿಲೋ ಮೀಟರ್ ದೂರದಲ್ಲಿರುವ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮೇಕೆದಾಟು ಪ್ರದೇಶದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಸುಮಾರು ₹5,912 ಕೋಟಿ ವೆಚ್ಚದಲ್ಲಿ 66 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಅಣೆಕಟ್ಟೆ ಕಟ್ಟಿ, ಅಲ್ಲಿಂದ ಬೆಂಗಳೂರು, ರಾಮನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಮಾಡುವುದು ಮತ್ತು 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವುದು ಯೋಜನೆಯ ಉದ್ದೇಶವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT