ಮಂಗಳವಾರ, ಜೂಲೈ 7, 2020
28 °C

ಕರಾವಳಿ, ಒಳನಾಡಿನಲ್ಲಿ 5 ದಿನ ಭಾರಿ ಮಳೆ ಸಾಧ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಏಳುತ್ತಿರುವುದರಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಐದು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.

‘ಕರಾವಳಿಯಲ್ಲಿ ಮಂಗಳವಾರ ವ್ಯಾಪಕ ಮಳೆಯಾಗಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಹೆಚ್ಚು ಮಳೆಯಾಗಿದೆ. ಜೂ.3ರವರೆಗೆ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಬೆಂಗಳೂರಿನಲ್ಲೂ ಮುಂದಿನ ಐದು ದಿನಗಳವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ’ ಎಂದವರು ತಿಳಿಸಿದರು.

ರಾಜ್ಯದ ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡಿದ್ದು, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರ್ಗಿ, ವಿಜಯಪುರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಜು.2ರವರೆಗೆ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ. ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

ಎಲ್ಲೆಲ್ಲಿ ಎಷ್ಟು ಮಳೆ?: ಮಂಗಳೂರಿನಲ್ಲಿ ಮಂಗಳವಾರ 9 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಬ್ರಹ್ಮಾವರ, ತಿಪಟೂರು 8, ಕಾರ್ಕಳ, ಭಾಗಮಂಡಲ 7, ಮೂಡುಬಿದ್ರೆ, ಮಧುಗಿರಿ 6, ಪಣಂಬೂರು, ಸುಬ್ರಹ್ಮಣ್ಯ, ಕುಂದಾಪುರ, ಚಿಕ್ಕಮಗಳೂರು, ಶಿಡ್ಲಘಟ್ಟ, ಮಡಿಕೇರಿ 5, ಧರ್ಮಸ್ಥಳ 4, ಪುತ್ತೂರು, ಬೆಳಗಾವಿ, ಚಿಂತಾಮಣಿ 3, ಕಾರವಾರ, ಕೊಲ್ಲೂರು, ಹಾಸನ 2, ಗೋಕರ್ಣ, ಬಾಗಲಕೋಟೆ, ಹೊಸನಗರ, ಮಂಡ್ಯ, ಗೌರಿಬಿದನೂರಿನಲ್ಲಿ 1 ಸೆಂ.ಮೀ ಮಳೆಯಾಗಿದೆ.

ಧಾರಾಕಾರ ಮಳೆ: ಕೊಡಗು ಜಿಲ್ಲೆಯಾದ್ಯಂತ ಸೋಮವಾರ ರಾತ್ರಿಯಿಡೀ ಧಾರಾಕಾರ ಮಳೆಯಾಗಿದೆ‌. ಮಡಿಕೇರಿ, ಸೋಮವಾರಪೇಟೆ, ತಲಕಾವೇರಿ, ಭಾಗಮಂಡಲದಲ್ಲಿ ಜೋರು ಮಳೆ ಬಂದಿದೆ. ಹಾರಂಗಿ ಜಲಾಶಯದ ಒಳಹರಿವು 1,042 ಕ್ಯುಸೆಕ್‌ಗೆ ಏರಿಕೆಯಾಗಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ಹಾಗೂ ಶಿಕಾರಿಪುರ ತಾಲ್ಲೂಕುಗಳ ಕೆಲವೆಡೆ ಸಾಧಾರಣ ಮಳೆಯಾಗಿದೆ. ದಾವಣಗೆರೆ ಜಿಲ್ಲೆಯ ಮಲೇಬೆನ್ನೂರು ಮತ್ತು ತ್ಯಾವಣಿಗೆಯಲ್ಲಿ ತುಂತುರು ಮಳೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಕೆಲವು ಪ್ರದೇಶಗಳಲ್ಲಿ ಹಾಗೂ ಜೊಯಿಡಾದಲ್ಲಿ ಒಂದೆರಡು ದಿನಗಳ ಬಿಡುವಿನ ನಂತರ ಮಂಗಳವಾರ ಸಾಧಾರಣ ಮಳೆಯಾಯಿತು. ಬೆಳಗಾವಿ ಜಿಲ್ಲೆಯ ಖಾನಾಪುರ, ಬೈಲಹೊಂಗಲದಲ್ಲಿ ಮಳೆಯಾಗಿದೆ.

ವಿವಿಧೆಡೆ ಮುಂದುವರಿದ ಮಳೆ
ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಧಾರಾಕರ ಮಳೆಯಾಗಿದೆ. 

ಉಡುಪಿ ಜಿಲ್ಲೆಯ ಹೆಬ್ರಿ, ಕುಂದಾಪುರ, ಬೈಂದೂರು, ಕಾಪು, ಬ್ರಹ್ಮಾವರ, ಉಡುಪಿ ತಾಲ್ಲೂಕುಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಅಲ್ಲಲ್ಲಿ ಮನೆಗಳಿಗೆ ಹಾನಿಯಾಗಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 55 ಮಿ.ಮೀ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದೆ.

ಸಿಡಿಲು ಬಡಿದು ರೈತ ಸಾವು
ಆಳಂದ (ಕಲಬುರ್ಗಿ ಜಿಲ್ಲೆ)
: ತಾಲ್ಲೂಕಿನ ಭೂಸನೂರಿನಲ್ಲಿ ಮಂಗಳವಾರ ಮಧ್ಯಾಹ್ನ ಸಿಡಿಲು ಬಡಿದು ರೈತ ಸಿದ್ದರಾಮಪ್ಪ ವೀರಭದ್ರಪ್ಪ ಸುತಾರ (58) ಮೃತಪಟ್ಟಿದ್ದಾರೆ.

ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಮಳೆ ಆರಂಭಗೊಂಡಿದೆ. ಈ ಸಂದರ್ಭದಲ್ಲಿ ಮರದ ಕೆಳಗೆ ನಿಂತಾಗ ಸಿಡಿಲು ಬಡಿದಿದ್ದು, ಸಿದ್ದರಾಮಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು